ADVERTISEMENT

ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿಕೆ: ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 19:20 IST
Last Updated 12 ಜೂನ್ 2020, 19:20 IST
ಶಿರಸಿಯ ಯಲ್ಲಾಪುರ ರಸ್ತೆಯಲ್ಲಿ ಶುಕ್ರವಾರ ಮಳೆ ನೀರು ನಿಂತು ಹೊಳೆಯಂತೆ ಕಂಡು ಬಂತು
ಶಿರಸಿಯ ಯಲ್ಲಾಪುರ ರಸ್ತೆಯಲ್ಲಿ ಶುಕ್ರವಾರ ಮಳೆ ನೀರು ನಿಂತು ಹೊಳೆಯಂತೆ ಕಂಡು ಬಂತು   

ಬೆಂಗಳೂರು: ರಾಜ್ಯದ ಕರಾವಳಿ ಸಹಿತ ಹಲವೆಡೆ ಮಳೆ ಮುಂದುವರಿದಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಮನೆ ಎದುರಿನ ತೋಡಿಗೆ ಬಿದ್ದು ಬಾಲಕನೊಬ್ಬ ಮೃತಪಟ್ಟಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರದಲ್ಲಿ ಕಾಂಪೌಂಡ್ ಗೋಡೆ ಕುಸಿದು 52 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ, ಬೈಂದೂರಿನಲ್ಲೂ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಮಂಗಳೂರು, ಪುತ್ತೂರು, ಸುಳ್ಯ ತಾಲ್ಲೂಕಿನಲ್ಲಿ ಮಳೆಯ ಆರ್ಭಟ ಮುಂದುವರಿದಿದೆ.

ADVERTISEMENT

ಚಿಕ್ಕಮಗಳೂರಿನ ಶೃಂಗೇರಿ ತಾಲ್ಲೂಕಿನಲ್ಲಿ ಗುರುವಾರ ರಾತ್ರಿಯಿಂದ ಉತ್ತಮ ಮಳೆಯಾಗಿದ್ದು, ತುಂಗಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಎನ್‌.ಆರ್‌.ಪುರ, ಕೊಪ್ಪ, ಮೂಡಿಗೆರೆಯಲ್ಲಿ ಮಳೆಯಾಗಿದೆ.

ಕಾರವಾರದಲ್ಲಿ ಸಮುದ್ರ ಪ್ರಕ್ಷುಬ್ಧವಾಗಿದ್ದು, ದೊಡ್ಡ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಮೀನುಗಾರರು ಈಗಾಗಲೇ ಬಂದರಿಗೆ ವಾಪಸಾಗಿದ್ದು, ದೋಣಿಗಳನ್ನು ಲಂಗರು ಹಾಕಿದ್ದಾರೆ. ಭಟ್ಕಳ, ಹೊನ್ನಾವರ, ಅಂಕೋಲಾದಲ್ಲೂ ಮಧ್ಯಾಹ್ನದವರೆಗೆ ಬಿರುಸಾಗಿ ಮಳೆ ಸುರಿಯಿತು. ಮಲೆನಾಡಿನ ಶಿರಸಿ, ಸಿದ್ದಾಪುರ, ಯಲ್ಲಾಪುರದಲ್ಲಿ ಸಾಧಾರಣ ಮಳೆಯಾಗಿದೆ.

ಪಶ್ಚಿಮ ಘಟ್ಟಕ್ಕೆ ಹೊಂದಿಕೊಂಡಿರುವ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಧಾರಾಕಾರವಾಗಿ ಮಳೆ ಸುರಿದಿದೆ. ಮಹದಾಯಿ ಹಾಗೂ ಮಲಪ್ರಭಾ ನದಿಗಳಲ್ಲಿ ಸಣ್ಣ ಪ್ರಮಾಣದಲ್ಲಿ ನೀರು ಹರಿಯಲಾರಂಭಿಸಿದೆ. ಮಳೆ ಮತ್ತು ಗಾಳಿಗೆ ಜಾಂಬೋಟಿ ಮತ್ತು ಕಣಕುಂಬಿ ಅರಣ್ಯದಲ್ಲಿ ಅಲ್ಲಲ್ಲಿ ಮರಗಳು ಧರೆಗುರುಳಿ ರಸ್ತೆ ಸಂಚಾರಕ್ಕೆ ತೊಡಕಾಗಿದೆ.

