ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದು ಹೋಗುವ ಮೈಸೂರು–ಕೇರಳದ ಕೊಯಿಕ್ಕೋಡ್ ಹೈಟೆನ್ಷನ್ ವಿದ್ಯುತ್ ಮಾರ್ಗದ ಕಾಮಗಾರಿ ಸ್ಥಗಿತಗೊಳಿಸಲು ಕಾವೇರಿ ಸೇನೆ ಹಾಗೂ ಬಸವಣ್ಣ ದೇವರ ಬನ ಸಂರಕ್ಷಣಾ ಟ್ರಸ್ಟ್ ಪದಾಧಿಕಾರಿಗಳು ಆಗ್ರಹಿಸಿದರು.
ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ದೇವಮಚ್ಚಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಕಾಮಗಾರಿಯ ಸ್ಥಳಕ್ಕೆ ಸೋಮವಾರ ಭೇಟಿ ನೀಡಿದ ಸಂಘಟನೆಯ ಪ್ರಮುಖರು, ಪವರ್ ಗ್ರೀಡ್ ಸಂಸ್ಥೆಯ ವಿರುದ್ಧ ಹರಿಹಾಯ್ದರು.
ಬಸವಣ್ಣ ದೇವರ ಬನ ಸಂರಕ್ಷಣಾ ಟ್ರಸ್ಟ್ ಅಧ್ಯಕ್ಷ ಡಾ.ಬಿ.ಸಿ. ನಂಜಪ್ಪ ಮಾತನಾಡಿ, ಕೊಡಗಿನ ಅರಣ್ಯ ಪ್ರದೇಶವನ್ನು ಲೂಟಿ ಮಾಡುವ ಉದ್ದೇಶದಿಂದ ವಿದ್ಯುತ್ ಕಾಮಗಾರಿ ಆರಂಭಿಸಲಾಗಿದೆ. ಕಾಮಗಾರಿ ಅನುಷ್ಠಾನಕ್ಕಾಗಿ ಲಕ್ಷಾಂತರ ಮರಗಳನ್ನು ಕಡಿಯಲಾಗುತ್ತಿದೆ. ಇದರಿಂದ ಕಾವೇರಿ ಜಲಮೂಲಕ್ಕೆ ಧಕ್ಕೆ ಉಂಟಾಗಲಿದೆ ಎಂದು ಆರೋಪಿಸಿದರು.
ಕಾವೇರಿ ಸೇನೆ ಸಂಚಾಲಕ ರವಿ ಚಂಗಪ್ಪ ಮಾತನಾಡಿ, ವಿವಿಧ ಯೋಜನೆಗಳ ಹೆಸರಿನಲ್ಲಿ ಕೊಡಗಿನ ಪರಿಸರವನ್ನು ನಾಶ ಮಾಡಲು ಸರ್ಕಾರ ಹೊರಟಿದೆ. ಜನರು ಒಗ್ಗಟ್ಟಾಗಿ ಹೋರಾಟ ಮಾಡಲು ಮುಂದೆ ಬರಬೇಕು ಎಂದರು.
ಈ ಹೋರಾಟವನ್ನು ಹತ್ತಿಕ್ಕುವ ಉದ್ದೇಶದಿಂದ ನಮ್ಮ ಮೇಲೆ ವಿನಾಕಾರಣ ಮೊಕದ್ದಮೆ ದಾಖಲಿಸುವ ಪ್ರಯತ್ನವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.