ADVERTISEMENT

ಬಿಟ್‌ಕಾಯಿನ್ ಹಗರಣದಲ್ಲಿ ಭಾಗಿಯಾಗಿರುವವರೇ ₹ 6,000 ಕೋಟಿ ದೋಚಿರಬಹುದು: ಎಚ್‌ಡಿಕೆ

ಜೆಡಿಎಸ್‌ ನಾಯಕ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2021, 16:31 IST
Last Updated 11 ನವೆಂಬರ್ 2021, 16:31 IST
ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ
ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ   

ಬೆಂಗಳೂರು: ಬಿಟ್‌ಕಾಯಿನ್‌ ಹಗರಣದಲ್ಲಿ ಭಾಗಿಯಾಗಿರುವ ತಂಡವೇ ಜನ್‌ಧನ್‌ ಖಾತೆಗಳಿಂದ ತಲಾ ₹ 2ರಂತೆ ₹ 6,000 ಕೋಟಿಯಷ್ಟು ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿರುವ ಮಾಹಿತಿ ಇದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ‘ಇಷ್ಟೊಂದು ದೊಡ್ಡ ಮೊತ್ತದ ಹಣದ ಅಕ್ರಮ ವರ್ಗಾವಣೆ ಹಿಂದೆ ಯಾರಿದ್ದಾರೆ ಎಂಬ ಮಾಹಿತಿ ಜನರಿಗೆ ತಿಳಿಯಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹುಶಃ ಈ ಎಲ್ಲ ಮಾಹಿತಿ ಚೆನ್ನಾಗಿ ತಿಳಿದಿದೆ. ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರಬಹುದು’ ಎಂದರು.

ಬಿಟ್‌ಕಾಯಿನ್‌ ಹಗರಣದ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷ ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುತ್ತಿದೆ. ಆ ಕಲ್ಲು ಯಾರಿಗೆ ಬೀಳುತ್ತದೆ? ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕರ ಸಮೀಪವರ್ತಿಗಳ ಕೆಲವು ಹೆಸರುಗಳು ಈಗಾಗಲೇ ಬಹಿರಂಗವಾಗಿವೆ.ಆದರೆ, ಕಾಂಗ್ರೆಸ್‌ ನಾಯಕರು ಬಿಜೆಪಿಯವರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ADVERTISEMENT

ಸರ್ಕಾರ ಏನು ಮಾಡುತ್ತಿದೆ?: ರಾಜ್ಯದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಂತ್ರಿಗಳು, ಅಧಿಕಾರಿಗಳು ಏನು ಮಾಡುತ್ತಿದ್ದಾರೋ ತಿಳಿಯದು. ರಾಜ್ಯದಲ್ಲಿ ಸರ್ಕಾರ ಇದೆಯೋ? ಇಲ್ಲವೋ? ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.