ADVERTISEMENT

‘ಅಕ್ಕಮಹಾದೇವಿ ವಿ.ವಿ.ಗೆ 4 ಎಕರೆ ಜಮೀನು’

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2018, 19:30 IST
Last Updated 21 ಫೆಬ್ರುವರಿ 2018, 19:30 IST

ವಿಜಯಪುರ:‘ಇಲ್ಲಿನ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕಾರ್ಯ ಚಟುವಟಿಕೆಗಳ ವಿಸ್ತರಣೆಗಾಗಿ ಬೆಂಗಳೂರಿನ ಹೆಸರಘಟ್ಟ ಹೋಬಳಿಯ ಅದ್ದಿಗಾನಹಳ್ಳಿ ಗ್ರಾಮದಲ್ಲಿ ನಾಲ್ಕು ಎಕರೆ ಭೂಮಿಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಬಿಹಾ ಹೇಳಿದರು.

ಈ ಭೂಮಿಯನ್ನು ವಶಕ್ಕೆ ಪಡೆದು ಅಭಿವೃದ್ಧಿಪಡಿಸಲು ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ. ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ಆರಂಭಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ ಯುಪಿಎಸ್‌ಸಿ, ಕೆಪಿಎಸ್‌ಸಿ, ಬ್ಯಾಂಕಿಂಗ್ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲರುವ ವಿ.ವಿ. ವ್ಯಾಪ್ತಿಯ ಕಾಲೇಜುಗಳ ಆಡಳಿತಾತ್ಮಕ, ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಮಹಿಳಾ ವಿ.ವಿ. ಪ್ರಾದೇಶಿಕ ಕಚೇರಿ ಆರಂಭಿಸಲಿದೆ’ ಎಂದು ಅವರು ಹೇಳಿದರು.

ADVERTISEMENT

‘ವಿ.ವಿ.ಯಲ್ಲಿ ಬೋಧಕರ ಹುದ್ದೆಗಳ ನೇಮಕಾತಿ ಆರಂಭಗೊಂಡಿದೆ. ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಅತ್ಯಂತ ಪಾರದರ್ಶಕವಾಗಿ, ಕಟ್ಟುನಿಟ್ಟಿನಿಂದ ಯುಜಿಸಿ, ಉನ್ನತ ಶಿಕ್ಷಣ ಇಲಾಖೆ ರೂಪಿಸಿರುವ ನಿಯಮಾವಳಿ ಅನುಸರಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.