ADVERTISEMENT

ಹಾಲಿ ಅಧಿವೇಶನದಲ್ಲೇ 371ನೇ ತಿದ್ದುಪಡಿ

ನೇಮಕಾತಿ ಪ್ರಕ್ರಿಯೆ ತಡೆ ಅನಗತ್ಯ: ಖರ್ಗೆ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2012, 19:54 IST
Last Updated 15 ಡಿಸೆಂಬರ್ 2012, 19:54 IST

ಬಳ್ಳಾರಿ: ಹೈದರಾಬಾದ್-ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗಾಗಿ ಸಿದ್ಧಪಡಿಸಿರುವ ಸಂವಿಧಾನದ 371ನೇ ಕಲಂ ತಿದ್ದುಪಡಿ ಮಸೂದೆಗೆ ಪ್ರಸಕ್ತ ಚಳಿಗಾಲದ ಅಧಿವೇಶನದಲ್ಲಿಯೇ ಒಪ್ಪಿಗೆ ಪಡೆಯಲು ಪ್ರಯತ್ನಿಸಲಾಗುವುದು ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ನಗರದಲ್ಲಿ ಶನಿವಾರ ಗಣಿ ಸುರಕ್ಷಾ ಇಲಾಖೆಯ ಪ್ರಾದೇಶಿಕ ಕಚೇರಿ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಮಸೂದೆಯಲ್ಲಿನ ಪ್ರಮುಖ ಅಂಶಗಳನ್ನು ತಿಳಿಯದೆ ರಾಜ್ಯ ಸರ್ಕಾರ ಅಡ್ಡಿಪಡಿಸಿದ್ದರಿಂದ ಸಂಸತ್ತಿನಲ್ಲಿ ಮಂಡನೆ ವಿಳಂಬವಾಯಿತು.

ಎಲ್ಲ ತಾಂತ್ರಿಕ ಅಡೆತಡೆಗಳನ್ನು ಈಗ ನಿವಾರಿಸಿದ್ದು ಸೋಮವಾರ ಅಥವಾ ಮಂಗಳವಾರ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ. ಇದಕ್ಕೆ ಯಾವುದೇ ಪಕ್ಷ ವಿರೋಧ ವ್ಯಕ್ತಪಡಿಸುವ ಸಾಧ್ಯತೆ ಇಲ್ಲವಾದ್ದರಿಂದ ಪ್ರಸಕ್ತ ಅಧಿವೇಶನದಲ್ಲೇ ಉಭಯ ಸದನಗಳಲ್ಲೂ ಒಪ್ಪಿಗೆಗೆ ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಒಂದೊಮ್ಮೆ ಈಗ ಮಸೂದೆ ಮಂಡನೆ ಸಾಧ್ಯವಾಗದಿದ್ದರೆ, ಬಜೆಟ್ ಅಧಿವೇಶನದಲ್ಲಿ ಖಂಡಿತವಾಗಿ  ಮಂಡನೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ಮಸೂದೆಗೆ ತಿದ್ದುಪಡಿ ಆಗುವವರೆಗೆ ನೇಮಕಾತಿ ಮತ್ತಿತರ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಲು ಸಾಧ್ಯವಿಲ್ಲ. ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 104 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಕೋರುವುದರಲ್ಲಿ ಅರ್ಥವಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT