ADVERTISEMENT

ಶಾಲೆ ಮುಚ್ಚುವ ಕ್ರಮಕ್ಕೆ ಟೀಕೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2011, 19:30 IST
Last Updated 26 ಅಕ್ಟೋಬರ್ 2011, 19:30 IST

ಬೆಂಗಳೂರು: ಮಕ್ಕಳ ಸಂಖ್ಯೆ ಕಡಿಮೆ ಇದೆ ಎಂಬ ಕಾರಣಕ್ಕೆ ಶಾಲೆಗಳನ್ನು ಮುಚ್ಚುವುದು ಸರಿಯಲ್ಲ, ಈ ರೀತಿ ಮಾಡುವುದು ಕಡ್ಡಾಯ ಮತ್ತು ಉಚಿತ ಶಿಕ್ಷಣ ಹಕ್ಕಿನ ಉಲ್ಲಂಘನೆಯಾಗುತ್ತದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬುಧವಾರ ಇಲ್ಲಿ ಆಕ್ಷೇಪ ವ್ಯಕ್ತಪಡಿಸಿದರು.

4-5 ಮಕ್ಕಳಿದ್ದರೂ ಶಾಲೆಯನ್ನು ಮುಚ್ಚಬಾರದು ಎಂದು 1994-95ರಲ್ಲಿ ಸುತ್ತೋಲೆ ಹೊರಡಿಸಲಾಗಿತ್ತು. ಪ್ರತಿಯೊಬ್ಬರಿಗೂ ಶಿಕ್ಷಣ ಸಿಗುವಂತಾಗಬೇಕು ಎಂಬ ದೃಷ್ಟಿಯಿಂದ 1.10 ಲಕ್ಷ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಆದರೆ ಈಗ ಶಾಲೆಗಳನ್ನು ಮುಚ್ಚುತ್ತಿರುವುದು ಸರಿಯಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.

ಕೇಂದ್ರ ಸರ್ಕಾರ ಮಧ್ಯಾಹ್ನದ ಬಿಸಿಯೂಟ, ಸರ್ವಶಿಕ್ಷಣ ಅಭಿಯಾನಕ್ಕೆ ಹಣ ನೀಡುತ್ತಿದೆ. ಪ್ರತಿಯೊಂದು ಮಗು ಶಾಲೆಗೆ ಬರುವಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿದೆ. ಎಲ್ಲರೂ ವಿದ್ಯಾವಂತರಾಗಬೇಕು ಎಂಬ ಉದ್ದೇಶ ರಾಜ್ಯ ಸರ್ಕಾರಕ್ಕೆ ಇದೆಯೋ, ಇಲ್ಲವೋ ಎಂದು ಅವರು ಪ್ರಶ್ನಿಸಿದರು.

ಶಾಲೆಗಳನ್ನು ಮುಚ್ಚುವ ಸಂಬಂಧ ಶಾಸಕರೊಂದಿಗೂ ಚರ್ಚಿಸಿಲ್ಲ. ವಿಧಾನ ಮಂಡಲದ ಅಧಿವೇಶನದಲ್ಲಿ ಚರ್ಚೆ ಮಾಡದೆ ಶಾಲೆಗಳನ್ನು ಮುಚ್ಚಲು ಹೊರಟಿರುವುದು ಸರಿಯಲ್ಲ. ಕೂಡಲೇ ಇದನ್ನು ತಡೆಯಬೇಕು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದಿರುವುದಾಗಿ ಹೇಳಿದರು.

ಶಾಲೆಗಳನ್ನು ಮುಚ್ಚುವ ನಿರ್ಧಾರ ಮೂರ್ಖತನದ ಪರಮಾವಧಿ. ಖಾಸಗಿ ಶಾಲೆಗಳಿಗೆ ಹೋಗಲಾಗದ ಬಡ ಮಕ್ಕಳು ಇದರಿಂದ ಶಿಕ್ಷಣದಿಂದ ವಂಚಿತರಾಗಲಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಅಧಿವೇಶನ ಕರೆಯಲಿ: ಬರಗಾಲ, ವಿದ್ಯುತ್ ಸಮಸ್ಯೆ ಬಗ್ಗೆ ಚರ್ಚಿಸಲು ಅಧಿವೇಶನ ಕರೆಯಿರಿ ಎಂದು ಒತ್ತಾಯಿಸಿದರೆ, ಸದಾನಂದ ಗೌಡ ಅವರು ಉದ್ಧಟತನದ ಹೇಳಿಕೆ ನೀಡುವುದು ಸರಿಯಲ್ಲ. ಕೂಡಲೇ ಅಧಿವೇಶನ ಕರೆಯಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಹಿರಿಯ ಮುಖಂಡ ಎಲ್. ಕೆ.ಅಡ್ವಾಣಿ ಹಮ್ಮಿಕೊಂಡಿರುವ ಜನಚೇತನ ಯಾತ್ರೆ ಕರ್ನಾಟಕಕ್ಕೆ ಬರುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.