ADVERTISEMENT

ವೇತನ ತಾರತಮ್ಯ: ಶಿಕ್ಷಕರ ಕೋಪ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2012, 19:30 IST
Last Updated 11 ನವೆಂಬರ್ 2012, 19:30 IST

ಬೆಂಗಳೂರು: ವೇತನ ತಾರತಮ್ಯ ನಿವಾರಣೆ, ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ದರ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಶೀಘ್ರದಲ್ಲಿಯೇ ಈಡೇರಿಸದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಎಚ್ಚರಿಕೆ ನೀಡಿದೆ.

ಮೂರನೇ ವೇತನ ಆಯೋಗದ ವರದಿ ಜಾರಿಯಾದಾಗ ಪ್ರೌಢಶಾಲಾ ಸಹ ಶಿಕ್ಷಕರು, ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಬೋಧಕರು, ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ಸಬ್‌ಇನ್‌ಸ್ಪೆಕ್ಟರ್‌ಗಳ ವೇತನ ಶ್ರೇಣಿ ಒಂದೇ ರೀತಿ ಇತ್ತು. ಕ್ರಮೇಣ ಪ್ರೌಢಶಾಲಾ ಸಹ ಶಿಕ್ಷಕರ ವೇತನದಲ್ಲಿ ವ್ಯತ್ಯಾಸ ಆಯಿತು. ಇದನ್ನು ಸರಿಪಡಿಸಲು ಸಮಿತಿ ರಚಿಸಬೇಕು ಎಂದು ಸಂಘದ ಅಧ್ಯಕ್ಷ ಎಚ್.ಕೆ.ಮಂಜುನಾಥ, ಪ್ರಧಾನ ಕಾರ್ಯದರ್ಶಿ ಮಲ್ಲನಗೌಡ ಗೌಡರ ಒತ್ತಾಯಿಸಿದ್ದಾರೆ. 

ನಿವೃತ್ತಿಯಿಂದ ತೆರವಾಗಿರುವ ಹುದ್ದೆಗಳನ್ನು ಮುಂಬಡ್ತಿ ಮೂಲಕ ತುಂಬುವ ಪ್ರಕ್ರಿಯೆಯನ್ನು ಕೂಡಲೇ ಆರಂಭಿಸಬೇಕು. ಸ್ನಾತಕೋತ್ತರ ಪದವಿ ಪಡೆದಿರುವ ಸುಮಾರು 540 ಅರ್ಹ ಸಹ ಶಿಕ್ಷಕರಿಗೆ ಪದವಿಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಬೇಕು. ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ ಪ್ರತಿಯೊಂದು ವಿಭಾಗದಲ್ಲಿ ಮಕ್ಕಳ ಸಂಖ್ಯೆಯನ್ನು 40ಕ್ಕೆ ಸೀಮಿತಗೊಳಿಸಬೇಕು. ಸಂಯುಕ್ತ ಪದವಿ ಪೂರ್ವ ಕಾಲೇಜುಗಳಲ್ಲಿ ಉಪಪ್ರಾಚಾರ್ಯರ ಹುದ್ದೆ ಸೃಷ್ಟಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಆರೋಗ್ಯ ವಿಮೆ ಹಾಗೂ ವಿಶೇಷ ಭತ್ಯೆಯನ್ನು ಮಂಜೂರು ಮಾಡಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆ ಮತ್ತು ಮೌಲ್ಯ ಮಾಪನ ದರಗಳನ್ನು ಪರಿಷ್ಕರಿಸಬೇಕು ಎಂದು ಒತ್ತಾಯಿಸಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.