ADVERTISEMENT

ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಒಟ್ಟು 59,772 ಶಿಕ್ಷಕರ ಹುದ್ದೆ ಖಾಲಿ: ಸಚಿವ

ವಿಧಾನಸಭೆಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2024, 13:55 IST
Last Updated 19 ಡಿಸೆಂಬರ್ 2024, 13:55 IST
ಮಧು ಬಂಗಾರಪ್ಪ
ಮಧು ಬಂಗಾರಪ್ಪ   

ಸುವರ್ಣ ವಿಧಾನಸೌಧ (ಬೆಳಗಾವಿ): ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಒಟ್ಟು 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಗುರುವಾರ ವಿಧಾನಸಭೆಗೆ ತಿಳಿಸಿದರು.

ಬಿಜೆಪಿಯ ಕೆ. ಗೋಪಾಲಯ್ಯ ಅವರ ಪರವಾಗಿ ಬೈರತಿ ಬಸವರಾಜ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ‘41,905 ಪ್ರಾಥಮಿಕ ಶಾಲೆಗಳಲ್ಲಿ 50,067 ಮತ್ತು 4,871 ಪ್ರೌಢ ಶಾಲೆಗಳಲ್ಲಿ 9,705 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ 43,968 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ’ ಎಂದರು.

‘ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ವೇಗ ನೀಡಲಾಗಿದೆ. 2022ರಲ್ಲಿ 15,000 ಶಿಕ್ಷಕರ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ಆರಂಭಿಸಲಾಗುತ್ತು, 13,352 ಮಂದಿ ಅರ್ಹತೆ ಪಡೆದಿದ್ದರು. ಈ ಪೈಕಿ 12,521 ಶಿಕ್ಷಕರಿಗೆ ನೇಮಕಾತಿ ಆದೇಶ ವಿತರಿಸಲಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವ ಕಾರಣದಿಂದ 700 ಶಿಕ್ಷಕರಿಗೆ ನೇಮಕಾತಿ ಆದೇಶ ವಿತರಣೆ ಆಗಿಲ್ಲ ಎಂದು ತಿಳಿಸಿದರು.

ADVERTISEMENT

ಕಲ್ಯಾಣ ಕರ್ನಾಟಕ ಪ್ರದೇಶದ ಏಳು ಜಿಲ್ಲೆಗಳ ವ್ಯಾಪ್ತಿಯಲ್ಲಿ ಪ್ರಾಥಮಿಕ ಶಾಲೆಗಳ 4,882 ಮತ್ತು ಪ್ರೌಢ ಶಾಲೆಗಳ 385 ಶಿಕ್ಷಕರ ಹುದ್ದೆಗಳ ಭರ್ತಿಗೆ ಅಕ್ಟೋಬರ್‌ 7ರಂದು ಒಪ್ಪಿಗೆ ದೊರಕಿದೆ ಎಂದರು.

ಗೌರವಧನ ಹೆಚ್ಚಳಕ್ಕೆ ಪ್ರಯತ್ನ: ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ₹12,000 ಗೌರವ ಧನ ನೀಡಲಾಗುತ್ತಿದೆ. ಈ ಮೊತ್ತವನ್ನು ಹೆಚ್ಚಳ ಮಾಡಲು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದರು.

ಬಿಜೆಪಿಯ ಸಿ.ಸಿ. ಪಾಟೀಲ ಅವರ ಪರವಾಗಿ ವಿ. ಸುನಿಲ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಳಕ್ಕೆ ಸಲ್ಲಿಸಿದ್ದ ಪ್ರಸ್ತಾವವನ್ನು ಹಣಕಾಸು ಇಲಾಖೆ ತಿರಸ್ಕರಿಸಿದೆ. ಮುಖ್ಯಮಂತ್ರಿಯವರ ಜೊತೆ ಈ ವಿಷಯ ಮತ್ತೊಮ್ಮೆ ಪ್ರಸ್ತಾಪಿಸಿ, ಒಪ್ಪಿಗೆ ಪಡೆಯಲು ಪ್ರಯತ್ನಿಸುತ್ತೇನೆ’ ಎಂದರು.

‘ಅತಿಥಿ ಉಪನ್ಯಾಸಕರಿಗೆ ಫೆಬ್ರುವರಿ ತಿಂಗಳ ಗೌರವಧನ ತಡೆ ಹಿಡಿಯಲಾಗಿದೆ. ಅತ್ಯಂತ ಕಡಿಮೆ ಗೌರವ ಧನ ನೀಡಲಾಗುತ್ತಿದೆ. ಎಸ್. ಬಂಗಾರಪ್ಪನವರ ಮಗ ನೀವು. ಗಟ್ಟಿಯಾಗಿ ನಿರ್ಧಾರ ಕೈಗೊಳ್ಳಿ’ ಎಂದು ಸುನಿಲ್ ಕುಮಾರ್ ಹೇಳಿದರು.

‘ಎನ್‌ಎಚ್‌ಎಂ ಸಿಬ್ಬಂದಿ ಸೇವೆ ಕಾಯಂ ಇಲ್ಲ’

‘ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್‌ಎಚ್‌ಎಂ) ಅಡಿ ಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡಿರುವ ಸಿಬ್ಬಂದಿಯ ಸೇವೆಯನ್ನು ಕಾಯಮಾತಿ ಮಾಡುವ ಪ್ರಸ್ತಾವ ಇಲ್ಲ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ವಿಧಾನಸಭೆಗೆ ತಿಳಿಸಿದರು. ಬಿಜೆಪಿಯ ಯಶ್‌ಪಾಲ್ ಎ. ಸುವರ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ‘ವಾರ್ಷಿಕ ಶೇಕಡ 15ರಷ್ಟು ವೇತನ ಹೆಚ್ಚಳ ಒಂದು ಬಾರಿ ವರ್ಗಾವಣೆಗೆ ಅವಕಾಶ ನೇಮಕಾತಿಯಲ್ಲಿ ಶೇ 2ರಷ್ಟು ಕೃಪಾಂಕ ₹10 ಲಕ್ಷ ಮೊತ್ತದ ನಿಶ್ಚಿತ ವಿಮೆ ಆಯುಷ್ಮಾನ್‌ ಭಾರತ್‌– ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ಸೌಲಭ್ಯವನ್ನು ಎನ್‌ಎಚ್‌ಎಂ ಸಿಬ್ಬಂದಿಗೆ ನೀಡಲಾಗುತ್ತಿದೆ’ ಎಂದರು. 2022–23ರಲ್ಲಿ ಎನ್‌ಎಚ್‌ಎಂ ಸಿಬ್ಬಂದಿಯ ವೇತನದಲ್ಲಿ ಶೇ 15ರಷ್ಟು ಹೆಚ್ಚಳ ಮಾಡಲಾಗಿತ್ತು. 2024–25ನೇ ಸಾಲಿನಲ್ಲೂ ಶೇ 15ರಷ್ಟು ವೇತನ ಹೆಚ್ಚಳ ಮಾಡುವ ಪ್ರಸ್ತಾವ ಪರಿಶೀಲನೆಯಲ್ಲಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.