ಬೆಂಗಳೂರು: ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ಸಂಸ್ಥೆಯು ಅನುದಾನಕ್ಕೆ ಒಳಪಟ್ಟ ದಿನಾಂಕದಿಂದ ಅನ್ವಯವಾಗುವಂತೆ ಪಿಂಚಣಿ, ನಿವೃತ್ತಿ ಸೌಲಭ್ಯಗಳನ್ನು ನೀಡುವ ಸಂಬಂಧ ಸುಗ್ರೀವಾಜ್ಞೆ ಹೊರಡಿಸುವ ಸರ್ಕಾರದ ಪ್ರಯತ್ನಕ್ಕೆ ಹಿನ್ನಡೆಯಾಗಿದೆ.
ಈ ತಿಂಗಳ 3ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನಿಸಿ ರಾಜ್ಯಪಾಲರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ರಾಜ್ಯಪಾಲರು ಇದಕ್ಕೆ ಸಹಿ ಹಾಕಲು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅನುದಾನಕ್ಕೆ ಒಳಪಟ್ಟ ದಿನಾಂಕದ ಬದಲು, ನೌಕರರು ಸೇವೆಗೆ ಸೇರಿದ ದಿನಾಂಕದಿಂದಲೇ ಅನ್ವಯವಾಗುವಂತೆ ನಿವೃತ್ತಿ ಸೌಲಭ್ಯಗಳನ್ನು ನೀಡುವಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಆ ಪ್ರಕಾರ ಸೌಲಭ್ಯಗಳನ್ನು ನೀಡಿದರೆ ಸರ್ಕಾರಕ್ಕೆ ₨5 ಸಾವಿರ ಕೋಟಿ ಹೊರೆಯಾಗಲಿದೆ.ಇಷ್ಟೊಂದು ಮೊತ್ತವನ್ನು ಭರಿಸಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ಹಾಗೂ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನಿಸಲಾಗಿದೆ ಎಂದು ಜಯಚಂದ್ರ ಅವರು ಇತ್ತೀಚೆಗೆ ತಿಳಿಸಿದ್ದರು. ಸರ್ಕಾರದ ವಿರುದ್ಧ 742 ನ್ಯಾಯಾಂಗ ನಿಂದನೆ ಅರ್ಜಿಗಳು ದಾಖಲಾಗಿವೆ. ಈ ವಿಷಯ ತುರ್ತಾಗಿ ಇತ್ಯರ್ಥವಾಗಬೇಕು ಎಂಬ ಕಾರಣಕ್ಕೆ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ತೀರ್ಮಾನಿಸಿತ್ತು.
‘ಈ ವಿಷಯ ಪ್ರಮುಖವಾದುದು. ಸುಗ್ರೀವಾಜ್ಞೆ ಬದಲು, ಅಧಿವೇಶನದಲ್ಲಿ ಮಸೂದೆ ಮಂಡಿಸಿ ಸದನದ ಒಪ್ಪಿಗೆ ಪಡೆಯಿರಿ’ ಎಂದು ರಾಜ್ಯಪಾಲರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.