ADVERTISEMENT

ವಿಧಾನಸೌಧಕ್ಕೆ ಮುತ್ತಿಗೆ ಯತ್ನ: ರೈತರ ಬಂಧನ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2012, 19:30 IST
Last Updated 25 ಏಪ್ರಿಲ್ 2012, 19:30 IST

ಬೆಂಗಳೂರು: ಬರ ಪರಿಹಾರ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಬುಧವಾರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ರೈತರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು. 

ನಗರ ರೈಲು ನಿಲ್ದಾಣದ ಮುಂಭಾಗದಿಂದ ಬೆಳಿಗ್ಗೆ ಪ್ರತಿಭಟನಾ ಜಾಥಾ ಆರಂಭಿಸಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನದ ಬಳಿ ಧರಣಿ ಕುಳಿತರು. ರಾಜ್ಯದ ಹಲವು ಭಾಗಗಳಿಂದ ಬಂದಿದ್ದ ರೈತರು ಮಳೆಯ ನಡುವೆಯೂ ಪ್ರತಿಭಟನೆಯಲ್ಲಿ ಭಾಗವಹಿಸಿ ಹೋರಾಟದ ಕಾವನ್ನು ಹೆಚ್ಚಿಸಿದರು.

ರಾಜ್ಯದ ಮುಖ್ಯಮಂತ್ರಿಗಳಾಗಲಿ, ಸಂಬಂಧಪಟ್ಟ ಸಚಿವರಾಗಲಿ ಪ್ರತಿಭಟನಾ ಸ್ಥಳಕ್ಕೆ ಬಾರದೇ ಹೋದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಬೆದರಿಕೆ ಹಾಕಿದ್ದರು.

ಆದರೆ, ಮಧ್ಯಾಹ್ನ ಮೂರು ಗಂಟೆಯಾದರೂ ಸ್ಥಳಕ್ಕೆ ಸಚಿವರ‌್ಯಾರೂ ಭೇಟಿ ನೀಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಅಡ್ಡಗಟ್ಟಿದ್ದರಿಂದ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಇದರಿಂದ ಪೊಲೀಸರು ಪ್ರತಿಭಟನಾನಿರತ ರೈತರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ `ರಾಜ್ಯದ ಹಲವು ಭಾಗಗಳಲ್ಲಿ ಬರಗಾಲ ಆವರಿಸಿದ್ದು ಇದರಿಂದ ರೈತರು ತತ್ತರಿಸಿ ಹೋಗಿದ್ದಾರೆ.
 
ಇದಕ್ಕೆ ಪರಿಹಾರ ಯೋಜನೆಗಳನ್ನು ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೃಷಿ ಚಟುವಟಿಕೆಗಳಿಗಾಗಿ ರೈತರು ಸುಮಾರು 50 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಿ ನಷ್ಟ ಅನುಭವಿಸಿದ್ದಾರೆ. ಆದರೆ, ಬರಗಾಲದಿಂದ ರೈತರು ನಾಲ್ಕು ಸಾವಿರ ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದಾರೆ ಎಂದು ಸರ್ಕಾರ ಹೇಳುತ್ತಿರುವುದು ಖಂಡನೀಯ~ ಎಂದು ಆಕ್ರೋಶ ವ್ಯಕ್ತಪಡಿಸಿದರು.

`ರಾಜ್ಯದ 24 ಜಿಲ್ಲೆಗಳಲ್ಲಿ 123 ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಸರ್ಕಾರ ಬರಪೀಡಿತ ಎಂದು ಅಂದಾಜು ಮಾಡಿದ್ದು, 75 ಲಕ್ಷ ಹೆಕ್ಟೇರ್ ಪ್ರದೇಶಗಳಲ್ಲಿ ಬಿತ್ತನೆ ಕಾರ್ಯ ನಡೆದಿತ್ತು. ಆದರೆ, ಮಳೆ ಕೊರತೆಯಿಂದಾಗಿ ಸುಮಾರು 25 ಲಕ್ಷ ಹೆಕ್ಟೇರ್ ಪ್ರದೇಶಗಳಲ್ಲಿ ಬೆಳೆ ಸಂಪೂರ್ಣ ಹಾಳಾಗಿದೆ. ಈ ಭಾಗಗಳಲ್ಲಿ ಬೋರ್‌ವೆಲ್‌ಗಳು ಬತ್ತಿ ಹೋಗಿದ್ದು, ಜನ ಹಾಗೂ ಜಾನುವಾರುಗಳು ಕುಡಿಯಲು ನೀರಿಲ್ಲದೆ ಗುಳೆ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ~ ಎಂದರು.

