ADVERTISEMENT

ವಿನೂತನ ರೀತಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2011, 19:30 IST
Last Updated 21 ಜೂನ್ 2011, 19:30 IST

ಬೆಂಗಳೂರು: ಧರ್ಮಸ್ಥಳದ ಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ಪ್ರಮಾಣ ಮಾಡಲು ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವರ್ತನೆಯನ್ನು ಖಂಡಿಸಿ ಬೆಂಗಳೂರು ಮಹಾನಗರ ಯುವ ಕಾಂಗ್ರೆಸ್ ಸಮಿತಿ ಸದಸ್ಯರು ನಗರದಲ್ಲಿ ಮಂಗಳವಾರ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಆನಂದರಾವ್ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡಿದ ಸಮಿತಿ ಸದಸ್ಯರು ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಅವರನ್ನು ಹೋಲುವ ಮುಖವಾಡ ಧರಿಸಿ ಗೋಲಿ ಆಟವಾಡುವ ಅಣಕು ಪ್ರದರ್ಶನದ ಮೂಲಕ ಪ್ರತಿಭಟಿಸಿದರು.

`ಯಡಿಯೂರಪ್ಪ ಅವರು ನೀಡಿರುವ ಹೇಳಿಕೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾದದ್ದು. ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರಕ್ಕೆ ಬಂದ ಅವರು ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ~ ಎಂದು ಪ್ರತಿಭಟನಾಕಾರರು ದೂರಿದರು. ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಅವರು ಮಠಾಧೀಶರ ಮಾತು ಕೇಳಿ ತಪ್ಪು ದಾರಿ ಹಿಡಿಯುತ್ತಿದ್ದಾರೆ.

ರಾಜ್ಯದ ಅಭಿವೃದ್ಧಿ ಕಡೆ ಗಮನ ಹರಿಸದೆ ಪರಸ್ಪರರು ರಾಜಕೀಯ ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಈ ಇಬ್ಬರು ನಾಯಕರಿಗೆ ಉನ್ನತ ಸ್ಥಾನದಲ್ಲಿರುವ ಅರ್ಹತೆ ಇಲ್ಲ. ಕೂಡಲೇ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಈ ನಾಯಕರು ಗೋಲಿ ಆಡುವ ಮಕ್ಕಳಂತೆ ವರ್ತಿಸುತ್ತಿದ್ದಾರೆ. ಅವರ ವರ್ತನೆಯಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ. ಯಾವುದೇ ಸಮಸ್ಯೆಗಳಿದ್ದರೆ ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳಲಿ. ನ್ಯಾಯಾಂಗವನ್ನು ನಂಬದ ಈ ನಾಯಕರು ದೇವರ ಮೇಲೆ ಪ್ರಮಾಣ ಮಾಡಲು ಮುಂದಾಗಿರುವುದು ಹಾಸ್ಯಾಸ್ಪದ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು. ಸಮಿತಿಯ ಅಧ್ಯಕ್ಷ ಎಸ್.ಮನೋಹರ್, ಕೆಪಿಸಿಸಿ ಸದಸ್ಯ ಡಿ.ಎ.ಪ್ರಮೋದ್ ಶಂಕರ್ ಇತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.