ADVERTISEMENT

ಸಾಲಮನ್ನಾ: ಉಡುಪಿಗೆ ₹77.72 ಕೋಟಿ ಬಿಡುಗಡೆ

ರೈತರಿಗೆ ಸಾಲಮನ್ನಾ ಮಾಹಿತಿ ನೀಡಲು ಐವನ್ ಡಿಸೋಜ ಸೂಚನೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2019, 15:36 IST
Last Updated 10 ಜೂನ್ 2019, 15:36 IST
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಕಂದಾಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಕಂದಾಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.   

ಉಡುಪಿ: ಸಾಲಮನ್ನಾ ಯೋಜನೆಯಡಿ ಜಿಲ್ಲೆಯ ರೈತರ ಖಾತೆಗೆ ಬಿಡುಗಡೆಯಾದ ಮೊತ್ತದ ಬಗ್ಗೆ ರೈತರಿಗೆ ಸಮರ್ಪಕ ಮಾಹಿತಿ ನೀಡಬೇಕು ಎಂದು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಅಧಿಕಾರಿಗಳಿಗೆ ಸೂಚಿಸಿದರು.‌

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ, ಸಾರ್ವಜನಿಕರ ಕುಂದುಕೊರತೆಗಳನ್ನು ಸ್ವೀಕರಿಸಿ ಮಾತನಾಡಿದರು.

ಉಡುಪಿ ಜಿಲ್ಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿ 4,720 ಖಾತೆಗಳು ಹಾಗೂ ಸಹಕಾರ ಸಂಘಗಳಲ್ಲಿ 24,232 ರೈತರ ಖಾತೆಗಳು ಸಾಲಮನ್ನಾ ಯೋಜನೆ ವ್ಯಾಪ್ತಿಗೆ ಒಳಪಡುತ್ತವೆ. ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ ₹ 8.26 ಕೋಟಿ ಹಾಗೂ ಸಹಕಾರಿ ಬ್ಯಾಂಕ್‍ಗಳಿಗೆ ₹ 69.46 ಕೋಟಿಯನ್ನು ಈಗಾಗಲೇ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದು, ರೈತರ ಖಾತೆಗಳಿಗೆ ಜಮೆಯಾಗಿ, ಸಾಲಮನ್ನಾವಾಗಿದೆ ಎಂದರು.

ADVERTISEMENT

ಬಹುತೇಕ ಬ್ಯಾಂಕ್‌ಗಳು ಸಾಲ ಮನ್ನಾ ಮಾಹಿತಿಯನ್ನು ರೈತರಿಗೆ ನೀಡದಿರುವುದರಿಂದ ಸಾಲಮನ್ನಾ ಆಗಿರುವ ಬಗ್ಗೆ ರೈತರಿಗೆ ಮಾಹಿತಿ ಇಲ್ಲ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ರೈತನಿಗೂ ಪತ್ರದ ಮೂಲಕ ಮಾಹಿತಿ ನೀಡಬೇಕು ಎಂದು ಅವರು ಸೂಚಿಸಿದರು.

ಪಿಂಚಣಿ ಯೋಜನೆಗಳ ಫಲಾನುಭವಿಗಳಿಗೆ ಪ್ರತಿ ತಿಂಗಳು ಸಕಾಲದಲ್ಲಿ ಪಿಂಚಣಿ ಲಭ್ಯವಾಗುವಂತೆ ಮುತುವರ್ಜಿ ವಹಿಸಬೇಕು. ಪಿಂಚಣಿ ಅದಾಲತ್ ಮೂಲಕ ಪಿಂಚಣಿ ವಿಳಂಬದಲ್ಲಿ ಆಗಿರುವ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಐವನ್ ಡಿಸೋಜ ಹೇಳಿದರು.

ಭೂ ಮಂಜೂರಾತಿಗೆ ಸಂಬಂಧಿಸಿದಂತೆ 94 ‘ಸಿ’ ಅಡಿಯಲ್ಲಿ 33,728 ಅರ್ಜಿಗಳು ಹಾಗೂ 94 ‘ಸಿಸಿ’ ಅಡಿಯಲ್ಲಿ 8,921 ಅರ್ಜಿಗಳು ಉಡುಪಿ ಜಿಲ್ಲೆಯಲ್ಲಿ ಸ್ವೀಕೃತವಾಗಿದೆ. ಈ ಪೈಕಿ ಶೇ 86 ರಷ್ಟು ಅರ್ಜಿಗಳು ವಿಲೇವಾರಿಯಾಗಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಭೂದಾಖಲೆಗಳ ತಿದ್ದುಪಡಿಗೆ ಸಂಬಂಧಿಸಿದಂತೆ ಗ್ರಾಮ ಮಟ್ಟದಲ್ಲೇ ವಿಶೇಷ ಅದಾಲತ್ ನಡೆಸಿ ಪರಿಹಾರ ಒದಗಿಸಬೇಕು. ಭೂಪರಿವರ್ತನೆಗೆ ಆನ್‍ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು ಎಂದರು.

ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮಾತನಾಡಿ, ಜಿಲ್ಲೆಗೆ ಒಂದು ಉಪವಿಭಾಗ ಮಾತ್ರ ಇದ್ದು, ಆಡಳಿತಾತ್ಮಕ ದೃಷ್ಟಿಯಿಂದ ಉಡುಪಿಯಲ್ಲಿ ಮತ್ತೊಂದು ಉಪವಿಭಾಗ ರಚನೆಯ ಅಗತ್ಯವಿದೆ. ಗ್ರಾಮ ಕರಣಿಕರಿಗೆ ಆಯಾ ಗ್ರಾಮದಲ್ಲಿಯೇ ಕಚೇರಿ ಒದಗಿಸಲು ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನವನ್ನು ಸರ್ಕಾರದಿಂದ ಮಂಜೂರುಗೊಳಿಸಬೇಕು ಎಂದು ಮನವಿ ಮಾಡಿದರು.

ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮಂಜೂರಾದ ಸರ್ಕಾರದ ಭೂಮಿಗಳಲ್ಲಿ ಕೆಲವೆಡೆ ಡೀಮ್ಡ್ ಫಾರೆಸ್ಟ್ ಸಮಸ್ಯೆ ಇದ್ದು, ಅದನ್ನು ಬಗೆಹರಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಕೆಯಾಗಿದೆ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಐವನ್ ಡಿಸೋಜ, ಉಡುಪಿಗೆ ಪ್ರತ್ಯೇಕ ಉಪ ವಿಭಾಗ ರಚಿಸಲು ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಕುಂದಾಪುರ ಉಪ ವಿಭಾಗಾಧಿಕಾರಿ ಮಧುಕೇಶ್ವರ್, ತಹಶೀಲ್ದಾರ್‌ಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.