ADVERTISEMENT

ರಾಜ್ಯದಲ್ಲಿ ಎರಡು ಹೊಸ ವಿಶ್ವವಿದ್ಯಾಲಯ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2011, 19:30 IST
Last Updated 16 ಸೆಪ್ಟೆಂಬರ್ 2011, 19:30 IST

ಬೆಳ್ತಂಗಡಿ:ರಾಜ್ಯದಲ್ಲಿ ಆಯುರ್ವೇದ ಮತ್ತು ಯೋಗ ವಿಜ್ಞಾನಕ್ಕೆ ಸಂಬಂಧಿಸಿದಂತೆ ಹಾಗೂ ನರ್ಸಿಂಗ್ ಮತ್ತು ಪಾರಾ ಮೆಡಿಕಲ್ ಕೋರ್ಸ್‌ಗೆ ಪ್ರತ್ಯೇಕವಾಗಿ ಹೊಸ ವಿಶ್ವವಿದ್ಯಾಲಯಗಳನ್ನು ಸದ್ಯದಲ್ಲಿಯೇ ಆರಂಭಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ. ರಾಮದಾಸ್ ತಿಳಿಸಿದರು.

ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಶುಕ್ರವಾರ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸಲಾಗವುದೆಂದರು. ಸಲು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಎಲ್ಲಾ ವೈದ್ಯಕೀಯ ಚಿಕಿತ್ಸಾ ಪದ್ಧತಿಯನ್ನೊಳಗೊಂಡ ಸಂಚಾರಿ ಘಟಕ ಆರಂಭಿಸಲಾಗುವುದು. ಧರ್ಮಸ್ಥಳದಿಂದಲೇ ಈ ನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಅವರು ಪ್ರಕಟಿಸಿದರು.

ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಪದ್ಧತಿ ಪರಿಣಾಮಕಾರಿ ಚಿಕಿತ್ಸಾ ವಿಧಾನವಾಗಿದ್ದು ಸಂಶೋಧನಾತ್ಮಕ ಅಧ್ಯಯನ ನಡೆಸಿ ಜನಜಾಗೃತಿ ಮೂಡಿಸಬೇಕಾಗಿದೆ. ನೂತನ ಪದವೀಧರರು ಇತರ ಚಿಕಿತ್ಸಾ ಪದ್ಧತಿಗಳ ಸ್ಪರ್ಧೆಯನ್ನು ಸವಾಲಾಗಿ ಸ್ವೀಕರಿಸಬೇಕು ಎಂದು ಅವರು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ, ಈಗಾಗಲೇ ಹತ್ತು ತಾಲ್ಲೂಕು ಕೇಂದ್ರಗಳಲ್ಲಿ ಪ್ರಕೃತಿ ಚಿಕಿತ್ಸಾ ಘಟಕಗಳನ್ನು ಆರಂಭಿಸಿದ್ದು ಇನ್ನೂ ಹತ್ತು ಘಟಕಗಳನ್ನು ಸದ್ಯದಲ್ಲಿಯೇ ಆರಂಭಿಸಲಾಗುವುದು ಎಂದು ಪ್ರಕಟಿಸಿದರು.

ಸರ್.ಎಂ.ವಿ. ಪ್ರಶಸ್ತಿ ಪುರಸ್ಕೃತ ಡಾ. ಹೆಗ್ಗಡೆ ಅವರನ್ನು ಸಚಿವ ರಾಮದಾಸ್ ಸನ್ಮಾನಿಸಿದರು.  ಪ್ರೊ.ಎಸ್. ಪ್ರಭಾಕರ್, ಎಸ್‌ಡಿಎಂ ಕಾಲೇಜು ಪ್ರಾಂಶುಪಾಲ ಡಾ. ಬಿ. ಯಶೋವರ್ಮ, ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ಇದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.