ADVERTISEMENT

ವೈದ್ಯ ಶಿಕ್ಷಣ: ಈ ಸಲವೂ ಸಿಇಟಿ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2012, 19:59 IST
Last Updated 17 ಡಿಸೆಂಬರ್ 2012, 19:59 IST

ಬೆಂಗಳೂರು/ಮೈಸೂರು: ವೈದ್ಯಕೀಯ/ದಂತ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಪ್ರತಿ ವರ್ಷದಂತೆ ಈ ವರ್ಷವೂ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ಸರ್ಕಾರ ನಿರ್ಧರಿಸಿದೆ.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸೋಮವಾರ ಸಮಾಲೋಚನೆ ನಡೆಸಿದ ನಂತರ ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ.ರಾಮದಾಸ್ ಪತ್ರಿಕಾಗೋಷ್ಠಿಯಲ್ಲಿ ಸಿಇಟಿ ನಡೆಸುವ ತೀರ್ಮಾನವನ್ನು ಪ್ರಕಟಿಸಿದರು.

ಆಯಾ ಕಾಲೇಜುಗಳು ಅಥವಾ ರಾಜ್ಯ ಸರ್ಕಾರಗಳು ಪ್ರವೇಶ ಪರೀಕ್ಷೆ ನಡೆಸಬಹುದು ಎಂದು ಸುಪ್ರೀಂ ಕೋರ್ಟ್ ಈಚೆಗೆ ನೀಡಿದ ಮಧ್ಯಂತರ ಆದೇಶದಲ್ಲಿ ತಿಳಿಸಿದೆ. ಹೀಗಾಗಿ ಪ್ರವೇಶ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಎನ್‌ಇಇಟಿ) ಬಗ್ಗೆ ಸುಪ್ರೀಂ ಕೋರ್ಟ್ ಜನವರಿ 17ರಂದು ಅಂತಿಮ ತೀರ್ಪು ನೀಡಲಿದೆ ಎಂದು ಅವರು ಹೇಳಿದರು.

ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ. ರಾಜ್ಯ ಸರ್ಕಾರ ಎನ್‌ಇಇಟಿ ಮತ್ತು ಸಿಇಟಿ ಎರಡಕ್ಕೂ ಸಿದ್ಧವಾಗಿದೆ. ರಾಜ್ಯ ಮಟ್ಟದಲ್ಲಿ ಪ್ರವೇಶ ಪರೀಕ್ಷೆ ನಡೆಸಲು ಅಡ್ಡಿ ಇಲ್ಲ ಎಂದು ನ್ಯಾಯಾಲಯ ಹೇಳಿದರೆ, ಈ ವರ್ಷವೂ ಸಿಇಟಿ ಪರೀಕ್ಷೆ ನಡೆಯಲಿದೆ. ಒಂದು ವೇಳೆ ಎನ್‌ಇಇಟಿಯನ್ನು ಕಡ್ಡಾಯವಾಗಿ ಎಲ್ಲ ರಾಜ್ಯಗಳೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರೆ, ಆ ಪ್ರಕಾರ ಎನ್‌ಇಇಟಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲಾಗುವುದು ಎಂದರು.
`ನ್ಯಾಯಾಲಯದ ಮಧ್ಯಂತರ ಆದೇಶದಂತೆ ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಪ್ರವೇಶಕ್ಕಾಗಿ, ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸುವಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಸೂಚಿಸಲಾಗಿದೆ. ಈ ಸಂಬಂಧ ಚರ್ಚಿಸಲು ಇದೇ 19 ರಂದು ಉನ್ನತ ಮಟ್ಟದ ಸಭೆ ಕರೆಯಲಾಗಿದೆ' ಎಂದರು.

ಪದವಿ ಕೋರ್ಸ್: ವೈದ್ಯಕೀಯ/ದಂತ ವೈದ್ಯಕೀಯ ಪದವಿ ಕೋರ್ಸ್‌ಗಳ ಸರ್ಕಾರಿ ಕೋಟಾ ಸೀಟುಗಳ ಪ್ರವೇಶಕ್ಕಾಗಿ 2013ರ ಮೇ 10ರ ಒಳಗೆ ಸಿಇಟಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ಮಾಡಿಕೊಂಡಿದೆ. ಇದೇ 22ರಂದು ನಡೆಯುವ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಸಿಇಟಿ ಪರೀಕ್ಷೆಯ ದಿನಾಂಕವನ್ನು ಅಂತಿಮಗೊಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ವಿಷಯದಲ್ಲಿ ಯಾವುದೇ ಗೊಂದಲ ಇಲ್ಲ. ಈಗಾಗಲೇ ಪ್ರಕಟಿಸಿರುವಂತೆ ಸಿಇಟಿ ಪರೀಕ್ಷೆ ನಡೆಯಲಿದೆ. ರಾಷ್ಟ್ರಮಟ್ಟದಲ್ಲಿ ನಡೆಯುವ ಬೇರೆ ಬೇರೆ ಪರೀಕ್ಷೆಗಳ ದಿನಾಂಕಗಳನ್ನು ನೋಡಿಕೊಂಡು ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಸಿಇಟಿ ಪರೀಕ್ಷೆ ದಿನಾಂಕವನ್ನು ನಿಗದಿ ಮಾಡಲಾಗುವುದು ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು `ಪ್ರಜಾವಾಣಿ'ಗೆ ತಿಳಿಸಿದರು.

