ADVERTISEMENT

17.65 ಲಕ್ಷ ಹೆಕ್ಟೇರ್ ಮುಂಗಾರು ಬಿತ್ತನೆ

ವಾಡಿಕೆಗಿಂತ ಅಧಿಕ ಮಳೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2013, 19:59 IST
Last Updated 19 ಜೂನ್ 2013, 19:59 IST

ಬೆಂಗಳೂರು: ಜೂನ್ ತಿಂಗಳಲ್ಲಿ ವಾಡಿಕೆಗಿಂತ ಅಧಿಕ ಮಳೆ ಆಗಿರುವುದರಿಂದ ಬಿತ್ತನೆ ಕಾರ್ಯ ಚುರುಕಾಗಿದೆ. ಇದುವರೆಗೆ ರಾಜ್ಯದ 17.65 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 7.29 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಆಗಿತ್ತು ಎಂದು ಕೃಷಿ ಇಲಾಖೆಯ ಮೂಲಗಳು ತಿಳಿಸಿವೆ.

ಕಳೆದ ಐದು ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಜೂನ್ 17ರವರೆಗಿನ ಬಿತ್ತನೆ ಪ್ರಮಾಣ ಹೆಚ್ಚಾಗಿದೆ. ಹಿಂದಿನ ಐದು ವರ್ಷಗಳಲ್ಲಿ ಇದೇ ಅವಧಿಯಲ್ಲಿ ಸರಾಸರಿ 10.73 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿತ್ತು. ಈ ವರ್ಷ ಒಟ್ಟು 74.29 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಉದ್ದೇಶವಿದ್ದು, ಗುರಿ ಮುಟ್ಟುವ ವಿಶ್ವಾಸ ಇದೆ ಎಂದು ಕೃಷಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು `ಪ್ರಜಾವಾಣಿ'ಗೆ ತಿಳಿಸಿದರು.

ರಾಜ್ಯದ 30 ಜಿಲ್ಲೆಗಳಲ್ಲಿ ಬಿತ್ತನೆ ಕಾರ್ಯ ಆರಂಭವಾಗಿದ್ದು, ನೀರಾವರಿ ಆಶ್ರಯದಲ್ಲಿ 4.54 ಲಕ್ಷ ಹೆಕ್ಟೇರ್ ಹಾಗೂ ಮಳೆ ಆಶ್ರಯದಲ್ಲಿ 13.11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ವಾಡಿಕೆ ಪ್ರಮಾಣದಲ್ಲಿ ಮಳೆ ಆಗದ ಕಾರಣ ಬಿತ್ತನೆ ಕಾರ್ಯಕ್ಕೆ ಹಿನ್ನಡೆಯಾಗಿದೆ. ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲೂ ವಾಡಿಕೆ ಪ್ರಮಾಣದಲ್ಲಿ ಮಳೆಯಾಗಿಲ್ಲ. ಈ ಜಿಲ್ಲೆಗಳಲ್ಲಿ ಜುಲೈ ತಿಂಗಳಲ್ಲಿ ಬಿತ್ತನೆ ಕಾರ್ಯ ಶುರುವಾಗಲಿದೆ. ಹೀಗಾಗಿ ಆತಂಕಪಡುವ ಅಗತ್ಯ ಇಲ್ಲ ಎಂದು ವಿವರಿಸಿದರು.

ಚಾಮರಾಜನಗರ ಜಿಲ್ಲೆಯಲ್ಲಿ ಮೇ ತಿಂಗಳಲ್ಲೇ ಬಿತ್ತನೆಯಾಗಿದೆ. ಆದರೆ, ಜೂನ್ ತಿಂಗಳಲ್ಲಿ ನಿರೀಕ್ಷಿತ ಮಳೆಯಾಗಿಲ್ಲ. ಸದ್ಯಕ್ಕೆ ಬೆಳೆಗಳು ಒಣಗಿಲ್ಲ. ಆದರೆ, ವಾರದಲ್ಲಿ ಮಳೆಯಾಗದಿದ್ದರೆ ಸಮಸ್ಯೆಯಾಗಬಹುದು. ಉಳಿದಂತೆ ಎಲ್ಲ ಕಡೆ ಬಿತ್ತನೆ ಕಾರ್ಯ ಚುರುಕಾಗಿದೆ ಎಂದರು.

ಹೆಸರು, ಅಲಸಂದೆ, ಉದ್ದು, ಶೇಂಗಾ, ತೊಗರಿ, ಭತ್ತ, ಜೋಳ, ಮೆಕ್ಕೆಜೋಳ, ಸಜ್ಜೆ ಬೆಳೆಯ ಬಿತ್ತನೆ ಪ್ರಮಾಣ ಜಾಸ್ತಿ ಆಗಿದೆ.

