ಬೆಂಗಳೂರು: ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇದೇ 15 ಮತ್ತು 16ರಂದು ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಪೂರಕವಾಗಿ ರ್‍್ಯಾಲಿಗಳನ್ನು ನಡೆಸಲಿದ್ದಾರೆ.
ಕೇಜ್ರಿವಾಲ್ ಅವರು ಮಾರ್ಚ್ 15ರ ಬೆಳಿಗ್ಗೆ ಬೆಂಗಳೂರಿಗೆ ಬರುವರು. ಅದೇ ದಿನ ರಾಜಧಾನಿಯ ಆಯ್ದ ಪ್ರದೇಶಗಳಲ್ಲಿ ಪಕ್ಷದ ಅಭ್ಯರ್ಥಿಗಳ ಜೊತೆ ‘ರೋಡ್ ಷೋ’ ನಡೆಸುವರು. ಮಾ.16ರಂದು ಜನಸಭಾ ಸಮಾವೇಶ ನಡೆಸುವರು. ಸಮಾವೇಶದ ಸ್ಥಳ ಇನ್ನೂ ನಿಗದಿಯಾಗಿಲ್ಲ. ಜೊತೆಯಲ್ಲೇ ಚಿಕ್ಕಬಳ್ಳಾಪುರ ಅಥವಾ ದೊಡ್ಡಬಳ್ಳಾಪುರದಲ್ಲೂ ರ್‍್ಯಾಲಿ ನಡೆಸಲು ಯೋಚಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಎಎಪಿ ವಕ್ತಾರ ಮಹಂತೇಶ್ ಅರಳಿ, ‘ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಕೇಜ್ರಿವಾಲ್ ಅವರು ರಾಜ್ಯಕ್ಕೆ ಬರುವ ಮುನ್ನವೇ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಎರಡನೇ ಪಟ್ಟಿಯನ್ನು ಕೇಜ್ರಿವಾಲ್ ಅವರೇ ಬಿಡುಗಡೆ ಮಾಡಲಿದ್ದಾರೆ’ ಎಂದರು.
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಎಎಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಮತದಾರರಲ್ಲಿ ಜಾಗೃತಿ ಮೂಡಿಸಲು ಈಗಾಗಲೇ ಮನೆ, ಮನೆ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅಥವಾ ವಿವೇಕಾನಂದ ಯೂತ್ ಮೂವ್ಮೆಂಟ್ನ ಡಾ.ಆರ್.ಬಾಲಸುಬ್ರಹ್ಮಣ್ಯಂ ಅವರ ಸ್ಪರ್ಧೆ ಸಾಧ್ಯತೆ ಕುರಿತು ಪ್ರಶ್ನಿಸಿದಾಗ, ‘ಅಂತಹ ಸಾಧ್ಯತೆಗಳು ಇಲ್ಲ. ವಯಸ್ಸಿನ ಕಾರಣದಿಂದಾಗಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹಿರೇಮಠ ಮತ್ತು ದೊರೆಸ್ವಾಮಿ ಈಗಾಗಲೇ ತಿಳಿಸಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.