ADVERTISEMENT

‘ಹಿಂಬಾಗಿಲು ತಟ್ಟಿ ಹೊಲಸು ರಾಜಕೀಯ’

​ಪ್ರಜಾವಾಣಿ ವಾರ್ತೆ
Published 15 ಮೇ 2018, 19:30 IST
Last Updated 15 ಮೇ 2018, 19:30 IST

ಬೆಂಗಳೂರು: ‘ರಾಜ್ಯದ ಜನ ಕಾಂಗ್ರೆಸ್ಸನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಕ್ಷೇತ್ರದಲ್ಲೇ ಹೀನಾಯ ಸೋಲು ಅನುಭವಿಸಿದ್ದಾರೆ. ಆದರೂ, ಅಧಿಕಾರದ ದಾಹಕ್ಕೆ ಹಿಂಬಾಗಿಲು ತಟ್ಟುತ್ತಾ ಹೊಲಸು ರಾಜಕೀಯ ಮಾಡುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜನ ಬದಲಾವಣೆ ಬಯಸಿ ಬಿಜೆಪಿಗೆ ಜನಾದೇಶ ನೀಡಿದ್ದಾರೆ. ಆದರೆ, ಕಾಂಗ್ರೆಸ್ ಹಾಗೂ ಜೆಡಿಎಸ್ ಜನರ ತೀರ್ಮಾನಕ್ಕೆ ವಿರುದ್ಧವಾಗಿ ವರ್ತಿಸುತ್ತಿವೆ. ಸರ್ಕಾರ ರಚನೆಗೆ ವಾಮಮಾರ್ಗದ ಮೂಲಕ ಕಸರತ್ತು ನಡೆಸುತ್ತಿವೆ’ ಎಂದು ಆರೋಪಿಸಿದರು.

‘ಕಾಂಗ್ರೆಸ್ ದುರಾಡಳಿತದಿಂದ ಬೇಸತ್ತಿದ್ದ ಜನ, ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಂತೆ ‘ಕಾಂಗ್ರೆಸ್ ಮುಕ್ತ ಕರ್ನಾಟಕ’ ರಚಿಸಲು ಮುಂದಡಿ ಇಟ್ಟಿದ್ದಾರೆ. ನಮಗೆ ಆಶೀರ್ವದಿಸಿದ ಎಲ್ಲ ಮತದಾರರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಆದರೆ, ಸರ್ಕಾರ ರಚಿಸುವಷ್ಟು ಬಲ ನೀಡಬೇಕಿತ್ತು. ಮುಂದಿನ ನಿಲುವಿನ ಬಗ್ಗೆ ಪಕ್ಷದ ರಾಷ್ಟ್ರೀಯ ಮುಖಂಡರ ಜತೆ ಚರ್ಚಿಸುತ್ತೇನೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.