ADVERTISEMENT

ವಿದ್ವತ್‌ ಮೇಲಿನ ಹಲ್ಲೆ ಪ್ರಕರಣ: ಏಳನೇ ಆರೋಪಿಗೆ ಜಾಮೀನು

ಆರೋಪಿ ಅಭಿಷೇಕ್‌ ಮುರಳಿ

​ಪ್ರಜಾವಾಣಿ ವಾರ್ತೆ
Published 17 ಮೇ 2018, 14:12 IST
Last Updated 17 ಮೇ 2018, 14:12 IST
ವಿದ್ವತ್‌ ಮೇಲಿನ ಹಲ್ಲೆ ಪ್ರಕರಣ: ಏಳನೇ ಆರೋಪಿಗೆ ಜಾಮೀನು
ವಿದ್ವತ್‌ ಮೇಲಿನ ಹಲ್ಲೆ ಪ್ರಕರಣ: ಏಳನೇ ಆರೋಪಿಗೆ ಜಾಮೀನು   

ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣದ ಏಳನೇ ಆರೋಪಿ ಅಭಿಷೇಕ್ ಮುರಳಿಗೆ ಹೈಕೋರ್ಟ್ ಜಾಮೀನು ನೀಡಿದೆ.

ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಗುರುವಾರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

'ಎರಡು ಲಕ್ಷ ರೂಪಾಯಿ ಮೊತ್ತದ ಬಾಂಡ್ ಹಾಗೂ ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ನೀಡಬೇಕು. ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು' ಎಂದು ಷರತ್ತು ವಿಧಿಸಲಾಗಿದೆ.

ADVERTISEMENT

ಅರ್ಜಿದಾರರ ಪರ ವಕೀಲ ಚಂದ್ರಮೌಳಿ ಅವರು, 'ಅರ್ಜಿದಾರರ ವಿರುದ್ಧ ಯಾವುದೇ ಪ್ರಬಲ ಸಾಕ್ಷಿಗಳಿಲ್ಲ. ಗಲಾಟೆ ನಡೆದ ಸಂದರ್ಭದಲ್ಲಿ ಅಭಿಷೇಕ್ ಯಾವುದೇ ಆಯುಧ ಹೊಂದಿರಲಿಲ್ಲ. ಪೋಲಿಸರು ಹೊರಿಸಿರುವ ಆರೋಪಗಳು ನಿರಾಧಾರವಾಗಿವೆ. ಈಗಾಗಲೇ 90 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದ್ದರಿಂದ ಜಾಮೀನು ನೀಡಬೇಕು' ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

'ಈ ಆರೋಪಿಯನ್ನು ನಟ ಅಂಬರೀಷ್ ಅವರ ಮಗ ಅಭಿಷೇಕ್ ಹಲ್ಲೆ ನಡೆಸಿದಾಗ ಗುರುತಿಸಿದ್ದರು. ಆರೋಪಿ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇದೆ. ಆದ್ದರಿಂದ ಜಾಮೀನು ನೀಡಬಾರದು' ಎಂದು ಪ್ರಾಸಿಕ್ಯೂಷನ್ ಪರ ವಕೀಲ ಎಂ.ಎಸ್. ಶ್ಯಾಮಸುಂದರ್ ನ್ಯಾಯಪೀಠಕ್ಕೆ ಮನವಿ ಮಾಡಿದರು.

ಆದರೆ, ನ್ಯಾಯಪೀಠ ಇದನ್ನು ಮಾನ್ಯ ಮಾಡಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.