ADVERTISEMENT

ಹಾಲ್‌ಟಿಕೆಟ್‌ಗೂ ಹಣ ವಸೂಲಿ

ವಿಜಾಪುರದಲ್ಲಿ ಪಿಯು ಉಪನ್ಯಾಸಕನ ಬಂಧನ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2014, 19:30 IST
Last Updated 1 ಮಾರ್ಚ್ 2014, 19:30 IST

ವಿಜಾಪುರ: ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯ ಪ್ರವೇಶ ಪತ್ರ (ಹಾಲ್‌ಟಿಕೆಟ್‌) ನೀಡಲು ವಿದ್ಯಾರ್ಥಿಗಳಿಂದ ತಲಾ ₨ 20 ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಇಲ್ಲಿಯ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಕೆ.ಜಿ. ಲಮಾಣಿ ಅವರನ್ನು ಬಂಧಿಸಿರುವುದಾಗಿ ಲೋಕಾಯುಕ್ತ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ವಿ. ಪ್ರಭಾಕರ ತಿಳಿಸಿದ್ದಾರೆ.

‘ಪ್ರವೇಶ ಪತ್ರ ನೀಡಲು ತಲಾ ₨20 ವಸೂಲಿ ಮಾಡಲಾಗುತ್ತಿದೆ ಎಂದು ಕೆಲ ವಿದ್ಯಾರ್ಥಿಗಳು ಮೌಖಿಕ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಪದವಿ ಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರೊಂದಿಗೆ ಕಾಲೇಜಿನ ಮೇಲೆ ಶನಿವಾರ ದಾಳಿ ಮಾಡಲಾಯಿತು. ವಿದ್ಯಾರ್ಥಿಗಳಿಂದ ಹಣ ಪಡೆದು ಪ್ರವೇಶ ಪತ್ರ ಹಂಚುತ್ತಿದ್ದ ಲಮಾಣಿ ಅವರನ್ನು ಬಂಧಿಸಲಾಯಿತು’ ಎಂದು ಅವರು ಹೇಳಿದ್ದಾರೆ.

ಬಂಧಿತನಿಂದ ₨2,900 ವಶಪಡಿಸಿಕೊಳ್ಳಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅಮಾನತಿಗೆ ಶಿಫಾರಸು: ‘ಲೋಕಾಯುಕ್ತ ಪೊಲೀಸರು ಬಂಧಿಸಿರುವ ಲಮಾಣಿ ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಇಲಾಖೆಯ ನಿರ್ದೇಶಕರಿಗೆ ಶಿಫಾರಸು ಮಾಡಲಾಗುವುದು’ ಎಂದು ಪದವಿ ಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಕೆ.ಎಂ. ಚೌರ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.