ADVERTISEMENT

ರಾಜ್ಯದಲ್ಲಿ ಶೀಘ್ರ ನಿಯಮಿತ ಲೋಡ್‌ಶೆಡ್ಡಿಂಗ್ ಜಾರಿ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2012, 19:30 IST
Last Updated 4 ಅಕ್ಟೋಬರ್ 2012, 19:30 IST
ರಾಜ್ಯದಲ್ಲಿ ಶೀಘ್ರ ನಿಯಮಿತ ಲೋಡ್‌ಶೆಡ್ಡಿಂಗ್ ಜಾರಿ
ರಾಜ್ಯದಲ್ಲಿ ಶೀಘ್ರ ನಿಯಮಿತ ಲೋಡ್‌ಶೆಡ್ಡಿಂಗ್ ಜಾರಿ   

ಬೆಂಗಳೂರು: ರಾಜಧಾನಿಯನ್ನು ಹೊರತುಪಡಿಸಿ ರಾಜ್ಯದ ಉಳಿದ ಕಡೆ ಸದ್ಯದಲ್ಲೇ ನಿಯಮಿತ ಲೋಡ್‌ಶೆಡ್ಡಿಂಗ್ ಜಾರಿ ಮಾಡುವುದು ಬಹುತೇಕ ಖಚಿತವಾಗಿದೆ.

ರೈತರಿಗೆ ನಿತ್ಯ ಆರು ಗಂಟೆ ಕಾಲ ತ್ರಿಫೇಸ್ ವಿದ್ಯುತ್ ಪೂರೈಸುವ ಉದ್ದೇಶದಿಂದ ನಗರ ಪ್ರದೇಶಗಳಲ್ಲಿ ಎರಡು ಗಂಟೆ ಕಾಲ ಲೋಡ್‌ಶೆಡ್ಡಿಂಗ್ ಜಾರಿ ಮಾಡಲು ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಬೆಸ್ಕಾಂ) ಉದ್ದೇಶಿಸಿದೆ.

ಸಂಜೆ 6ರಿಂದ ರಾತ್ರಿ 9 ಗಂಟೆವರೆಗೆ ವಿದ್ಯುತ್ ಬಳಸದಂತೆ ಬೆಸ್ಕಾಂ ಅಧಿಕಾರಿಗಳು ಕೈಗಾರಿಕೆಗಳಿಗೆ ಮನವಿ ಮಾಡಲಿದ್ದಾರೆ. ಒಂದು ವೇಳೆ ಇದಕ್ಕೆ ಸ್ಪಂದಿಸದಿದ್ದರೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಒಪ್ಪಿಗೆ ಪಡೆದು ಅಧಿಕೃತವಾಗಿ ಲೋಡ್‌ಶೆಡ್ಡಿಂಗ್ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಬೇಡಿಕೆ ಮತ್ತು ಪೂರೈಕೆಯನ್ನು ಆಧರಿಸಿ ಲೋಡ್‌ಶೆಡ್ಡಿಂಗ್ ಜಾರಿ ಮಾಡುವ ಕುರಿತು ತೀರ್ಮಾನ ತೆಗೆದುಕೊಳ್ಳುವ ಅಧಿಕಾರವನ್ನು ಆಯಾ ವಿದ್ಯುತ್ ಸರಬರಾಜು ಕಂಪೆನಿಗಳಿಗೆ ನೀಡಲಾಗಿದೆ. ಕಂಪೆನಿಗಳು ಈ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿವೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಸ್.ಸೆಲ್ವಕುಮಾರ್ ಅವರು `ಪ್ರಜಾವಾಣಿ~ಗೆ ತಿಳಿಸಿದರು.

ರಾಜ್ಯದ ಹಲವೆಡೆ ಮಳೆಯಾಗಿದ್ದ ಹಿನ್ನೆಲೆಯಲ್ಲಿ 3-4 ದಿನಗಳಿಂದ ವಿದ್ಯುತ್ ಪೂರೈಕೆಯಲ್ಲಿ ಹೆಚ್ಚಿನ ವ್ಯತ್ಯಯವಾಗಿಲ್ಲ. ಆದರೆ ಬುಧವಾರದಿಂದ ಮಳೆ ಕಡಿಮೆಯಾಗಿದೆ. ಬಿಸಿಲು ಹೆಚ್ಚಿರುವ ಕಾರಣ ವಿದ್ಯುತ್ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಲೋಡ್‌ಶೆಡ್ಡಿಂಗ್ ಜಾರಿಗೆ ಸಿದ್ಧತೆ ನಡೆದಿದೆ ಎಂದು ಬೆಸ್ಕಾಂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.