ADVERTISEMENT

ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ

​ಪ್ರಜಾವಾಣಿ ವಾರ್ತೆ
Published 26 ಜನವರಿ 2012, 19:30 IST
Last Updated 26 ಜನವರಿ 2012, 19:30 IST

ಬೆಂಗಳೂರು: `ಐವರು ಪಕ್ಷೇತರ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ಕೆ.ಜಿ.ಬೋಪಯ್ಯ ಕ್ರಮ ಕಾನೂನುಬಾಹಿರವಾದುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗುವುದು~ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಪಕ್ಷದ ಕಚೇರಿಯಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಸ್ಪೀಕರ್ ಪಕ್ಷಪಾತದಿಂದ ವರ್ತಿಸಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಹೀಗಾಗಿ ಆ ಸ್ಥಾನದಲ್ಲಿ ಮುಂದುವರಿಯುವ ನೈತಿಕ ಹಕ್ಕು ಅವರಿಗೆ ಇಲ್ಲ~ ಎಂದು ಟೀಕಿಸಿದರು.

ಲೋಕಾಯುಕ್ತರ ನೇಮಕದಲ್ಲಿ ಆಗಿರುವ ವಿಳಂಬ, ಬರ ಪರಿಸ್ಥಿತಿ, ನೆರೆಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿಕೊಡದೆ ಇರುವುದು ಸೇರಿದಂತೆ ಜ್ವಲಂತ ಸಮಸ್ಯೆಗಳ ಬಗ್ಗೆ ಇದೇ 30ರಂದು ಆರಂಭವಾಗುವ ವಿಧಾನ ಮಂಡಲದ ಅಧಿವೇಶದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಹೇಳಿದರು.

99 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಆ ತಾಲ್ಲೂಕುಗಳನ್ನು ಸರ್ಕಾರ ಬರಪೀಡಿತ ಎಂದು ಘೋಷಿಸಿರುವುದು ಬಿಟ್ಟರೆ ಇದುವರೆಗೆ ಪರಿಹಾರ ಕಾರ್ಯಗಳನ್ನು ಕೈಗೊಂಡಿಲ್ಲ. ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮೂರು ವರ್ಷಗಳ ಹಿಂದೆ ಉಂಟಾದ ಪ್ರವಾಹ ಪರಿಸ್ಥಿತಿಯಲ್ಲಿ ಸಂತ್ರಸ್ತರಾದವರಿಗೆ ಇದುವರೆಗೆ ಮನೆಗಳನ್ನು ಕಟ್ಟಿಸಿಕೊಟ್ಟಿಲ್ಲ. ದಿನ ಬೆಳಗಾದರೆ ಬಿಜೆಪಿ ಸರ್ಕಾರ ಕಚ್ಚಾಟದಲ್ಲಿ ತೊಡಗಿದೆ ಎಂದು ಆರೋಪಿಸಿದರು.

ಗ್ರಾಮಾಂತರ ಪ್ರದೇಶದಲ್ಲಿನ ಕುಡಿಯುವ ನೀರಿನ ಸಮಸ್ಯೆ, ಬೆಳೆ ನಾಶ, ಅಡಿಕೆ ಬೆಳೆಗೆ ಹರಡಿರುವ ಹಳದಿ ರೋಗ, ಇತ್ಯಾದಿ ವಿಷಯಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.

`ಪಕ್ಷಭೇದ ಮರೆತು ಕೈಜೋಡಿಸಿ~

ಬೆಂಗಳೂರು: ರಾಷ್ಟ್ರದಲ್ಲಿನ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಿ ಪ್ರಗತಿ ಸಾಧಿಸಲು ಎಲ್ಲರೂ ಪಕ್ಷಭೇದ ಮರೆತು ಕೈಜೋಡಿಸಬೇಕು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಕರೆ ನೀಡಿದರು.

ಪಕ್ಷದ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿದ ನಂತರ ಮಾತನಾಡಿದ ಅವರು, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸಮಸ್ಯೆಗಳು ಜನರನ್ನು ಕಾಡುತ್ತಿವೆ. ಇವುಗಳನ್ನು ಬಗೆಹರಿಸಲು ರಾಜಕೀಯ ಪಕ್ಷಗಳ ಮುಖಂಡರು ಒಗ್ಗೂಡಿ ಕಾರ್ಯನಿರ್ವಹಿಸಬೇಕು. ಸ್ವತಂತ್ರ ಭಾರತ ರೂಪುಗೊಳ್ಳಲು ಕಾರಣರಾದ ನಾಯಕರ ಆಶಯಗಳನ್ನು ಈಡೇರಿಸಲು ಸಂಕಲ್ಪ ಮಾಡಬೇಕು ಎಂದು ಸಲಹೆ ಮಾಡಿದರು. 

 ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ, ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ನಗರ ಘಟಕದ ಅಧ್ಯಕ್ಷ ನಾರಾಯಣ ರಾವ್ ಮೊದಲಾದವರು ಪಾಲ್ಗೊಂಡಿದ್ದರು.
 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.