ADVERTISEMENT

3,800 ಗ್ರಾಮ ಪಂಚಾಯಿತಿಗಳು ಬಿಜೆಪಿ ತೆಕ್ಕೆಗೆ: ಮುಖ್ಯಮಂತ್ರಿ ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2020, 7:42 IST
Last Updated 31 ಡಿಸೆಂಬರ್ 2020, 7:42 IST
ಯಡಿಯೂರಪ್ಪ ಪತ್ರಿಕಾಗೋಷ್ಠಿ
ಯಡಿಯೂರಪ್ಪ ಪತ್ರಿಕಾಗೋಷ್ಠಿ   

ಬೆಂಗಳೂರು: ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇಕಡ 60ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಗುರುವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು' 'ಒಟ್ಟು 5,728 ಗ್ರಾಮ ಪಂಚಾಯಿತಿಗಳ ಪೈಕಿ 3,800 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರಿಗೆ ಬಹುಮತ ಲಭಿಸಿದೆ' ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿನ ಫಲವಾಗಿ ಬಿಜೆಪಿಗೆ ಈ ಜಯ ದೊರಕಿದೆ. ವಿಧಾನಸಭಾ ಕ್ಷೇತ್ರಗಳು ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಗೆಲುವು ದೊರಕಿದೆ. ಹಿಂದೆ ಬಿಜೆಪಿ ಗೆಲ್ಲದ ಕ್ಷೇತ್ರಗಳಲ್ಲೂ ಬಿಜೆಪಿಗೆ ಗೆಲುವು ಸಿಕ್ಕಿದೆ ಎಂದರು.

ADVERTISEMENT

ಕೋವಿಡ್ ಸಂಕಷ್ಟದ ನಡುವೆಯೂ ರಾಜ್ಯದ ಅಭಿವೃದ್ಧಿ ಕುಂಠಿತ ಆಗದಂತೆ ಸರ್ಕಾರ ಕೆಲಸ ಮಾಡುತ್ತಿದೆ. ಈ ವರ್ಷ ವರಮಾನ ಸಂಗ್ರಹದಲ್ಲಿ ₹30,000 ಕೋಟಿ ಕೊರತೆ ಆಗಲಿದೆ. ಆದರೂ, ಸಾಲ‌ ಪಡೆದು ಅಭಿವೃದ್ಧಿ ಕಾರ್ಯ ಮುಂದುವರಿಸಲಾಗುವುದು ಎಂದರು.

ರಾಜ್ಯವನ್ನು ಅಭಿವೃದ್ಧಿ ವಿಚಾರದಲ್ಲಿ ಮೊದಲ ಸ್ಥಾನಕ್ಕೇರಿಸುವುದೇ ತಮ್ಮ ಗುರಿ. ಬೇರೆ ಯಾವ ವಿಚಾರಗಳಿಗೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.

ಗೊಂದಲ ಇಲ್ಲ: ನಾಯಕತ್ವ ಬದಲಾವಣೆ ಕುರಿತು ಚರ್ಚೆಯ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ' ನಮ್ಮ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ. ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಮುಂದಿನ ಎರಡೂವರೆ ವರ್ಷವೂ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ಮಾತ್ರ ಗೊಂದಲ ಇದೆ' ಎಂದರು.

ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ. ಕಾರಜೋಳ, ಡಾ.ಸಿ.ಎನ್. ಅಶ್ವತ್ಥನಾರಾಯಣ, ಸಚಿವರಾದ ಆರ್. ಅಶೋಕ, ಬಸವರಾಜ ಬೊಮ್ಮಾಯಿ, ಎಸ್. ಸುರೇಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.