ADVERTISEMENT

ಸೋನಿಯಾ ಪ್ರತಿಕೃತಿ ದಹನ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2011, 19:30 IST
Last Updated 5 ಸೆಪ್ಟೆಂಬರ್ 2011, 19:30 IST

ಬಳ್ಳಾರಿ: ~ಯಾವುದೇ ಮುನ್ಸೂಚನೆ ನೀಡದೆ ಮಾಜಿ ಸಚಿವ ಜಿ.ಜನಾರ್ದನರೆಡ್ಡಿ ಅವರನ್ನು ಬಂಧಿಸಿರುವುದು ರಾಜಕೀಯ ದುರುದ್ದೇಶದಿಂದ ಕೂಡಿರುವ ಷಡ್ಯಂತ್ರ~ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ಜನಾರ್ದನರೆಡ್ಡಿ ಅಭಿಮಾನಿಗಳು ನಗರದ ವಿವಿಧೆಡೆ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ನೇತೃತ್ವದ ಕೇಂದ್ರದ ಯುಪಿಎ ಸರ್ಕಾರ, ರಾಜ್ಯ ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕು ಎಂಬ ಉದ್ದೇಶದಿಂದ ಸಿಬಿಐಗೆ ನಿರ್ದೇಶನ ನೀಡಿ, ರೆಡ್ಡಿ  ಅವರ ಬಂಧನಕ್ಕೆ ಕಾರಣವಾಗಿದೆ ಎಂದು ಆರೋಪಿಸಿದ ನೂರಾರು ಜನ ಕಾರ್ಯಕರ್ತರು, ಮಹಾನಗರ ಪಾಲಿಕೆ ಸದಸ್ಯರು, ನಗರದ ಎಸ್.ಪಿ. ವೃತ್ತದಲ್ಲಿರುವ ಬಿಜೆಪಿ ಕಚೇರಿಯೆದುರು ಕೆಲ ಕಾಲ ಪ್ರತಿಭಟನೆ ನಡೆಸಿದರು.

ನಂತರ ಗಡಿಗಿ ಚೆನ್ನಪ್ಪ ವೃತ್ತದವರೆಗೆ ಪ್ರತಿಭಟನಾ ರ‌್ಯಾಲಿ ನಡೆಸಿದರಲ್ಲದೆ, ಟೈರ್‌ಗಳನ್ನು ಸುಟ್ಟು ಕೆಲಕಾಲ ರಸ್ತೆ ತಡೆ ನಡೆಸಿ, ಪ್ರತಿಭಟಿಸಿದರು.

ಬಿ.ಶ್ರೀರಾಮುಲು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ 24 ಗಂಟೆಯೊಳಗೆ ಜನಾರ್ದನರೆಡ್ಡಿ ಅವರನ್ನು ಬಂಧಿಸಿರುವುದರ ಹಿಂದೆ ರಾಜಕೀಯ ಕೈವಾಡವಿದೆ ಎಂದೂ ಆರೋಪಿಸಿದ ಪ್ರತಿಭಟನಾಕಾರರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪ್ರತಿಕೃತಿ ದಹಿಸಿದರು. ಜನಾರ್ದನರೆಡ್ಡಿ ಅವರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡುವ ಮೂಲಕ ತಮ್ಮ ಅಭಿಮಾನ ಪ್ರದರ್ಶಿಸಿದ ಕೆಲವರು ಜನಾರ್ದನರೆಡ್ಡಿ ಪರ ಜೈಕಾರ ಹಾಕಿದರೆ, ಇನ್ನು ಕೆಲವರು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು.

ಇಂದು ಬಳ್ಳಾರಿ-ಕಂಪ್ಲಿ ಬಂದ್‌ಗೆ ಕರೆ
ಬಳ್ಳಾರಿ: ಮಾಜಿ ಸಚಿವ ಜಿ.ಜನಾರ್ದನರೆಡ್ಡಿ ಅವರ ಬಂಧನವನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಮಂಗಳವಾರ ಬಳ್ಳಾರಿ ಮತ್ತು ಕಂಪ್ಲಿ ಬಂದ್‌ಗೆ ಕರೆ ನೀಡಲಾಗಿದ್ದು ಬೆಳಿಗ್ಗೆ 9ಕ್ಕೆ ಬೃಹತ್ ಪ್ರತಿಭಟನಾ ರ‌್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಗುತ್ತಿಗನೂರು ವಿರೂಪಾಕ್ಷಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.