ADVERTISEMENT

ಸಿದ್ದರಾಮಯ್ಯ ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2013, 19:59 IST
Last Updated 1 ಏಪ್ರಿಲ್ 2013, 19:59 IST

ಬೆಂಗಳೂರು: ರಕ್ತದ ಒತ್ತಡದಲ್ಲಿ ಏರುಪೇರು ಉಂಟಾದ ಕಾರಣದಿಂದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದ ಸಭೆಗಳಲ್ಲಿ ಭಾಗವಹಿಸಲು ಅವರು ಮಾರ್ಚ್ 25ರಂದು ದೆಹಲಿಗೆ ತೆರಳಿದ್ದರು. ಭಾನುವಾರ ಮಧ್ಯರಾತ್ರಿ ದೆಹಲಿಯಿಂದ ವಾಪಸಾದರು. ಸೋಮವಾರ ಬೆಳಿಗ್ಗೆ ಆರೋಗ್ಯದಲ್ಲಿ ತುಸು ಏರುಪೇರು ಕಂಡುಬಂದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಅವರು ಮೊದಲು ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಗೆ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಅವರನ್ನು ಪರೀಕ್ಷಿಸಿದ ಡಾ.ರವಿಕುಮಾರ್, ರಕ್ತದೊತ್ತಡ ಮತ್ತು ದೇಹದಲ್ಲಿ ಪಿತ್ಥದ ಅಂಶ ಹೆಚ್ಚಾಗಿರುವುದನ್ನು ಖಚಿತಪಡಿಸಿದರು. ಮಧ್ಯಾಹ್ನ ಒಂದು ಗಂಟೆಯ ವೇಳೆಗೆ ಖಾಸಗಿ ಆಸ್ಪತ್ರೆಗೆ ದಾಖಲಾದ ಸಿದ್ದರಾಮಯ್ಯ, ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲಕಾಲ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸೂಚಿಸಿದ್ದಾರೆ. ಮಂಗಳವಾರ ಬೆಳಿಗ್ಗೆ ಆಸ್ಪತ್ರೆಯಿಂದ ಮನೆಗೆ ವಾಪಸಾಗುವರು ಎಂದು ಅವರ ಆಪ್ತರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.