ADVERTISEMENT

ರಾಜಕಾರಣಿಗಳ ತಾಳಕ್ಕೆ ಕುಣಿಯಬೇಡಿ

​ಪ್ರಜಾವಾಣಿ ವಾರ್ತೆ
Published 19 ಜನವರಿ 2012, 19:30 IST
Last Updated 19 ಜನವರಿ 2012, 19:30 IST

ಬೆಂಗಳೂರು: ಸರ್ಕಾರದ ವತಿಯಿಂದ ಕೈಗೊಳ್ಳುವ ಕಾಮಗಾರಿಗಳ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಎಲ್ಲ ಸಂದರ್ಭದಲ್ಲೂ ಅನುಮಾನ ವ್ಯಕ್ತವಾಗುವಂತಹ ವಾತಾವರಣ ನಿರ್ಮಾಣವಾಗಿದೆ. ಈ ವಿಷಯದಲ್ಲಿ ಅಧಿಕಾರಿಗಳು ರಾಜಕಾರಣಿಗಳ ತಾಳಕ್ಕೆ ತಕ್ಕಂತೆ ಕುಣಿಯಬಾರದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಎಚ್ಚರಿಕೆ ನೀಡಿದರು.

ಕಾಮಗಾರಿ ಗುಣನಿಯಂತ್ರಣ ಕಾರ್ಯಪಡೆ ವತಿಯಿಂದ ಗುರುವಾರ ವಿಕಾಸಸೌಧದಲ್ಲಿ ನಡೆದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, `ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಾಗ ಇರುವ ಹುಮ್ಮಸ್ಸು, ಅವುಗಳ ಅನುಷ್ಠಾನ ಸಂದರ್ಭದಲ್ಲೂ ಇರಬೇಕು. ಕಾಮಗಾರಿಗಳ ಗುಣಮಟ್ಟಕ್ಕೆ ಸಂಬಂಧಿಸಿದಂತೆ ರಾಜಕಾರಣಿಗಳು ಅಧಿಕಾರಿಗಳತ್ತ ಕೈತೋರಿಸಿ ತಪ್ಪಿಸಿಕೊಳ್ಳುತ್ತಾರೆ. ಇದು ಸರಿಯಲ್ಲ. ಕಾಮಗಾರಿಗಳ ಗುಣಮಟ್ಟದ ವಿಷಯದಲ್ಲಿ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ರಾಜಕಾರಣಿಗಳೂ ಪ್ರಾಮಾಣಿಕವಾಗಿರಬೇಕು~ ಎಂದರು.

ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಪರಸ್ಪರ ವಿಶ್ವಾಸದಿಂದ ಕೆಲಸ ಮಾಡಬೇಕು. ಇದರಿಂದ ಕಳಪೆ ಕಾಮಗಾರಿಗಳು ನಡೆಯದಂತೆ ತಡೆಯಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಸರ್ಕಾರದ ಎಲ್ಲ ಕಾಮಗಾರಿಗಳ ಬಗ್ಗೆಯೂ ಜನರು ಅಪನಂಬಿಕೆ ಮತ್ತು ಸಂಶಯದಿಂದ ಮಾತನಾಡುವ ಪರಿಸ್ಥಿತಿ ಮುಂದುವರಿಯುತ್ತದೆ ಎಂದರು.

ನಿರ್ಮಾಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿಯಮಗಳಲ್ಲಿ ಏಕರೂಪತೆ ತರುವ ಅಗತ್ಯವಿದೆ. ಕಾಮಗಾರಿಗಳ ಗುಣಮಟ್ಟ ನಿಯಂತ್ರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳುವಂತೆ ಕಾರ್ಯಪಡೆ ಶಿಫಾರಸು ಮಾಡಿದೆ. ಅವುಗಳನ್ನು ಜಾರಿಗೆ ತರಲು ಸರ್ಕಾರ ಪ್ರಯತ್ನಿಸಲಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ರಾಮಚಂದ್ರಗೌಡ ಮಾತನಾಡಿ, ರಾಜ್ಯದಲ್ಲಿ ನಿರ್ಮಾಣ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ. ಈ ದಿಸೆಯಲ್ಲಿ ಪ್ರತ್ಯೇಕ ಪ್ರಾಧಿಕಾರವೊಂದನ್ನು ಅಸ್ತಿತ್ವಕ್ಕೆ ತರಬೇಕು ಎಂದು ಸಲಹೆ ಮಾಡಿದರು.
ಬಂದರು ಸಚಿವ ಜೆ.ಕೃಷ್ಣ ಪಾಲೇಮಾರ್, ಕಾರ್ಯಪಡೆ ಅಧ್ಯಕ್ಷ ಸಿ.ಎಸ್.ವಿಶ್ವನಾಥ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.