ADVERTISEMENT

ರಾಯಚೂರು: ಅಂಬೇಡ್ಕರ್ ಭಾವಚಿತ್ರ ತೆರವು- ವ್ಯಾಪಕ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 27 ಜನವರಿ 2022, 21:42 IST
Last Updated 27 ಜನವರಿ 2022, 21:42 IST
ರಾಯಚೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು
ರಾಯಚೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು   

ರಾಯಚೂರು: ‘ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಗಣರಾಜ್ಯೋತ್ಸವ ದಿನದಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಧ್ವಜಾರೋಹಣ ನೆರವೇರಿಸಲಾಗಿದೆ’ ಎಂದು ಆರೋಪಿಸಿ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಪ್ರಗತಿಪರ ಸಂಘಟನೆಗಳಿಂದ ಜಿಲ್ಲೆಯಾದ್ಯಂತ ಗುರುವಾರ ವ್ಯಾಪಕ ಆಕ್ರೋಶ ವ್ಯಕ್ತವಾಯಿತು.

ರಾಯಚೂರು ನಗರದಲ್ಲಿ ಮಧ್ಯಾಹ್ನ 2 ಗಂಟೆವರೆಗೂ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾಕಾರರು ಧರಣಿ ನಡೆಸಿದ್ದರಿಂದ ವಾಹನ ಸಂಚಾರ ಸ್ಥಗಿತವಾಗಿತ್ತು. ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಗಡೀಪಾರು ಮಾಡುವಂತೆ ಆಗ್ರಹಪಡಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.

ಕೆಲವರು ಅಂಗಡಿಗಳನ್ನುಸ್ವಯಂಪ್ರೇರಿತರಾಗಿ ಬಂದ್ ಮಾಡಿದ್ದರು. ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ವಾಹನಗಳು ಮಧ್ಯಾಹ್ನದವರೆಗೂ ನಿಂತಿದ್ದವು. ಎಲ್ಲ ತಾಲ್ಲೂಕು ಹಾಗೂ ಹೋಬಳಿ ಕೇಂದ್ರಗಳಲ್ಲಿಯೂ ಪ್ರತಿಭಟನೆ ನಡೆದವು.

ADVERTISEMENT

ವಜಾಗೊಳಿಸಲು ಶಾಸಕ ಶಿವನಗೌಡ ಒತ್ತಾಯ: ‘ಗಣರಾಜ್ಯೋತ್ಸವದಿನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿರುವ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾ ಮಾಡಬೇಕು‘ ಎಂದು ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಒತ್ತಾಯಿಸಿದ್ದಾರೆ.

‘ನ್ಯಾಯಾಂಗ ಹುದ್ದೆಯಲ್ಲಿರುವವರು ಸಂವಿಧಾನ ಶಿಲ್ಪಿಯ ಭಾವಚಿತ್ರಕ್ಕೆ ಅವಮಾನಿಸುವ ಮೂಲಕ ವಿಕೃತ ಮನಸ್ಥಿತಿ ಮೆರೆದಿದ್ದಾರೆ. ಅಂಬೇಡ್ಕರ್ ಅವರ ಭಾವಚಿತ್ರವಿದ್ದರೆ ಧ್ವಜಾರೋಹಣ ಮಾಡುವುದಿಲ್ಲ ಎಂದು ಉಡಾಫೆಯಿಂದ ಮಾತನಾಡಿರುವುದು ನಾಗರಿಕ ಸಮಾಜವು ತಲೆತಗ್ಗಿಸಬೇಕಾದ ಸಂಗತಿ‘ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.