ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಾಯಿತವಾಗಿರುವ ಪ್ರವಾಸಿ ಮಾರ್ಗದರ್ಶಿಗಳಿಗೆ ಕೋವಿಡ್ ಸಂಕಷ್ಟದ ಕಾರಣ ತಲಾ ₹ 5,000 ಪರಿಹಾರ ನೀಡುವುದಾಗಿ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಅವರು ಪ್ರಕಟಿಸಿದ್ದಾರೆ.
ಪ್ರವಾಸೋದ್ಯಮ ಇಲಾಖೆಯಲ್ಲಿ 384 ನೋಂದಾಯಿತ ಪ್ರವಾಸಿ ಗೈಡ್‍ಗಳಿದ್ದು, ಅವರೆಲ್ಲ ಸಂಕಷ್ಟದಲ್ಲಿದ್ದಾರೆ ಎಂದು ಅವರು ತಿಳಿಸಿದರು.
ಬೆಂಗಳೂರಿನ ಖನಿಜ ಭವನದಲ್ಲಿರುವ ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆ ಕಛೇರಿಯಲ್ಲಿ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಕೋವಿಡ್ ಲಾಕ್‍ಡೌನ್‍ನಿಂದ ಪ್ರವಾಸೋದ್ಯಮ ಕ್ಷೇತ್ರದ ಮೇಲಾಗಿರುವ ಪರಿಣಾಮಗಳ ಬಗ್ಗೆ ಅವರು ಮಾಹಿತಿ ಪಡೆದರು.
ಹೋಟೆಲ್ ಕಾರ್ಮಿಕರಿಗೆ ತಲಾ ₹ 3,000 ಪರಿಹಾರ ನೀಡಲು ಆರ್ಥಿಕ ಇಲಾಖೆಯಲ್ಲಿ ಚರ್ಚೆ ನಡೆಯುತ್ತಿದ್ದು, ಅತಿ ಶೀಘ್ರದಲ್ಲಿ ಸರ್ಕಾರಿ ಆದೇಶ ಹೊರಡಲಿದೆ ಎಂದು ಸಚಿವರು ಭರವಸೆ ನೀಡಿದರು.
ಕರ್ನಾಟಕ ಪ್ರವಾಸೋದ್ಯಮ ಸೊಸೈಟಿಯ ಪದಾಧಿಕಾರಿಗಳ ಜೊತೆ ಸಹ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸೊಸೈಟಿಯ ಪದಾಧಿಕಾರಿಗಳು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವವರ ಸಂಕಷ್ಟಗಳನ್ನು ವಿವರಿಸಿ ಪರಿಹಾರ ನೀಡುವಂತೆ ಮನವಿ ಮಾಡಿದರು. ಆಸ್ತಿ ತೆರಿಗೆಯನ್ನು ಮನ್ನಾ ಮಾಡಬೇಕು. ಮದ್ಯ ಪರವಾನಗಿ ಶುಲ್ಕವನ್ನು ಶೇ.50 ರಷ್ಟು ಮನ್ನಾ ಮಾಡಿ ಉಳಿದ ಶೇ.50 ರಷ್ಟು ಶುಲ್ಕವನ್ನು ಕಟ್ಟಲು ಈ ವರ್ಷದ ಡಿಸೆಂಬರ್ ಅಂತ್ಯದವರೆಗೆ ಸಮಯ ವಿಸ್ತರಿಸಬೇಕು ಹಾಗೂ ವಿದ್ಯುತ್‍ಚ್ಛಕ್ತಿ ದರದಲ್ಲಿ ರಿಯಾಯಿತಿ ನೀಡಬೇಕು ಎಂದು ಒತ್ತಾಯಿಸಿದರು.
ಪ್ರವಾಸೋದ್ಯಮ ವಾಹನಗಳ ತೆರಿಗೆಯನ್ನು ಆರು ತಿಂಗಳ ಅವಧಿಗೆ ಮನ್ನಾ ಮಾಡಬೇಕು. ಪ್ರವಾಸಿ ವಾಹನಗಳನ್ನು ಚಲಾಯಿಸುತ್ತಿರುವ ಚಾಲಕರಿಗೆ ₹ 3,000 ಕೋವಿಡ್ ಪರಿಹಾರ ಹಣವಾಗಿ ನೀಡಬೇಕು ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.