ಬೆಂಗಳೂರು: ಪ್ರಾಥಮಿಕ ಶಿಕ್ಷಣದಲ್ಲಿ ಕಲಿಕಾ ಮಾಧ್ಯಮ ವಿಷಯ ಕುರಿತು ನೀಡಿದ್ದ ತೀರ್ಪು ಪುನರ್ ಪರಿಶೀಲಿಸುವಂತೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಮಾಧ್ಯಮ ವಿವಾದದ ಬಗ್ಗೆ ಮಂಗಳವಾರ ಇಲ್ಲಿ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಕಲಿಕಾ ಮಾಧ್ಯಮ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಂದಿರುವ ಮಾರ್ಗೋಪಾಯಗಳ ಬಗ್ಗೆ ಚರ್ಚೆ ನಡೆಸಿದ್ದು, ಮೊದಲ ಹಂತದಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲಾಗುವುದು ಎಂದರು.
ಸುಪ್ರೀಂ ಕೋರ್ಟ್‌ಗೆ ಈಗ ರಜೆ ಇದೆ. ಜೂನ್ 6ರವರೆಗೂ ಅರ್ಜಿ ಸಲ್ಲಿಸಲು ಅವಕಾಶ ಇದೆ. ಅಷ್ಟರ ಒಳಗೆ ಅರ್ಜಿ ಸಲ್ಲಿಸಲು ಕ್ರಮಕೈಗೊಳ್ಳಲಾಗುವುದು ಎಂದು ವಿವರಿಸಿದರು.
ಪುನರ್ ಪರಿಶೀಲನಾ ಅರ್ಜಿಯಿಂದ ನ್ಯಾಯ ಸಿಗದೆ ಇದ್ದರೆ ಸುಪ್ರೀಂ ಕೋರ್ಟ್ ಮುಂದೆ ‘ಪರಿಹಾರಕ ಅರ್ಜಿ’ (ಕ್ಯುರೇಟಿವ್ ಪಿಟಿಷನ್) ಸಲ್ಲಿಸಲಾಗುವುದು ಎಂದರು.
ಭಾಷಾ ನೀತಿ ವಿಚಾರದಲ್ಲಿ ಬೇರೆ ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗುವುದು ಎಂದರು.
ಕೇಂದ್ರಕ್ಕೆ ಪತ್ರ: ಭಾಷಾ ನೀತಿ ವಿಚಾರದಲ್ಲಿ ಕಾಯ್ದೆ ರಚಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಸಂವಿಧಾನಕ್ಕೆ ತಿದ್ದುಪಡಿ ತರುವ ಮೂಲಕ ಭಾಷಾ ನೀತಿಯೊಂದನ್ನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಒತ್ತಡ ಹೇರಲಾಗುವುದು ಎಂದರು.
ಕಾನೂನು ಹೋರಾಟದ ಜೊತೆಗೆ ರಾಜಕೀಯ ಇಚ್ಛಾಶಕ್ತಿ ಮೂಲಕವೂ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಇಡೀ ದೇಶಕ್ಕೆ ಅನ್ವಯವಾಗುವಂತಹ ಭಾಷಾ ನೀತಿಯನ್ನು ರೂಪಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದರು.
ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಕಾನೂನು ಸಚಿವ ಟಿ.ಬಿ.ಜಯಚಂದ್ರ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ, ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ, ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.