ADVERTISEMENT

ಶರತ್‌ ಹತ್ಯೆ: ಎನ್‌ಐಎ ತನಿಖೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 17 ಜುಲೈ 2017, 19:30 IST
Last Updated 17 ಜುಲೈ 2017, 19:30 IST
ಶರತ್‌ ಮಡಿವಾಳ
ಶರತ್‌ ಮಡಿವಾಳ   

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಇತ್ತೀಚೆಗೆ ನಡೆದ ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ ಮಡಿವಾಳ ಅವರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವಹಿಸಬೇಕು ಎಂದು ಬಿಜೆಪಿ ಸಂಸದರ ನಿಯೋಗವು ಕೇಂದ್ರದ ಗೃಹ ಸಚಿವ ರಾಜನಾಥ ಸಿಂಗ್‌ ಅವರಿಗೆ ಸೋಮವಾರ ಮನವಿ ಮಾಡಿದೆ.

ಸಂಸದರಾದ ಬಿ.ಎಸ್‌. ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ನಳಿನ್‌ಕುಮಾರ್‌ ಕಟೀಲ್‌ ಹಾಗೂ ಕೇಂದ್ರದ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ. ಸದಾನಂದಗೌಡ ಅವರು ಸೋಮವಾರ ಸಂಜೆ ಗೃಹ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಚರ್ಚಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ವರ್ಷಗಳಿಂದ ನಡೆಯುತ್ತಿರುವ ಕೋಮು ದಳ್ಳುರಿಯನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ದೂರಲಾಯಿತು.

ರಾಜ್ಯದಲ್ಲಿ ಇತ್ತೀಚೆಗೆ ವರ್ಷಗಳಲ್ಲಿ ಸಂಘ ಪರಿವಾರದ 23 ಕಾರ್ಯಕರ್ತರನ್ನು ರಾಜಕೀಯ ಉದ್ದೇಶದಿಂದ ಹತ್ಯೆ ಮಾಡಲಾಗಿದೆ. ಈ ಪ್ರಕರಣಗಳ ತನಿಖೆಯನ್ನು ಎನ್ಐಎಗೆ ವಹಿಸಿದರೆ ಮಾತ್ರ ಸತ್ಯ ಹೊರ ಬೀಳಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಂಗಳೂರಿನಲ್ಲಿ ಎನ್‌ಐಎ ಕಚೇರಿಯನ್ನು ಸ್ಥಾಪಿಸಬೇಕು. ಕೆಎಫ್‌ಡಿ ಹಾಗೂ ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಮನವಿ ಮಾಡಲಾಗಿದೆ. ಈ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ರಾಜನಾಥ ಸಿಂಗ್‌ ಭರವಸೆ ನೀಡಿದರು ಎಂದು ಬಿ.ಎಸ್‌. ಯಡಿಯೂರಪ್ಪ ಅವರು ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

ಕಾರಾಗೃಹ ಡಿಐಜಿ ಡಿ.ರೂಪಾ ಅವರನ್ನು ದಿಢೀರ್‌ ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಸರಿಯಾದುದಲ್ಲ. ಈ ರೀತಿ ಮಾಡುತ್ತಿರುವುದರಿಂದ ನಿಷ್ಠಾವಂತ ಅಧಿಕಾರಿಗಳ ಆತ್ಮಸ್ಥೈರ್ಯ ಕುಂದುತ್ತಿದೆ. ಈ ಕುರಿತೂ ಕೇಂದ್ರದ ಗೃಹ ಸಚಿವರ ಗಮನ ಸೆಳೆಯಲಾಗಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಡುತ್ತಿದೆ. ಕೊಲೆ, ಸುಲಿಗೆ, ಹತ್ಯೆಗಳಲ್ಲದೆ, ಕೋಮು ಗಲಭೆಗಳು ಹೆಚ್ಚುತ್ತಿವೆ.   ಇವುಗಳನ್ನು  ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಕೇಂದ್ರ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದೂ   ಆಗ್ರಹಿಸಲಾಗಿದೆ ಎಂದು ಬಿಎಸ್‌ವೈ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.