ಎಣ್ಣೆಕಾಳುಗಳಾದ ಸೂರ್ಯಕಾಂತಿ, ಸೋಯಾ ಅವರೆ, ಎಳ್ಳು, ಹರಳು, ವಾಣಿಜ್ಯ ಬೆಳೆಗಳಾದ ಹತ್ತಿ, ಕಬ್ಬು, ತಂಬಾಕು ಇತ್ಯಾದಿಗಳ ಬಿತ್ತನೆಯೂ ಚೆನ್ನಾಗಿ ಆಗಿದೆ. ಆಗಸ್ಟ್ ತಿಂಗಳವರೆಗೂ ಬಿತ್ತನೆಗೆ ಅವಕಾಶ ಇದೆ. ಹೀಗಾಗಿ ಕೆಲವೆಡೆ ಮಳೆ ಆಗದೆ ಇದ್ದರೂ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

ಮಳೆ ಪ್ರಮಾಣ: ಏಪ್ರಿಲ್, ಮೇ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿತ್ತು. ಜೂನ್ ತಿಂಗಳಲ್ಲಿ ಇದುವರೆಗೆ ವಾಡಿಕೆಗಿಂತ ಅಧಿಕ ಮಳೆಯಾಗಿದೆ.
ವಾಡಿಕೆ ಪ್ರಕಾರ ಜೂನ್‌ನಲ್ಲಿ 19 ರವರೆಗೆ 109 ಮಿ.ಮೀ. ಮಳೆಯಾಗಬೇಕಿತ್ತು. ಆದರೆ, 143.12 ಮಿ.ಮೀ. ಮಳೆಯಾಗಿದೆ. ಕರಾವಳಿ ಪ್ರದೇಶ ಮತ್ತು ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾಸನ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ರಾಮನಗರ, ಗುಲ್ಬರ್ಗ, ಮಂಡ್ಯ, ಬೀದರ್, ಧಾರವಾಡ, ಹಾವೇರಿ, ಚಿತ್ರದುರ್ಗ, ತುಮಕೂರು, ಗದಗ, ಬಾಗಲಕೋಟೆ, ಮೈಸೂರು ಜಿಲ್ಲೆಯ ಕೆಲವು ಭಾಗಗಳಲ್ಲಿ ಸಾಧಾರಣ/ಹಗುರ ಮಳೆಯಾಗಿದೆ. ಉಳಿದ ಕಡೆ ಮಳೆಯಾಗಿಲ್ಲ ಎಂದು ತಿಳಿಸಿದರು.

ಬಿತ್ತನೆ ಬೀಜ: ಮುಂಗಾರು ಹಂಗಾಮಿನಲ್ಲಿ 10.68 ಲಕ್ಷ ಕ್ವಿಂಟಲ್ ಬಿತ್ತನೆ ಬೀಜಗಳ ಅಗತ್ಯವಿದೆ ಎಂದು ಅಂದಾಜು ಮಾಡಲಾಗಿದ್ದು, ಇದುವರೆಗೆ 5.97 ಲಕ್ಷ ರೈತರಿಗೆ 1.89 ಲಕ್ಷ ಕ್ವಿಂಟಲ್ ಬಿತ್ತನೆ ಬೀಜಗಳನ್ನು ವಿತರಿಸಲಾಗಿದೆ. ಅಲ್ಲದೆ ರೈತ ಸಂಪರ್ಕ ಕೇಂದ್ರಗಳಲ್ಲಿ 1.81 ಲಕ್ಷ ಕ್ವಿಂಟಲ್ ಬಿತ್ತನೆ ಬೀಜ ದಾಸ್ತಾನು ಮಾಡಲಾಗಿದೆ. ಬಿತ್ತನೆ ಬೀಜ ಕೊರತೆ ಇರುವ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ. ಎಲ್ಲ ಕಡೆ ಬಿತ್ತನೆ ಬೀಜಗಳ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದರು.

ರಸಗೊಬ್ಬರ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ 23.40 ಲಕ್ಷ ಟನ್ ರಸಗೊಬ್ಬರಕ್ಕೆ ಬೇಡಿಕೆ ಇದೆ. ಇದುವರೆಗೆ 4.54 ಲಕ್ಷ ಟನ್ ಮಾರಾಟವಾಗಿದ್ದು, 7.80 ಲಕ್ಷ ಟನ್ ಸಂಗ್ರಹವಿದೆ. ಯಾವುದೇ ಮಾದರಿಯ ರಸಗೊಬ್ಬರದ ಕೊರತೆ ಇಲ್ಲ. ರೈತರಿಗೆ ಅಗತ್ಯವಿರುವ ಪ್ರಮಾಣದಲ್ಲಿ ರಸಗೊಬ್ಬರ ಪೂರೈಸಲು ಜಂಟಿ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT