ADVERTISEMENT

ವರ್ಗಾವಣೆ ದಂಧೆ ಜೋರು: ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2013, 19:59 IST
Last Updated 6 ಸೆಪ್ಟೆಂಬರ್ 2013, 19:59 IST

ಬೆಂಗಳೂರು: ಆಡಳಿತ ಯಂತ್ರದ ಶಕ್ತಿ ಕೇಂದ್ರವಾದ ವಿಧಾನಸೌಧದಲ್ಲಿ ವರ್ಗಾವಣೆಯ ಭರಾಟೆ ಜೋರಾಗಿದೆ. ಹಿಂದಿನ ಬಿಜೆಪಿ ಸರ್ಕಾರಕ್ಕಿಂತಲೂ ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ ಹೆಸರಿನಲ್ಲಿ ನಡೆಯುತ್ತಿರುವ ಹಣದ ವಹಿವಾಟು ಜಾಸ್ತಿಯಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರೆಲ್ಲ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ. ಅಭಿವೃದ್ಧಿ ಕಾರ್ಯಗಳತ್ತ ಗಮನಹರಿಸುತ್ತಿಲ್ಲ. ಉಸ್ತುವಾರಿ ಸಚಿವರು ಅತಿವೃಷ್ಟಿ, ಅನಾವೃಷ್ಟಿ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಸೂಕ್ತ ಪರಿಹಾರ ನೀಡಿಲ್ಲ ಎಂದು ಟೀಕಿಸಿದರು.

ಅತಿವೃಷ್ಟಿ, ಅನಾವೃಷ್ಟಿಯಿಂದ ಆರು ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. ಸುಮಾರು 80 ತಾಲ್ಲೂಕುಗಳಲ್ಲಿ ಬರ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚೀನಾ ಪ್ರವಾಸಕ್ಕೆ ತೆರಳುವ ಮುನ್ನ ಪರಿಹಾರ ಹಣ ಬಿಡುಗಡೆ ಮಾಡಬೇಕು. ಬರ ಪರಿಸ್ಥಿತಿ ನಿಭಾಯಿಸಲು ಸಚಿವರಿಗೆ ಸೂಚಿಸಬೇಕು ಎಂದು ಆಗ್ರಹಿಸಿದರು.  ರಾಜ್ಯದಲ್ಲಿನ ಅಡಿಕೆ ಮತ್ತು ತೆಂಗು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಕೊಳೆ ರೋಗದಿಂದಾಗಿ 2.23 ಲಕ್ಷ ಎಕರೆ ಪ್ರದೇಶದಲ್ಲಿ ಅಡಿಕೆ ಬೆಳೆ ಹಾನಿಯಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಒಂದು ಎಕರೆ ಬೆಳೆ ನಷ್ಟಕ್ಕೆ 12 ಸಾವಿರ ರೂಪಾಯಿ ಪರಿಹಾರ ನೀಡಿಲ್ಲ. ಪರಿಹಾರ ನೀಡಲು ರೂ 73 ಕೋಟಿ ಬಿಡುಗಡೆ ಮಾಡಬೇಕು. ಆದರೆ, ರೂ 8.46 ಕೋಟಿ ಮಾತ್ರ ಬಿಡುಗಡೆ ಮಾಡಿದ್ದಾರೆ ಎಂದು ಟೀಕಿಸಿದರು.

ಅಭದ್ರ: `ವಿರೋಧ ಪಕ್ಷದ ನಾಯಕ ಸ್ಥಾನವನ್ನು ಬೇರೆ ಸಮುದಾಯದವರಿಗೆ ನೀಡಬೇಕು ಎಂಬ ಉದ್ದೇಶದಿಂದ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದೆ. ಆದರೆ, ಈಗ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ನೋಡಿದರೆ ಈ ಸ್ಥಾನವೇ ಅಭದ್ರವಾಗಿದೆ' ಎಂದರು.

`ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಿಜೆಪಿಗೆ ವಾಪಸ್ ಬಂದರೆ ಜೆಡಿಎಸ್ ವಿರೋಧ ಪಕ್ಷದ ಸ್ಥಾನಮಾನ ಕಳೆದುಕೊಳ್ಳಲಿದೆ. ವಿರೋಧ ಪಕ್ಷದ ನಾಯಕನ ಸ್ಥಾನ ಹೋಗುತ್ತದೆ ಎಂದು ಗೊತ್ತಾದ ನಂತರ ಬೇರೆಯವರಿಗೆ ನೀಡಿದರು ಎಂಬ ಅಪವಾದ ಬರುವುದು ಬೇಡ ಎಂಬ ಕಾರಣಕ್ಕೆ ಸುಮ್ಮನಿದ್ದೇನೆ' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.