ADVERTISEMENT

4 ಲಕ್ಷ ಕಟ್ಟಡ ಕಾರ್ಮಿಕರಿಗೆ ₹ 10 ಕೋಟಿ ವರ್ಗಾವಣೆ– ಮುಖ್ಯಮಂತ್ರಿ ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 5 ಜೂನ್ 2021, 7:53 IST
Last Updated 5 ಜೂನ್ 2021, 7:53 IST
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ   

ಬೆಂಗಳೂರು: ಮೊದಲ ಹಂತದ ಆರ್ಥಿಕ ಪ್ಯಾಕೇಜ್‌ನಲ್ಲಿ ಘೋಷಿಸಿದಂತೆ, ಕೋವಿಡ್‌ನಿಂದ ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ತಲಾ ₹ 3 ಸಾವಿರ ಪರಿಹಾರ ಧನ ವಿತರಣೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಶನಿವಾರ ಚಾಲನೆ ನೀಡಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇವತ್ತು (ಶನಿವಾರ) 4 ಲಕ್ಷ ಕಟ್ಟಡ ಕಾರ್ಮಿಕರಿಗೆ ₹ 10 ಕೋಟಿ ವರ್ಗಾವಣೆ ಮಾಡಿದ್ದೇನೆ. ಸುಮಾರು 25 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಒಟ್ಟು 749.55 ಕೋಟಿ ವರ್ಗಾವಣೆ ಮಾಡಲಾಗುತ್ತಿದೆ’ ಎಂದರು.

‘ಅಸಂಘಟಿತ ವಲಯದ ಒಟ್ಟು 11 ವರ್ಗದ ಕಾರ್ಮಿಕರಿಗೆ (ಕ್ಷೌರಿಕರು, ಅಗಸರು, ಟೈಲರ್‌ಗಳು, ಹಮಾಲಿಗಳು, ಚಿಂದಿ ಆಯುವವರು, ಕುಂಬಾರರು, ಭಟ್ಟಿ ಕಾರ್ಮಿಕರು, ಅಕ್ಕಸಾಲಿಗರು, ಮೆಕ್ಯಾನಿಕ್‌ಗಳು, ಕಮ್ಮಾರರು, ಗೃಹ ಕಾರ್ಮಿಕರು) ಅರ್ಜಿ ಸಲ್ಲಿಸಲು ಅನುಕೂಲ ಆಗುವಂತೆ ಆನ್‌ಲೈನ್‌ ಅರ್ಜಿ ಸಲ್ಲಿಸುವ ವ್ಯವಸ್ಥೆಗೂ ಚಾಲನೆ ನೀಡಲಾಗಿದೆ’ ಎಂದೂ ತಿಳಿಸಿದರು.

ADVERTISEMENT

ಮೈಸೂರಿನಲ್ಲಿ ಐಎಎಸ್‌ ಅಧಿಕಾರಿಗಳ ನಡುವಿನ ಸಂಘರ್ಷದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಮುಖ್ಯ ಕಾರ್ಯದರ್ಶಿಯವರು ಶುಕ್ರವಾರ ಈ ಬಗ್ಗೆ ವಿಚಾರಣೆ ನಡೆಸಿ ಬಂದಿದ್ದಾರೆ. ಬೆಳಿಗ್ಗೆ ಈ ಬಗ್ಗೆ ನನಗೆ ವಿವರಣೆಯನ್ನೂ ನೀಡಿದ್ದಾರೆ. ಸಂಜೆ ಈ ಬಗ್ಗೆ ಚರ್ಚಿ, ತೀರ್ಮಾನ ತೆಗೆದುಕೊಳ್ಳುತ್ತೇನೆ’ ಎಂದರು.

‘ಯಾವ ಯಾವ ಜಿಲ್ಲೆಯಲ್ಲಿ ಕೋವಿಡ್‌ ದೃಢಪಡುವ ಪ್ರಮಾಣ ಶೇ 5ಕ್ಕೆ ಇಳಿಯುತ್ತದೆಯೋ ಆ ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಸಡಿಲಿಸುವ ಬಗ್ಗೆ ಅಧಿಕಾರಿಗಳು ಮತ್ತು ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಚರ್ಚಿಸಿ 4– 5 ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇನೆ’ ಎಂದರು.

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ನಡೆಸುವ ತೀರ್ಮಾನದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಜುಲೈ ತಿಂಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನೆಡೆಸುವ ಬಗ್ಗೆ ಶಿಕ್ಷಣ ಸಚಿವರು ಪ್ರಸ್ತಾಪಿಸಿದ್ದಾರೆ. ಅಲ್ಲಿಯವರೆಗೆ ಪರಿಸ್ಥಿತಿ ನೋಡಿಕೊಂಡು, ಪರಿಸ್ಥಿತಿ ಸುಧಾರಣೆಯಾದರೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.