ಬೆಂಗಳೂರು: ‘ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ 62 ಅರೆಸೇನಾಪಡೆ ಕಂಪೆನಿಗಳನ್ನು ಕಳುಹಿಸಿಕೊಡುವಂತೆ ಕೇಂದ್ರ ಸರ್ಕಾರಕ್ಕೆ ಕೋರಲಾಗಿದೆ’ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಎಂ.ಎನ್.ರೆಡ್ಡಿ ತಿಳಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆ ವೇಳೆ ಕಾನೂನು ಸುವ್ಯವಸ್ಥೆ ಪಾಲನೆಗೆ ರಾಜ್ಯ ಪೊಲೀಸ್ ಸಿಬ್ಬಂದಿ, ರಾಜ್ಯ ಮೀಸಲು ಪೊಲೀಸ್ ಪಡೆಯ (ಕೆಎಸ್ಆರ್‌ಪಿ) 53 ಕಂಪೆನಿಗಳ ಜತೆಗೆ ಅರೆಸೇನಾ ಪಡೆಯನ್ನು ಬಳಸಿಕೊಳ್ಳಲಾಗುತ್ತಿದೆ’ ಎಂದರು.
‘ಅಲ್ಲದೇ, ಕೇರಳ ಮತ್ತು ಮಹಾರಾಷ್ಟ್ರದಿಂದ ಹೆಚ್ಚುವರಿಯಾಗಿ ಪೊಲೀಸ್ ಸಿಬ್ಬಂದಿಯನ್ನು ರಾಜ್ಯಕ್ಕೆ ಕರೆಸಿಕೊಳ್ಳಲಾಗುತ್ತಿದೆ. ಮತದಾರರಿಗೆ ಹಂಚಲು ಸಾಗಿಸುವ ಹಣ, ಮದ್ಯ ಮತ್ತಿತರ ವಸ್ತುಗಳ ಮೇಲೆ ಹೆಚ್ಚಿನ ನಿಗಾ ಇಡಲಾಗಿದೆ. ರಾಜ್ಯದ ಗಡಿ ಭಾಗಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ’ ಎಂದು ಹೇಳಿದರು.
‘ನಕ್ಸಲ್‌ಪೀಡಿತ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿನ ಕೆಲ ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದ್ದು, ಆ ಜಾಗದಲ್ಲಿ ಶಾಂತಿಯುತ ಚುನಾವಣೆಗಾಗಿ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.