ವಿದ್ಯಾರ್ಥಿಗಳಿಗೆ ಲಾಭ: `2012-13 ನೇ ಸಾಲಿನಲ್ಲಿ 2,212 ವಿದ್ಯಾರ್ಥಿಗಳು ಅರ್ಹತೆ ಆಧಾರದ ಮೇಲೆ ಸಿಇಟಿ ಮೂಲಕ ಎಂಬಿಬಿಎಸ್‌ಗೆ ಪ್ರವೇಶ ಪಡೆದುಕೊಂಡಿದ್ದರು. ಆದರೆ, ಈ ವರ್ಷ ಎನ್‌ಇಇಟಿ ಮೂಲಕ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಎರಡು ಅರ್ಹತಾ ಪಟ್ಟಿಯನ್ನು ಸಿದ್ಧಪಡಿಸಿದರೆ ರಾಜ್ಯದಲ್ಲಿ ಲಭ್ಯವಿರುವ 6,005 ಎಂ.ಬಿ.ಬಿ.ಎಸ್ ಸೀಟುಗಳ ಪೈಕಿ 4,804 ಸೀಟುಗಳು ಅರ್ಹತೆ ಮತ್ತು ರೋಸ್ಟರ್ ಆಧಾರದ ಮೇಲೆ ರಾಜ್ಯದ ವಿದ್ಯಾರ್ಥಿಗಳಿಗೆ ದೊರಕಲಿವೆ. ಹೀಗಾಗಿ ಎನ್‌ಇಇಟಿಗೆ ಒಪ್ಪಿಗೆ ಸೂಚಿಸಲಾಗಿದೆ' ಎಂದು ರಾಮದಾಸ್ ಸ್ಪಷ್ಟಪಡಿಸಿದರು.

ಮತ್ತೊಂದು ಪರೀಕ್ಷೆಗೆ ಸಿದ್ಧತೆ: ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಈಗಾಗಲೇ ರಾಷ್ಟ್ರಮಟ್ಟದಲ್ಲಿ ಎನ್‌ಇಇಟಿ ಪರೀಕ್ಷೆ ಮುಗಿದಿದೆ. ಈಗ ಸರ್ಕಾರಿ ಕೋಟಾ ಸೀಟುಗಳ ಭರ್ತಿಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಪಿ.ಜಿ- ಸಿ.ಇ.ಟಿ ನಡೆಸಲು ತೀರ್ಮಾನಿಸಿರುವುದರಿಂದ ವಿದ್ಯಾರ್ಥಿಗಳು ಮತ್ತೊಂದು ಪರೀಕ್ಷೆಗೆ ಸಿದ್ಧವಾಗಬೇಕು.

ಈ ವರ್ಷ ಎನ್‌ಇಇಟಿ ಜಾರಿಯಾಗಲಿದೆ ಎಂಬ ಉದ್ದೇಶದಿಂದ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಪಿಜಿ-ಸಿಇಟಿಗೆ ಸಿದ್ಧತೆ ಮಾಡಿಕೊಂಡಿರಲಿಲ್ಲ. ಈಗ ತರಾತುರಿಯಲ್ಲಿ ಅಧಿಸೂಚನೆ ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಬೇಕಿದೆ.

ಕಾಮೆಡ್-ಕೆ: ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಕಾಮೆಡ್-ಕೆ ಪ್ರವೇಶ ಪರೀಕ್ಷೆ ಫೆಬ್ರುವರಿ 3ರಂದು ನಡೆಯಲಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. ದೇವರಾಜ ಅರಸು ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆ ಸೇರಿದಂತೆ ಕೆಲವೊಂದು ಡೀಮ್ಡ ವಿಶ್ವವಿದ್ಯಾಲಯಗಳು ಸಹ ಪ್ರತ್ಯೇಕ ಪರೀಕ್ಷೆ ನಡೆಸಲು ಈಗಾಗಲೇ ಅಧಿಸೂಚನೆ ಹೊರಡಿಸಿವೆ.

ಕೋರ್ಟ್ ತೀರ್ಮಾನಕ್ಕೆ: ರಾಷ್ಟ್ರಮಟ್ಟದಲ್ಲಿ ಒಂದೇ ಪ್ರವೇಶ ಪರೀಕ್ಷೆ (ಎನ್‌ಇಇಟಿ) ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದರೆ, ಸಿಇಟಿ ನಡೆಸುವ ನಿರ್ಧಾರವನ್ನು ಕೈಬಿಡಲಾಗುವುದು ಎಂದು ಸಚಿವ ಎಸ್.ಎ ರಾಮ್‌ದಾಸ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.