ADVERTISEMENT

ಸಿದ್ದರಾಮಯ್ಯಗೆ ಸಿ.ಎಂ ಪತ್ರ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2011, 19:30 IST
Last Updated 28 ಅಕ್ಟೋಬರ್ 2011, 19:30 IST

ಬೆಂಗಳೂರು: ರಾಜ್ಯದ 90 ತಾಲ್ಲೂಕುಗಳಲ್ಲಿರುವ ಬರ ಪರಿಸ್ಥಿತಿ ಎದುರಿಸಲು ಹಣಕಾಸಿನ ತೊಂದರೆ ಇಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಈ ಸಂಬಂಧ ವಿವರಣೆ ನೀಡಿ ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಒಟ್ಟು 137.30 ಕೋಟಿ ರೂಪಾಯಿ ಇದೆ. ಅಲದೆ, ಇದೇ 21ರವರೆಗೆ ಬರ ಮತ್ತು ನೆರೆ ಪರಿಹಾರ ಕಾಮಗಾರಿಗಳಿಗೆ ಸರ್ಕಾರ ಒಟ್ಟು 85.25 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದಲೂ ಕುಡಿಯುವ ನೀರಿನ ಕಾಮಗಾರಿಗಳಿಗೆ ಸಾಕಷ್ಟು ಹಣ ಬಿಡುಗಡೆ ಮಾಡಲಾಗಿದೆ ಎಂದು ಗೌಡರು ಶುಕ್ರವಾರ ಬರೆದಿರುವ ಪತ್ರದಲ್ಲಿ ಮಾಹಿತಿ ನೀಡಿದ್ದಾರೆ.
 
`ಕಳೆದ ಎರಡು ತಿಂಗಳಿನಲ್ಲಿ ರಾಜ್ಯದ 11 ಬರಪೀಡಿತ ಜಿಲ್ಲೆಗಳಿಗೆ ಖುದ್ದಾಗಿ ಭೇಟಿ ನೀಡಿ, ಪರಿಸ್ಥಿತಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದೇನೆ~ ಎಂದು ಅವರು ತಿಳಿಸಿದ್ದಾರೆ. ಬರಪೀಡಿತ ಪ್ರದೇಶಗಳಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಗರಿಷ್ಠ ಪ್ರಮಾಣದಲ್ಲಿ ಉದ್ಯೋಗ ನೀಡುವುದು, ಕುಡಿಯುವ ನೀರಿನ ಸರಬರಾಜು, ಗೋಶಾಲೆಗಳನ್ನು ತೆರೆಯುವುದು, ಮೇವು ಪೂರೈಕೆ ಮತ್ತು ಜಾನುವಾರುಗಳ ಸಂರಕ್ಷಣೆಗೆ ತ್ವರಿತ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ 35.55 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. ಆದರೆ ಇದುವರೆಗೆ 7.45 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ಆಗಿದೆ. ಬರ ಪರಿಹಾರ ಕಾಮಗಾರಿ ಕುರಿತಂತೆ ಯಾವುದೇ ಸಲಹೆ, ಸೂಚನೆ ನೀಡಿದಲ್ಲಿ ಅವುಗಳನ್ನೂ ಅನುಷ್ಠಾನಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅವರಿಗೆ ಹೇಳಿದ್ದಾರೆ.

ರಾಜ್ಯದ ಬರ ಪರಿಸ್ಥಿತಿ ಕುರಿತಂತೆ ಸಿದ್ದರಾಮಯ್ಯ ಅವರು ಇದೇ 20ರಂದು ಬರೆದಿದ್ದ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಮುಖ್ಯಮಂತ್ರಿಗಳು ಈ ಪತ್ರ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.