ADVERTISEMENT

ವಿಧಾನ ಮಂಡಲದ ವಜ್ರಮಹೋತ್ಸವಕ್ಕೆ ಕ್ಷಣಗಣನೆ

​ಪ್ರಜಾವಾಣಿ ವಾರ್ತೆ
Published 16 ಜೂನ್ 2012, 19:30 IST
Last Updated 16 ಜೂನ್ 2012, 19:30 IST
ವಿಧಾನ ಮಂಡಲದ ವಜ್ರಮಹೋತ್ಸವಕ್ಕೆ ಕ್ಷಣಗಣನೆ
ವಿಧಾನ ಮಂಡಲದ ವಜ್ರಮಹೋತ್ಸವಕ್ಕೆ ಕ್ಷಣಗಣನೆ   

ಬೆಂಗಳೂರು: ವಿಧಾನ ಮಂಡಲದ ವಜ್ರಮಹೋತ್ಸವ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ.  ಸೋಮವಾರ ಬೆಳಿಗ್ಗೆ 11ಕ್ಕೆ ವಿಧಾನಸಭೆಯ ಸಭಾಂಗಣದಲ್ಲಿ ನಡೆಯುವ ಸಮಾರಂಭಕ್ಕೆ ಭರದ ಸಿದ್ಧತೆಗಳು ನಡೆದಿವೆ.

ರಾಜ್ಯ ವಿಧಾನ ಮಂಡಲಕ್ಕೆ 60 ವರ್ಷ ತುಂಬಲಿರುವ ಹಿನ್ನೆಲೆಯಲ್ಲಿ ವಜ್ರ ಮಹೋತ್ಸವ ಸಮಾರಂಭ ನಡೆಯಲಿದೆ. ಇದೇ ಸಂದರ್ಭದಲ್ಲಿ ವಿಧಾನ ಮಂಡಲದ ಪ್ರಮುಖ ಘಟನಾವಳಿಗಳ ಕುರಿತ ಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಭಾನುವಾರ ಸಂಜೆ 6ಕ್ಕೆ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಚಿತ್ರ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.

 ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಸ್ಪೀಕರ್ ಕಚೇರಿ ವತಿಯಿಂದ ವಜ್ರ ಮಹೋತ್ಸವ ಸಮಾರಂಭಕ್ಕೆ ಸಿದ್ಧತೆ ನಡೆದಿದೆ. ಸಭಾಂಗಣವನ್ನು ಸಿಂಗರಿಸಲಾಗಿದೆ. ಸಮಾರಂಭದ ಸಿದ್ಧತೆಗಳ ಬಗ್ಗೆ ವಿಧಾನಸಭೆಯ ಸ್ಪೀಕರ್ ಕೆ.ಜಿ.ಬೋಪಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸಚಿವ ಎಸ್.ಸುರೇಶ್‌ಕುಮಾರ್ ಶನಿವಾರ ಪರಿಶೀಲಿಸಿದರು.

ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುರೇಶ್‌ಕುಮಾರ್, ಮೊದಲ ಅಧಿವೇಶನ ಸಂದರ್ಭದಲ್ಲಿ ವಿಧಾನ ಸಭೆಯ ಸದಸ್ಯರಾಗಿದ್ದ ವಸಂತರಾವ್ ಎಲ್.ಪಾಟೀಲ, ಮುಲ್ಕಾ ಗೋವಿಂದ ರೆಡ್ಡಿ, ಯು.ಎಂ.ಮಾದಪ್ಪ, ಡಿ.ಜಿ.ತಿಮ್ಮೇಗೌಡ ಹಾಗೂ ಅಂಬದಾಸ ರಾವ್ ಅವರನ್ನು ಸನ್ಮಾನಿಸಲಾಗುವುದು ಎಂದರು.

ಮಾಜಿ ಸ್ಪೀಕರ್‌ಗಳಾದ ಡಿ.ಬಿ.ಚಂದ್ರೇಗೌಡ, ಬಿ.ಜಿ.ಬಣಕಾರ, ವಿ.ಎಸ್.ಕೌಜಲಗಿ, ಎಂ.ವಿ.ವೆಂಕಟಪ್ಪ, ಕೃಷ್ಣ, ಹಿಂದೆ ಸ್ಪೀಕರ್ ಆಗಿದ್ದು, ಹಾಲಿ ಸಚಿವರಾಗಿರುವ ಜಗದೀಶ ಶೆಟ್ಟರ್, ಮಾಜಿ ಮುಖ್ಯಮಂತ್ರಿಗಳಾದ ಎಂ.ವೀರಪ್ಪ ಮೊಯಿಲಿ, ಧರ್ಮಸಿಂಗ್, ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮದಲ್ಲಿ ಪಾಳ್ಗೊಳ್ಳಲಿದ್ದಾರೆ.

ಮಾಜಿ ಮುಖ್ಯಮಂತ್ರಿಯಾದ, ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ವಿದೇಶ ಪ್ರವಾಸದಲ್ಲಿರುವುದರಿಂದ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ. ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ದೇವೇಗೌಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಕಾರಣಾಂತರಗಳಿಂದ ಸಮಾರಂಭದಲ್ಲಿ ಭಾಗವಹಿಸಲು ಆಗುವುದಿಲ್ಲ ಎಂದು ತಿಳಿಸಿರುವುದಾಗಿ ಸುರೇಶ್‌ಕುಮಾರ್ ಹೇಳಿದರು.

ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ವಜ್ರ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ವಿಧಾನ ಸಭೆಯ ಸಭಾಂಗಣದಲ್ಲಿ 260 ಸದಸ್ಯರಿಗೆ ಆಸನಗಳಿವೆ. ವಿಧಾನ ಪರಿಷತ್ ಸದಸ್ಯರೂ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ಹೆಚ್ಚುವರಿಯಾಗಿ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಮೊದಲ ಸಾಲಿನಲ್ಲಿ ಮುಖ್ಯಮಂತ್ರಿ ಆಸನದ ಪಕ್ಕದಲ್ಲೇ ಮಾಜಿ ಮುಖ್ಯಮಂತ್ರಿಗಳಿಗೆ ಆಸನ ಒದಗಿಸಲಾಗಿದೆ. ವಿರೋಧ ಪಕ್ಷದ ನಾಯಕರ ಆಸನದ ಪಕ್ಕ, ಮಾಜಿ ಸ್ಪೀಕರ್‌ಗಳಿಗೆ ಕುಳಿತುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರಿಗೆ ಅಧಿಕಾರಿಗಳ ಗ್ಯಾಲರಿಯಲ್ಲಿ ಹಾಗೂ ಗಣ್ಯರಿಗೆ ಪ್ರೇಕ್ಷಕರ ಗ್ಯಾಲರಿಯಲ್ಲಿ ಆಸನಗಳ ವ್ಯವಸ್ಥೆ ಮಾಡಲಾಗಿದೆ.

 ಸೋಮವಾರ ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಕಾರ್ಯಕ್ರಮ ನಡೆಯಲಿದೆ. ನಂತರ ಔತಣಕೂಟ, ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಅವರು ಹೇಳಿದರು. ಇದೊಂದು ಮಹತ್ವಪೂರ್ಣ ಕಾರ್ಯಕ್ರಮವಾಗಿದ್ದು, ಸರಳವಾಗಿ ಆಚರಿಸಲಾಗುತ್ತಿದೆ ಎಂದು ಬೋಪಯ್ಯ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.