`ಅರಿಶಿನ, ಶುಂಠಿ, ಕೊಬ್ಬರಿ, ದಾಳಿಂಬೆ, ಅಡಿಕೆ , ರೇಷ್ಮೆ, ಈರುಳ್ಳಿ ಸೇರಿದಂತೆ ವಿವಿಧ ಬೆಳೆಗಳನ್ನು ಕಷ್ಟ ಬಿದ್ದು ಬೆಳೆದ ರೈತರು, ಅದಕ್ಕೆ ಬೆಂಬಲ ಬೆಲೆ ಸಿಗದೇ ಆತ್ಮಹತ್ಯೆ ದಾರಿ ಹಿಡಿಯುವಂತಾಗಿದೆ. ಸರ್ಕಾರ ಈ ಎಲ್ಲಾ ಸಮಸ್ಯೆಗಳನ್ನು ಅರಿತು ಮಾನವೀಯತೆಯ ದೃಷ್ಟಿಯಿಂದ ಸ್ಪಂದಿಸಬೇಕು~ ಎಂದು ಅವರು ಆಗ್ರಹಿಸಿದರು.

`ಬರಪೀಡಿತ ಪ್ರದೇಶದ ರೈತರ ನಷ್ಟಕ್ಕೆ ಪರ್ಯಾಯವಾಗಿ ಅವರಿಗೆ ಅಂದಾಜು ಬೆಲೆ ನೀಡಬೇಕು ಅಥವಾ ರೈತರ  ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಿ ಹೊಸದಾಗಿ ಸಾಲ ನೀಡಬೇಕು. ಅಲ್ಲದೇ ಬರಪರಿಹಾರಕ್ಕೆ ಶಾಶ್ವತ ಯೋಜನೆಗಳನ್ನು ಜಾರಿ ಮಾಡಬೇಕು~ ಎಂದು ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರವನ್ನು ಒತ್ತಾಯಿಸಿದರು.

ರೈತ ಮುಖಂಡ ಕಡಿದಾಳ್ ಶಾಮಣ್ಣ ಮಾತನಾಡಿ `ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಕೃಷಿ ಬಜೆಟ್ ಎಂದು ಒಂದು ಲಕ್ಷ ಕೋಟಿ ರೂಪಾಯಿ ನೀಡಿರುವುದಾಗಿ ಸರ್ಕಾರ ಹೇಳುತ್ತದೆ. ಆದರೆ, ರೈತರಿಗೆ ಯಾವುದೇ ರೀತಿಯಲ್ಲೂ ಅದು ನೆರವಾಗಿಲ್ಲ. ಸರ್ಕಾರ ಶೀಘ್ರವೇ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಎಲ್ಲಾ ರೈತರು ನಮ್ಮ ನಮ್ಮ ಊರುಗಳಲ್ಲಿ ರಸ್ತೆ ತಡೆ ಮಾಡುತ್ತೇವೆ~ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಕೃಷಿ ಇಲಾಖೆಯ ಕಾರ್ಯದರ್ಶಿ ಬಾಬುರಾವ್ ಮುಡುಬಿ `ರೈತರ ಬೇಡಿಕೆಗಳಿಗೆ ಸ್ಪಂದಿಸಲು ಸರ್ಕಾರ ಸಿದ್ಧವಿದೆ. ಈ ಸಂಬಂಧ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು. ಗುರುವಾರ ಬೆಳಿಗ್ಗೆ ಮುಖ್ಯಮಂತ್ರಿ ಅವರೊಡನೆ ಚರ್ಚಿಸಿ ಸಭೆ ನಡೆಸುವ ದಿನಾಂಕವನ್ನು ನಿಗದಿಪಡಿಸುತ್ತೇನೆ~ ಎಂದು ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ. 

 ರೈತ ಮುಖಂಡರಾದ ಬಸವರಾಜಪ್ಪ, ರಮೇಶ್ ಗಡಗಣಪ್ಪ, ಮಂಜುನಾಥ ಗೌಡ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸಂಚಾರ ಸ್ಥಗಿತ : ರೈತರು ನಡೆಸಿದ ಪ್ರತಿಭಟನಾ ಜಾಥಾದಿಂದ ನಗರದ ಹಲವೆಡೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡು ವಾಹನ ಸವಾರರು ಪರದಾಡುವಂತಾಯಿತು. ಮೆಜೆಸ್ಟಿಕ್, ಕೆ.ಆರ್ ವೃತ್ತ, ಮೈಸೂರು ಬ್ಯಾಂಕ್ ವೃತ್ತ, ನೃಪತುಂಗಾ ರಸ್ತೆ, ಶೇಷಾದ್ರಿ ರಸ್ತೆ, ಅರಮನೆ ರಸ್ತೆ, ಅಂಬೇಡ್ಕರ್ ವೀದಿ, ಆನಂದ್ ರಾವ್ ವೃತ್ತ, ನಗರ ರೈಲು ನಿಲ್ದಾಣದ ಸುತ್ತ ಮುತ್ತಲ ಪ್ರದೇಶಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.