ADVERTISEMENT

ಸಿಎಂ ರಾಜೀನಾಮೆ ಅಗತ್ಯ ಇಲ್ಲ

​ಪ್ರಜಾವಾಣಿ ವಾರ್ತೆ
Published 21 ಜನವರಿ 2011, 19:30 IST
Last Updated 21 ಜನವರಿ 2011, 19:30 IST

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪದಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ಶುಕ್ರವಾರ ಅನುಮತಿ ನೀಡಿರುವ ಮಾತ್ರಕ್ಕೆ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದೇನೂ ಇಲ್ಲ ಎಂದು ಕಾನೂನು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಈ ಕುರಿತು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ರವಿ ಬಿ. ನಾಯಕ್ ಅವರು, ‘ರಾಜೀನಾಮೆ ಕೊಡುವುದು, ಬಿಡುವುದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಷಯ. ಆದರೆ ರಾಜ್ಯಪಾಲರು ನೀಡಿರುವ ಅನುಮತಿಗೆ ತಡೆ ನೀಡುವಂತೆ ಕೋರಿ ಅವರು ಕೂಡಲೇ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ರಾಜ್ಯಪಾಲರು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ-1988ರ 19(1)ನೇ ಕಲಮಿನ ಅಡಿ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳನ್ನು ಅದನ್ನು ನೇರವಾಗಿ ಹೈಕೋರ್ಟ್‌ನಲ್ಲಿ ಪ್ರಶ್ನಿಸುವ ಅವಕಾಶ ಇದೆ. ಈ ಮೂಲಕ ಸದ್ಯದ ಮಟ್ಟಿಗೆ ಸಮಸ್ಯೆ ಬಗೆಹರಿಸಿಕೊಳ್ಳಬಹುದಾಗಿದೆ’ ಎಂದು ಹೇಳಿದರು.

‘ಇಂತಹ ಪ್ರಕರಣಗಳಲ್ಲಿ ರಿಟ್ ಅರ್ಜಿ ಸಲ್ಲಿಸುವ ಅಥವಾ ಅಪರಾಧ ದಂಡ ಪ್ರಕ್ರಿಯಾ ಸಂಹಿತೆಯ 482ನೇ ಕಲಮಿನ ಅಡಿ ಅರ್ಜಿ ಸಲ್ಲಿಸಿ ರಾಜ್ಯಪಾಲರ ಅನುಮತಿಗೆ ಮಧ್ಯಂತರ ತಡೆ ನೀಡುವಂತೆ ಕೋರ್ಟ್ ಅನ್ನು ಕೋರಿಕೊಳ್ಳುವ ಅವಕಾಶ ಯಡಿಯೂರಪ್ಪನವರಿಗೆ ಇದೆ’ ಎಂದು ನಾಯಕ್ ಹೇಳಿದರು.ಶನಿವಾರ ಹೈಕೋರ್ಟ್‌ನಲ್ಲಿ ವಿಶೇಷ ಕಲಾಪ ನಡೆಯಲಿರುವ ಹಿನ್ನೆಲೆಯಲ್ಲಿ ಅದರ ಪ್ರಯೋಜನವನ್ನು ಅವರು ಪಡೆದುಕೊಳ್ಳಬಹುದಾಗಿದೆ ಎಂದು ಅವರು ವಿವರಿಸಿದರು.


 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.