ಚಿಕ್ಕಬಳ್ಳಾಪುರ: ಸ್ಥಳೀಯ ಸಂಘ ಸಂಸ್ಥೆಗಳ ವಿರೋಧದ ನಡುವೆಯೇ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲು ರಾಜ್ಯ ಸರ್ಕಾರ ಪ್ರಯತ್ನ ನಡೆಸಿದೆ. ಯೋಜನೆ ಅನುಷ್ಠಾನಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಸಂಘಸಂಸ್ಥೆಗಳು ಎಚ್ಚರಿಕೆ ನೀಡಿವೆ.
ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ 14 ವರ್ಷಗಳಿಂದ ಜಿಲ್ಲೆಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಪೂರಕವಾಗಿ ಎತ್ತಿನಹೊಳೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಸಮರ್ಥಿಸಿಕೊಳ್ಳುತ್ತಿದೆ. ಎತ್ತಿನಹೊಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ನೀರು ಸಿಗುವುದಿಲ್ಲ. ಬರಪೀಡಿತ ಬಯಲುಸೀಮೆ ಜಿಲ್ಲೆಗಳಿಗೆ ಆ ನೀರು ತಲುಪುವುದೂ ಇಲ್ಲ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿಯವರು ದೂರುತ್ತಿದ್ದಾರೆ.
ಸುಮಾರು ₨ 12,900 ಕೋಟಿ ವೆಚ್ಚದ ಯೋಜನೆಯಿಂದ 24 ಟಿಎಂಸಿ ಅಡಿ ನೀರು ಲಭ್ಯವಾಗಲಿದ್ದು, 36 ತಿಂಗಳ ಅವಧಿಯೊಳಗೆ ಯೋಜನೆ ಪೂರ್ಣಗೊಳ್ಳುತ್ತದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ಅವರೇ ಸ್ವತಃ ಎತ್ತಿನಹೊಳೆಯಲ್ಲಿ 4 ಟಿಎಂಸಿ ಮಾತ್ರವೇ ನೀರು ಲಭ್ಯವಿದ್ದು, ಬಯಲುಸೀಮೆ ಜಿಲ್ಲೆಗಳಿಗೆ ನೀರು ಹರಿಸುವುದು ಅಸಾಧ್ಯ. ನೀರಿನ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಹೇಳಿದ್ದಾರೆ.
ಆತಂಕ ಬೇಡ; ಮೊಯಿಲಿ: ಜಿ.ಎಸ್. ಪರಮಶಿವಯ್ಯ ವರದಿ ಯಾಧಾರಿತ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಕ್ಕೆ ದೀರ್ಘ ಕಾಲ ಬೇಕಿದ್ದು, ತ್ವರಿತಗತಿಯಲ್ಲಿ ಕುಡಿಯುವ ನೀರು ಪೂರೈಸಲು ಎತ್ತಿನಹೊಳೆ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಜನರು ಯಾವುದೇ ಕಾರಣಕ್ಕೂ ಆತಂಕಪಡಬೇಕಿಲ್ಲ ಎಂದು ಕೇಂದ್ರ ಸಚಿವ ವೀರಪ್ಪ ಮೊಯಿಲಿ ಹೇಳುತ್ತಾರೆ.
‘ಎತ್ತಿನಹೊಳೆ ಯೋಜನೆ ಅನುಷ್ಠಾನಕ್ಕೂ ಮುನ್ನ ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ನೇತೃತ್ವದ ತಜ್ಞರ ಸಮಿತಿ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ವರ್ಷ ನವೆಂಬರ್ 24ರಂದು ಹೇಳಿದ್ದರು. ಆದರೆ, ತಜ್ಞರ ಸಮಿತಿ ಮತ್ತು ನೀರಾವರಿ ತಜ್ಞರ ಜೊತೆ ಚರ್ಚಿಸದೇ ಯೋಜನೆ ಶಂಕುಸ್ಥಾಪನೆಗೆ ತರಾತುರಿಯ ಸಿದ್ಧತೆ ಮಾಡಲಾಗುತ್ತಿದೆ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.
ಎತ್ತಿನಹೊಳೆಯಿಂದ ನೀರನ್ನು ಕೊಳವೆ ಮಾರ್ಗದ ಮೂಲಕ ಹರಿಸಲು ಮತ್ತು ಏಳು ಜಿಲ್ಲೆಗಳಿಗೆ ತಲುಪುವಂತೆ ಮಾಡಲು ಅಸಾಧ್ಯವಾದ ಕೆಲಸ. ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿರುವ ಮೊಯಿಲಿ ಅವರು ಎತ್ತಿನಹೊಳೆ ಯೋಜನೆ ನೆಪದಲ್ಲಾದರೂ ಜನರ ಬಳಿ ಮುಂದಿನ ಚುನಾವಣೆಗೆ ಮತಯಾಚಿಸಬಹುದು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಮೂಲಕ ಶಂಕುಸ್ಥಾಪನೆಗೆ ಒತ್ತಡ ಹೇರುತ್ತಿದ್ದಾರೆ ಎಂದು ಅವರು ದೂರಿದರು.
ಕಾರ್ಯಕ್ರಮಕ್ಕೆ ಕಪ್ಪು ಬಟ್ಟೆ ಪ್ರದರ್ಶನ
ನಗರದ ಹೊರವಲಯದ ಬಿಜಿಎಸ್ ವರ್ಲ್ಡ್ ಶಾಲೆ ಆವರಣದಲ್ಲಿ ಸೋಮವಾರ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ.
ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಶಾಶ್ವತ ನೀರಾವರಿ ಹೋರಾಟ ಸಮಿತಿ ಸದಸ್ಯರು ಕಪ್ಪು ಬಟ್ಟೆ ಪ್ರದರ್ಶಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಬೆಳಿಗ್ಗೆ 9ಕ್ಕೆ ಸಿಟಿಜನ್ಸ್ ಕ್ಲಬ್‌ನಿಂದ ಕಾರ್ಯಕ್ರಮದ ಸ್ಥಳದವರೆಗೆ ಸಾವಿರಾರು ಸಂಖ್ಯೆಯಲ್ಲಿ ಹೋರಾಟಗಾರರು ಮತ್ತು ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು ಮೆರವಣಿಗೆ ನಡೆಸಲಿದ್ದಾರೆ. ಕಾರ್ಯಕ್ರಮ ನಡೆಯದಂತೆ ಅಡ್ಡಿಪಡಿಸಲಾಗುವುದು ಎಂದು ಹೋರಾಟ ಸಮಿತಿಯ ಮುಖಂಡರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಚಾಲನೆ
ಎತ್ತಿನಹೊಳೆ ಯೋಜನೆ ಕಾಮಗಾರಿ ಶಂಕುಸ್ಥಾಪನೆಯನ್ನು ಬೆಳಿಗ್ಗೆ 10ರಿಂದ 11.30ರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಕೇಂದ್ರ ಸಚಿವರಾದ ವೀರಪ್ಪ ಮೊಯಿಲಿ, ಕೆ.ಎಚ್.ಮುನಿಯಪ್ಪ, ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಇತರರು ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.