ಬೆಳಗಾವಿ, ರಾಮದುರ್ಗ, ಹೊಸಪೇಟೆ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನಲ್ಲಿ ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ಕಿರು ಸೇತುವೆ ಮುರಿದು ಗ್ರಾಮಗಳ ನಡುವಣ ರಸ್ತೆ ಸಂಪರ್ಕ ಕಡಿದು ಹೋಗಿದೆ.

ಕೊಡಗು ಜಿಲ್ಲೆಯ ಮಡಿಕೇರಿ, ನಾಪೋಕ್ಲು, ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ಶುಕ್ರವಾರ ಮಧ್ಯಾಹ್ನದ ಬಳಿಕ ಸಾಧಾರಣ ಮಳೆಯಾಗಿದೆ. ಬೆಳಿಗ್ಗೆ ಬಿಸಿಲಿನ ವಾತಾವರಣ ಕಂಡುಬಂದಿತ್ತು.

ಹಾಸನ ಜಿಲ್ಲೆಯ ವಿವಿಧೆಡೆ ಸಂಜೆ ಮಳೆ ಸುರಿಯಿತು. ಹಾಸನ ನಗರದಲ್ಲಿ ಅರ್ಧ ತಾಸಿಗೂ ಹೆಚ್ಚು ಮಳೆ ಆಯಿತು.

ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಚುರುಕುಗೊಂಡಿದ್ದು, ಎಲ್ಲ ತಾಲ್ಲೂಕುಗಳಲ್ಲಿ ಮಳೆ ಸುರಿಯಲಾರಂಭಿಸಿದೆ.ದಾವಣಗೆರೆ ನಗರ ಸೇರಿ ಜಿಲ್ಲೆಯ ಕೆಲವೆಡೆ,ಚಿತ್ರದುರ್ಗದ ಚಿಕ್ಕಜಾಜೂರಿನಲ್ಲಿ ಸಾಧಾರಣ ಮಳೆಯಾಗಿದೆ.

11 ಜಿಲ್ಲೆಗಳಲ್ಲಿ ಇಂದು 'ಆರೆಂಜ್ ಅಲರ್ಟ್'
ರಾಜ್ಯದ ಒಳನಾಡಿನಲ್ಲಿ ನೈರುತ್ಯ ಮುಂಗಾರು ಚುರುಕಾಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜೂನ್‌ 13ರಂದು ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿರುವಹಿನ್ನೆಲೆಯಲ್ಲಿ ಶನಿವಾರ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ಭಾನುವಾರವೂ ಕರಾವಳಿಯಲ್ಲಿ ಮಳೆ ಮುಂದುವರಿಯಲಿದೆ.

'ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಒಳನಾಡಿನಲ್ಲಿ ಮುಂಗಾರು ಚುರುಕಾಗಿದೆ. ಇದರ ಪರಿಣಾಮ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನಗಳವರೆಗೆ ಭಾರಿ ಮಳೆಯಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ. ಬಳಿಕ ಮಳೆ ಪ್ರಮಾಣ ತಗ್ಗಲಿದೆ' ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಶುಕ್ರವಾರ 9 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಕಾರವಾರ, ಗೋಕರ್ಣ 8, ಅಂಕೋಲ, ಮಂಕಿ 7, ಬಸವನ ಬಾಗೇವಾಡಿ 6, ಪಣಂಬೂರು, ಸುಬ್ರಹ್ಮಣ್ಯ, ಮಂಗಳೂರು, ಹೊಸನಗರ, ಹೆಸರಘಟ್ಟದಲ್ಲಿ ತಲಾ 3 ಸೆಂ.ಮೀ.ಮಳೆಯಾಗಿದೆ. ಕಲಬುರ್ಗಿಯಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.