ADVERTISEMENT

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ: ಮಲ್ಲಿಕಾರ್ಜುನ ಖರ್ಗೆ ಸ್ವಾಗತ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2022, 19:47 IST
Last Updated 7 ನವೆಂಬರ್ 2022, 19:47 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ    

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ (ಇಡಬ್ಲ್ಯುಎಸ್‌) ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ 10 ಮೀಸಲಾತಿ‌ ಕಲ್ಪಿಸಿ ಸಂವಿಧಾನಕ್ಕೆ ಮಾಡಲಾದ 103ನೇ ತಿದ್ದುಪಡಿಯು ಸಂವಿಧಾನಬದ್ಧ ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಿಂದ ಸೋಮವಾರ ಸಂಜೆ ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಖರ್ಗೆ, ‘ಮೀಸಲಾತಿ ಪ್ರಸ್ತಾವನೆಯನ್ನು ಲೋಕಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಿದ್ದೆವು. ಅದನ್ನು ಸುಪ್ರೀಂ ಕೋರ್ಟ್ ಎತ್ತಿ‌ ಹಿಡಿದಿದೆ. ಸುಪ್ರೀಂ ಕೋರ್ಟ್ ತೀರ್ಪುನ್ನು ಸ್ವಾಗತಿಸುತ್ತೇನೆ’ ಎಂದರು.

ಎಲ್ಲರೂ ಸಹಕಾರ ನೀಡುತ್ತಾರೆಂಬ ವಿಶ್ವಾಸವಿದೆ: ‘ಈಗಾಗಲೇ ರಾಜ್ಯದ ಪಕ್ಷದ ನಾಯಕರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಒಗ್ಗಟ್ಟಾಗಿ ಹೋರಾಟ ಮಾಡುವಂತೆ ನಾನು ಎಲ್ಲ ನಾಯಕರಿಗೂ ಸ್ಪಷ್ಟವಾಗಿ ಹೇಳಿದ್ದೇನೆ. ಪಕ್ಷಕ್ಕೆ ಎಲ್ಲರೂ ಕೆಲಸ ಮಾಡುತ್ತೇವೆಂದು ಹೇಳಿದ್ದಾರೆ‌. ಎಲ್ಲರೂ ಸಹಕಾರ ನೀಡುತ್ತಾರೆಂಬ ವಿಶ್ವಾಸವಿದೆ’ ಎಂದರು.

ADVERTISEMENT

ಹಿಮಾಚಲ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಮಂಗಳವಾರದಿಂದ ಖರ್ಗೆ ಭಾಗವಹಿಸಲಿದ್ದಾರೆ.

‘ಸಂವಿಧಾನದ ಆಶಯಗಳಿಗೆ ಧಕ್ಕೆ’
ಕಲಬುರಗಿ:
‘ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರಷ್ಟು ಮೀಸಲಾತಿ ಕಲ್ಪಿಸುವ ಕೇಂದ್ರ ಸರ್ಕಾರದ ನಿಲುವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್ ತೀರ್ಪು ದುರದೃಷ್ಟಕರ. ಇದರಿಂದ ಸಂವಿಧಾನದ ಆಶಯಗಳಿಗೆ ಎಳ್ಳುನೀರು ಬಿಟ್ಟಂತಾಗಿದೆ’ ಎಂದು ದಲಿತ ಸಂಘರ್ಷ ಸಮಿತಿ ಮುಖಂಡ ಗುರುಪ್ರಸಾದ್ ಕೆರಗೋಡು ಬೇಸರ ವ್ಯಕ್ತಪಡಿಸಿದರು.

ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯಿಂದ ಸೋಮವಾರ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ‘ದಲಿತರ ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆದಂತಾಗಿದೆ’ ಎಂದರು. ‘ಮೀಸಲಾತಿ ಎಂಬುದು ಬಡತನ ನಿರ್ಮೂಲನೆ ಕಾರ್ಯಕ್ರಮ ಅಲ್ಲ. ಶತಮಾನಗಳಿಂದ ಅನುಭವಿಸಿದ ಅವಮಾನ, ಅಸ್ಪೃಶ್ಯತೆ ತೊಡೆದು ಹಾಕಲು ಪರಿಶಿಷ್ಟರಿಗೆ ಮೀಸಲಾತಿ ಕಲ್ಪಿಸಲಾಗಿದೆ. ಬ್ರಾಹ್ಮಣ, ವೈಶ್ಯ, ಕ್ಷತ್ರಿಯ, ಮೊದಲಿಯರ್ ಸಮುದಾಯದ ಕೆಲವನ್ನು ಹೊರತುಪಡಿಸಿ ಉಳಿದೆಲ್ಲರಿಗೂ ಮೀಸಲಾತಿಯಿದೆ’ ಎಂದರು.

‘ಶೇ 10ರಷ್ಟು ಮೀಸಲಾತಿಯನ್ನು ಮೇಲ್ಜಾತಿಯ ಆರ್ಥಿಕವಾಗಿ ಹಿಂದುಳಿದವರಿಗೆ ನೀಡುವ ಮೂಲಕ ನಿಜವಾದ ಶೋಷಿತರಿಗೆ ಹಿನ್ನಡೆ
ಯಾಗಿದೆ. ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಿಸಿದ್ದು ಸ್ವಾಗತಾರ್ಹ. ಆದರೆ, ಎಲ್ಲ ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣ ಮಾಡಿದರೆ ಮೀಸಲಾತಿಯ ಅರ್ಥವಾದರೂ ಏನು ಉಳಿಯುತ್ತದೆ’ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.