ADVERTISEMENT

ವರದಿ ಸಲ್ಲಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2011, 17:25 IST
Last Updated 14 ಮಾರ್ಚ್ 2011, 17:25 IST

ಬೆಂಗಳೂರು: ರಾಜ್ಯದಲ್ಲಿ ಮಲ ಹೊರುವ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಸಂಬಂಧ ಪರಿಶೀಲನೆ ನಡೆಸಿ ಮಾರ್ಚ್ 28ರೊಳಗೆ ವರದಿ ಸಲ್ಲಿಸುವಂತೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಹೈಕೋರ್ಟ್ ಸೋಮವಾರ ಆದೇಶಿಸಿದೆ.

ಮಲ ಹೊರುವ ಪದ್ಧತಿ ಇನ್ನೂ ಜೀವಂತ ಇರುವುದನ್ನು ಪ್ರಶ್ನಿಸಿ ಹಿರಿಯ ವಕೀಲ ಆರ್.ಎನ್.ನರಸಿಂಹಮೂರ್ತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ಮತ್ತು ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ವಿಭಾಗೀಯ ಪೀಠ, ಕಾನೂನು ಸೇವೆಗಳ ಪ್ರಾಧಿಕಾರವು ಸಕಾಲಕ್ಕೆ ವರದಿ ಸಲ್ಲಿಸದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯನ್ನು ನ್ಯಾಯಾಲಯಕ್ಕೆ ಕರೆಸಿದ ಪೀಠ, ವರದಿ ಸಲ್ಲಿಕೆಯಲ್ಲಿ ವಿಳಂಬ ಆಗಿರುವ ಬಗ್ಗೆ ಪ್ರಶ್ನಿಸಿತು.ನ್ಯಾಯಾಂಗದ ಸಿಬ್ಬಂದಿಯೇ ನ್ಯಾಯಾಲಯದ ಆದೇಶ ಪಾಲಿಸದಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತು. ಆಗ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಮಾ. 16ರಂದು ಈ ಸಂಬಂಧ ಸಭೆ ನಿಗದಿಯಾಗಿದ್ದು, ಬಳಿಕ ವರದಿ ನೀಡುವುದಾಗಿ ತಿಳಿಸಿದರು.

ಮಾ. 28ರೊಳಗೆ ವರದಿ ಸಲ್ಲಿಸುವಂತೆ ಗಡುವು ವಿಧಿಸಿದ ನ್ಯಾ.ಕೇಹರ್, ಮಾ. 30ರಂದು ಪ್ರಕರಣದ ವಿಚಾರಣೆ ನಡೆಸುವುದಾಗಿ ಪ್ರಕಟಿಸಿದರು. ವಿಚಾರಣೆ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಮಧ್ಯಂತರ ಆದೇಶವೊಂದನ್ನು ನೀಡಬೇಕೆಂಬ ಅರ್ಜಿದಾರರ ಪರ ವಕೀಲ ಪ್ರೊ.ರವಿವರ್ಮಕುಮಾರ್ ಬೇಡಿಕೆಯನ್ನು ಮಾನ್ಯ ಮಾಡಿದ ನ್ಯಾಯಪೀಠ, ಮಾ.30ರಂದೇ ಮಧ್ಯಂತರ ಆದೇಶ ನೀಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.