ADVERTISEMENT

ಹೋರಾಟ ನಿಲ್ಲಿಸಲು ಮಾದಿಗ ಸಮುದಾಯಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2018, 19:30 IST
Last Updated 19 ಮಾರ್ಚ್ 2018, 19:30 IST

ಬೆಂಗಳೂರು: ಕಾಂಗ್ರೆಸ್‌ ಪಕ್ಷವು ಮಾದಿಗ ಸಮುದಾಯಕ್ಕೆ ರಾಜಕೀಯ ಮತ್ತು ಆರ್ಥಿಕ ಶಕ್ತಿ ನೀಡಿರುವುದರಿಂದ ಹೋರಾಟ ನಿಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಮನವಿ ಮಾಡಿದರು.

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾದಿಗ ಸಮುದಾಯಕ್ಕೆ ಹೆಚ್ಚಿನ ರಾಜಕೀಯ ಬಲ ನೀಡಿದ್ದಾರೆ ಎಂದು ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಆದಿಜಾಂಬವ ಅಭಿವೃದ್ಧಿ ನಿಗಮ ಸ್ಥಾಪನೆಯ ಮೂಲಕ ಜನಾಂಗಕ್ಕೆ ಆರ್ಥಿಕ ಅಭಿವೃದ್ಧಿಯ ಬಾಗಿಲನ್ನೇ ತೆರೆದಿದ್ದಾರೆ. ಪೌರ ಕಾರ್ಮಿಕರ ಶೈಕ್ಷಣಿಕ, ಆರ್ಥಿಕ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಪೌರ ಕಾರ್ಮಿಕ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು.

ADVERTISEMENT

ಎಡಗೈ ಸಮುದಾಯಕ್ಕೆ ಸೇರಿದ ಎ. ಮುನಿಯಪ್ಪ ಪರಿಶಿಷ್ಟ ಜಾತಿ ಮತ್ತು ಪಂಗಡದ ಆಯೋಗದ ಅಧ್ಯಕ್ಷ, ಎಂ.ಆರ್‌.ವೆಂಕಟೇಶ್‌ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ, ಓ.ಶಂಕರ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್‌), ಎಸ್‌.ಮಾರೆಪ್ಪ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ, ಎ.ಮಾನಯ್ಯ ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ, ಬಿ.ಎನ್‌.ಕೃಷ್ಣಮೂರ್ತಿ ಆಹಾರ ಆಯೋಗದ ಅಧ್ಯಕ್ಷ ಮತ್ತು ಕೃಷ್ಣಮೂರ್ತಿ ಅವರನ್ನು ಮಾಹಿತಿ ಹಕ್ಕು ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಅವರು ಹೇಳಿದರು.

ಸಚಿವ ಸಂಪುಟ ಉಪ ಸಮಿತಿ ವರದಿ ಬರುವವರೆಗೂ ಮಾದಿಗ ದಂಡೋರ ಮತ್ತು ಮಾದಿಗ ಮೀಸಲಾತಿ ಹೋರಾಟ ಸಮಿತಿ ನಾಯಕರು  ಹೋರಾಟ ನಿಲ್ಲಿಸಬೇಕು ಎಂದು ಆಂಜನೇಯ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.