ADVERTISEMENT

ಸಂಸತ್ ಮಾದರಿ ಭದ್ರತೆಗೆ ಕ್ರಮ: ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2018, 19:43 IST
Last Updated 8 ಮಾರ್ಚ್ 2018, 19:43 IST
ರಾಮಲಿಂಗಾರೆಡ್ಡಿ
ರಾಮಲಿಂಗಾರೆಡ್ಡಿ   

ಕಲಬುರ್ಗಿ: ‘ವಿಧಾನಸೌಧ, ಹೈಕೋರ್ಟ್ ಮತ್ತು ಲೋಕಾಯುಕ್ತ ಕಚೇರಿಗೆ ಸಂಸತ್ ಮಾದರಿ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರ ಕೊಲೆ ಯತ್ನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ತನಿಖೆಗೆ ಸೂಚಿಸಿದ್ದಾರೆ. ಲೋಹ ಶೋಧಕ (ಮೆಟಲ್ ಡಿಟೆಕ್ಟರ್) ದೋಷದಿಂದ ಆರೋಪಿ ಬಳಿ ಚಾಕು ಇರುವುದು ಗೊತ್ತಾಗಿಲ್ಲ. ಭದ್ರತೆ ಲೋಪಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದರು.

‘ತೇಜರಾಜ್ ಈ ಮೊದಲು ಕೂಡ ಲೋಕಾಯುಕ್ತರೊಂದಿಗೆ ಜಗಳ ಮಾಡಿದ್ದ. ಅಲ್ಲದೆ ಅವರ ಒಳ್ಳೆಯತನವನ್ನು ದುರುಪಯೋಗ ಮಾಡಿಕೊಂಡಿದ್ದಾನೆ. ಲೋಕಾಯುಕ್ತರು ಮೊದಲೇ ಹೆಚ್ಚಿನ ಭದ್ರತೆ ಕೇಳಿದ್ದರೆ ಕಲ್ಪಿಸಬಹುದಿತ್ತು’ ಎಂದರು.

ADVERTISEMENT

‘ಗೃಹ ಸಚಿವರು ರಾಜೀನಾಮೆ ಕೊಡಬೇಕು’ ಎಂಬ ಸಂಸದ ಪ್ರಹ್ಲಾದ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ರಾಜೀನಾಮೆ ಕೊಡುವ ಅಗತ್ಯವಿಲ್ಲ. ಬಿಜೆಪಿಯವರಿಗೆ ಕಾನೂನು, ಸಂಸ್ಕೃತಿ ಗೊತ್ತಿಲ್ಲ. ಹೀಗಾಗಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.