ADVERTISEMENT

30ಕ್ಕೆ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಸ್ವಾಭಿಮಾನ ಸಮಾವೇಶ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2012, 19:59 IST
Last Updated 25 ಡಿಸೆಂಬರ್ 2012, 19:59 IST

ಬೆಂಗಳೂರು: ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ಘಟಕವು ಇದೇ 30ರಂದು ಹುಬ್ಬಳ್ಳಿಯಲ್ಲಿ ವಿಭಾಗೀಯ ಮಟ್ಟದ ಸ್ವಾಭಿಮಾನ ಸಮಾವೇಶ ಆಯೋಜಿಸಿದೆ.

ಪಕ್ಷದ ಸೂಚನೆ ಪ್ರಕಾರ ನಾಲ್ಕು ವಿಭಾಗಗಳಲ್ಲಿ ಈ ರೀತಿಯ ಸಮಾವೇಶ ಹಮ್ಮಿಕೊಳ್ಳಲಾಗುವುದು. ಹುಬ್ಬಳ್ಳಿಯಲ್ಲಿ ಮೊದಲ ಸಮಾವೇಶ ನಡೆಸುತ್ತಿದ್ದು, ಬಿಜೆಪಿ ಸರ್ಕಾರದ ವೈಫಲ್ಯಗಳ ಬಗ್ಗೆ ಜನಜಾಗೃತಿ ಮೂಡಿಸಲಾಗುವುದು ಎಂದು ಘಟಕದ ಅಧ್ಯಕ್ಷ ಎನ್.ಮಂಜುನಾಥ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕೇಂದ್ರ ಸರ್ಕಾರದ ಪ್ರಗತಿಪರ ಕಾರ್ಯಕ್ರಮಗಳ ಬಗ್ಗೆಯೂ ಜನ ಜಾಗೃತಿ ಮೂಡಿಸಲಾಗುವುದು. ರಾಜ್ಯದ ಉಸ್ತುವಾರಿ ಹೊತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ಅವರು ಸಮಾವೇಶಕ್ಕೆ ಚಾಲನೆ ನೀಡುವರು. ಕೆಪಿಸಿಸಿ ಅಧ್ಯಕ್ಷಡಾ.ಜಿ.ಪರಮೇಶ್ವರ್, ಕೇಂದ್ರ ಕಾರ್ಮಿಕ ಸಚಿವ ಎಂ.ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಅವರು ಭಾಗವಹಿಸಲಿದ್ದಾರೆ ಎಂದರು.

ವರದಿ ಮಂಡಿಸಲಿ: ಪರಿಶಿಷ್ಟರಿಗೆ ಒಳಮೀಸಲಾತಿ ಕಲ್ಪಿಸುವ ಸಂಬಂಧ ನ್ಯಾಯಮೂರ್ತಿ ಎ.ಜೆ.ಸದಾಶಿವ ಅವರು ಕೊಟ್ಟಿರುವ ವರದಿಯನ್ನು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಬೇಕು ಎಂದು ಅವರು ಆಗ್ರಹಿಸಿದರು.

ಆಯೋಗದ ವರದಿಯನ್ನು ಸರ್ಕಾರ ಬೀಗ ಹಾಕಿ ಎತ್ತಿಟ್ಟಿದೆ. ಅದರ ಪೂರ್ಣ ಮಾಹಿತಿಯನ್ನು ಬಹಿರಂಗಗೊಳಿಸಿಲ್ಲ. ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿಯೂ ಅದನ್ನು ಮಂಡಿಸಲಿಲ್ಲ. ಮುಂದಿನ ಬಾರಿಯಾದರೂ ಇದನ್ನು ಮಂಡಿಸಿ ಚರ್ಚೆಗೆ ಅವಕಾಶ ನೀಡಿದರೆ ಈ ಬಗ್ಗೆ ಕಾಂಗ್ರೆಸ್ ತನ್ನ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸಲಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.