ADVERTISEMENT

ಈಶ್ವರಪ್ಪ, ಪ್ರತಾಪಸಿಂಹಗೆ ಹೈಕಮಾಂಡ್ ಎಚ್ಚರಿಕೆ

ವಿವಾದಕ್ಕೆ ಆಸ್ಪದ ನೀಡದೆ ಪಕ್ಷ ಸಂಘಟನೆಯಲ್ಲಿ ತೊಡಗಿ...

​ಪ್ರಜಾವಾಣಿ ವಾರ್ತೆ
Published 11 ಜನವರಿ 2018, 19:30 IST
Last Updated 11 ಜನವರಿ 2018, 19:30 IST

ನವದೆಹಲಿ: ಪಕ್ಷ ಸಂಘಟನೆಯಲ್ಲಿ ತೊಡಗಬೇಕು ಹಾಗೂ ಯಾವುದೇ ರೀತಿಯ ವಿವಾದಗಳಿಗೆ ಆಸ್ಪದ ನೀಡದಂತೆ ವರ್ತಿಸಬೇಕು ಎಂದು ಪಕ್ಷದ ಮುಖಂಡ ಕೆ.ಎಸ್‌. ಈಶ್ವರಪ್ಪ ಹಾಗೂ ಸಂಸದ ಪ್ರತಾಪ ಸಿಂಹ ಅವರಿಗೆ ಬಿಜೆಪಿ ಹೈಕಮಾಂಡ್‌ ಎಚ್ಚರಿಕೆ ನೀಡಿದೆ.

ರಾಜ್ಯದಲ್ಲಿ ಪಕ್ಷ ಆಯೋಜಿಸಿರುವ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸಿ, ಪಕ್ಷ ಸಂಘಟನೆಯಲ್ಲಿ ತೊಡಗಬೇಕು. ಅನಗತ್ಯ ಗೊಂದಲಕ್ಕೆ ಅವಕಾಶ ನೀಡಬಾರದು ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ಮುಖಂಡ ಕೆ.ಎಸ್‌. ಈಶ್ವರಪ್ಪ ಅವರಿಗೆ ವರಿಷ್ಠರು ತಿಳಿಸಿದ್ದಾರೆ ಎಂದು ರಾಜ್ಯ ಬಿಜೆಪಿಯ ಹಿರಿಯ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಕಾರ್ಯವೈಖರಿಯ ಕುರಿತು ಈಶ್ವರಪ್ಪ ಅವರು ಇತ್ತೀಚೆಗೆ ಹೈಕಮಾಂಡ್‌ಗೆ ದೂರು ನೀಡಿದ್ದರು. ರಾಜ್ಯ ವಿಧಾನಸಭೆ ಚುನಾವಣೆಯ ಟಿಕೆಟ್‌ ಕುರಿತು ಯಾರಿಗೂ ಆಶ್ವಾಸನೆ ನೀಡದಂತೆ ಹಾಗೂ ಟಿಕೆಟ್‌ ದೊರೆಯುವುದು ನಿಶ್ಚಿತ ಎಂದು ಘೋಷಿಸದಂತೆ ಯಡಿಯೂರಪ್ಪ ಅವರಿಗೆ ತಿಳಿಸಿದ್ದ ವರಿಷ್ಠರು, ಟಿಕೆಟ್‌ ಹಂಚಿಕೆಯ ಹೊಣೆ ಹೈಕಮಾಂಡ್‌ನದ್ದು ಎಂದೂ ಹೇಳಿದ್ದಾರೆ. ಜೊತೆಗೆ, ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವಂತಹ ಚಟುವಟಿಕೆಯಲ್ಲಿ ತೊಡಗದೆ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ಈಶ್ವರಪ್ಪ ಅವರಿಗೂ ಸೂಚಿಸಿದ್ದಾರೆ ಎಂದು ಅವರು ಹೇಳಿದರು.

ADVERTISEMENT

ವಿವಾದ ಸೃಷ್ಟಿಸುವಂತಹ ಟ್ವೀಟ್ ಮಾಡುವುದು ಹಾಗೂ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಸಾರ್ವಜನಿಕವಾಗಿ ಗಂಭೀರವಾಗಿ ವರ್ತಿಸಬೇಕು ಎಂದೂ ಇದೇ ವೇಳೆ ಸಂಸದ ಪ್ರತಾಪಸಿಂಹ ಅವರಿಗೂ ವರಿಷ್ಠರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ ಎಂದು ಅವರು ವಿವರಿಸಿದರು.

ಸಂವಿಧಾನ ಹಾಗೂ ಜಾತ್ಯತೀತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಅವರಿಗೂ ವರಿಷ್ಠರು ಇತ್ತೀಚೆಗಷ್ಟೇ ಎಚ್ಚರಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.