ADVERTISEMENT

ವಿಷಯ ಬಹಿರಂಗಪಡಿಸಿದರೆ ಡಿಬಾರ್‌ ಬೆದರಿಕೆ !

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2018, 19:30 IST
Last Updated 25 ಮಾರ್ಚ್ 2018, 19:30 IST

ರಾಣೆಬೆನ್ನೂರು (ಹಾವೇರಿ ಜಿಲ್ಲೆ): ತಾಲ್ಲೂಕಿನ ತುಮ್ಮಿನಕಟ್ಟಿ ಸಂಗನಬಸವೇಶ್ವರ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿಯೂ ಎಸ್‌ಎಸ್‌ಎಲ್‌ಸಿ ಪ್ರಥಮ ಭಾಷೆ ಪರೀಕ್ಷೆ ವೇಳೆ ಪ್ರಶ್ನೆಪತ್ರಿಕೆ ಅದಲು ಬದಲಾಗಿದೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಮುಂದಿನ ಪರೀಕ್ಷೆಯಲ್ಲಿ ಡಿಬಾರ್‌ ಮಾಡುವುದಾಗಿ ಪರೀಕ್ಷಾ ಕೇಂದ್ರದ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ್ದರಿಂದ ಘಟನೆಯು ತಡವಾಗಿ ಬೆಳಕಿಗೆ ಬಂದಿದೆ.

ಮಾರ್ಚ್‌ 23ರಂದು, ಕೊಠಡಿಯ ಮೇಲ್ವಿಚಾರಕರು ಪುನರಾವರ್ತಿತ ಅಭ್ಯರ್ಥಿಗಳಿಗೆ ನೀಡಬೇಕಾದ ಪ್ರಶ್ನೆಪತ್ರಿಕೆಯನ್ನು, ರೆಗ್ಯುಲರ್‌ ವಿದ್ಯಾರ್ಥಿಗಳಿಗೆ ನೀಡಿದ್ದಾರೆ. ಇದನ್ನು ಕೊಠಡಿಯ ಮೇಲ್ವಿಚಾರಕರ ಗಮನಕ್ಕೆ ತಂದರೂ, ಅವರು ಬೆದರಿಸಿ ಸುಮ್ಮನಾಗಿಸಿದರು ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಪಾಲಕರು, ಪರೀಕ್ಷಾ ಕೇಂದ್ರದ ಮುಖ್ಯಅಧೀಕ್ಷಕರು ಹಾಗೂ ಕೊಠಡಿ ಮೇಲ್ವಿಚಾರಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಉಪನಿರ್ದೇಶಕು ಮತ್ತು ಬೆಂಗಳೂರು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ADVERTISEMENT

‘ಮುಖ್ಯಅಧೀಕ್ಷಕರು ಹಾಗೂ ಕೊಠಡಿ ಮೇಲ್ವಿಚಾರಕರಿಗೆ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ. ಅವರಿಂದ ಉತ್ತರ ಬಂದ ಮೇಲೆ ಮುಂದಿನ ಕ್ರಮ ಕೈಗೊಳ್ಳಲು ಮೇಲಧಿಕಾರಿಗಳಿಗೆ ಪತ್ರ ಬರೆಯುತ್ತೇನೆ. ಈ ಪರೀಕ್ಷಾ ಕೇಂದ್ರಕ್ಕೆ ಈಗಾಗಲೇ ಬೇರೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದು ಬಿಇಒ ಎನ್. ಶ್ರೀಧರ ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಂದ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಿಡಿಪಿಐ ಅಂದಾನಪ್ಪ ವಡಗೇರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.