ADVERTISEMENT

ವಿದ್ಯುತ್: ಕೇಂದ್ರಕ್ಕೆ ರಾಜ್ಯದ ಮೊರೆ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2011, 19:30 IST
Last Updated 23 ಅಕ್ಟೋಬರ್ 2011, 19:30 IST

ಬೆಂಗಳೂರು: `ರಾಜ್ಯಕ್ಕೆ ಅಗತ್ಯವಿರುವಷ್ಟು ವಿದ್ಯುತ್ ಉತ್ಪಾದಿಸಲು ಕೇಂದ್ರ ಸರ್ಕಾರ ಸಂಪೂರ್ಣ ನೆರವು ನೀಡಬೇಕು. ಇಲ್ಲವಾದಲ್ಲಿ ಕೊರತೆ ಇರುವ ವಿದ್ಯುತ್ತನ್ನು ಕೇಂದ್ರ ಜಾಲದ ಮೂಲಕ ಒದಗಿಸಬೇಕು~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, `ಉಷ್ಣ ವಿದ್ಯುತ್ ಸ್ಥಾವರಗಳ ಮೂಲಕ 8,290 ಮೆಗಾವಾಟ್ ವಿದ್ಯುತ್ ಉತ್ಪಾದನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಆದರೆ, ಕೇಂದ್ರ ಸರ್ಕಾರವು ಕಲ್ಲಿದ್ದಲು ವಲಯಗಳನ್ನು (ಬ್ಲಾಕ್) ಮಂಜೂರು ಮಾಡದಿರುವುದರಿಂದ ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆ ಕಾಮಗಾರಿಗೆ ಚಾಲನೆ ನೀಡುವುದು ಅಸಾಧ್ಯವಾಗಿದೆ~ ಎಂದರು.

`ವಿದ್ಯುತ್ ಸ್ಥಾವರಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಈಗಾಗಲೇ ವಿವಿಧ ಸಂಸ್ಥೆಗಳ ಜೊತೆ ಒಪ್ಪಂದ ಮಾಡಿಕೊಂಡಿದೆ. ಕಲ್ಲಿದ್ದಲು ವಲಯಗಳನ್ನು ಮಂಜೂರು ಮಾಡುವಂತೆ ಹಲವು ಬಾರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಆದರೆ, ರಾಜ್ಯ ಸರ್ಕಾರ ಎಷ್ಟೇ ಮನವಿ ಮಾಡಿದರೂ ಕೇಂದ್ರ ಅವುಗಳನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ~ ಎಂದು ದೂರಿದರು.

`ಶುಕ್ರವಾರ ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಅಭಿವೃದ್ಧಿ ಮಂಡಳಿ (ಎನ್‌ಡಿಸಿ) ಸಭೆಯಲ್ಲಿ ವಿದ್ಯುತ್ ಉತ್ಪಾದನಾ ಯೋಜನೆಗಳಿಗೆ ಪೂರಕವಾಗಿ ಕಲ್ಲಿದ್ದಲು ವಲಯಗಳನ್ನು ಮಂಜೂರು ಮಾಡದಿರುವ ಕೇಂದ್ರದ ನಿಲುವಿನಿಂದ ಆಗಿರುವ ತೊಂದರೆಗಳ ಬಗ್ಗೆ ಗಮನ ಸೆಳೆದಿದ್ದೇನೆ. 12ನೇ ಪಂಚವಾರ್ಷಿಕ ಯೋಜನೆಯಲ್ಲಿ ರಾಜ್ಯದ 15 ಯೋಜನೆಗಳಿಗೆ ಆದ್ಯತೆ ನೀಡುವಂತೆಯೂ ಮನವಿ ಮಾಡಿದ್ದೇನೆ~ ಎಂದರು.

ರಾಜಕೀಯ ಬೇಡ: ಬರ ಪರಿಹಾರ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, `ಬರಪೀಡಿತ ತಾಲ್ಲೂಕುಗಳಲ್ಲಿ ಪರಿಹಾರ ಕಾಮಗಾರಿ ಕೈಗೊಳ್ಳಲು ಅಗತ್ಯವಿರುವ ಎಲ್ಲ ಕ್ರಮಗಳನ್ನೂ ಸರ್ಕಾರ ಕೈಗೊಂಡಿದೆ~ ಎಂದರು.

`ಬರ ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ಬದ್ಧವಾಗಿದೆ. ಬರ ಪರಿಹಾರ ಕಾಮಗಾರಿಗಳನ್ನು ತಕ್ಷಣವೇ ಕೈಗೆತ್ತಿಕೊಳ್ಳುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ವಿಷಯದಲ್ಲಿ ವಿರೋಧ ಪಕ್ಷದ ನಾಯಕರು ರಾಜಕೀಯ ಮಾಡುವುದು ಬೇಡ~ ಎಂದು ತಿರುಗೇಟು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.