ವಿಧಾನಸೌಧ
ಬೆಂಗಳೂರು: ಬೆಳ್ಳಂದೂರು ಕೆರೆಯ ಅಭಿವೃದ್ಧಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚುವರಿಯಾಗಿ ಅಗತ್ಯ ಇರುವ ₹ 79.67 ಕೋಟಿಯ ಪೈಕಿ ಶೇಕಡ 25ರಷ್ಟು ಮೊತ್ತವನ್ನು ಬಿಡಿಎ ಕೆರೆ ಪುನಶ್ಚೇತನ ಶುಲ್ಕ ಒಳಗೊಂಡಂತೆ ಇತರ ಸ್ವಂತ ಆರ್ಥಿಕ ಸಂಪನ್ಮೂಲಗಳಿಂದ ಭರಿಸಲು ಸೂಚಿಸಿ, ಶೇ 75ರಷ್ಟು ಅನುದಾನವನ್ನು ಸರ್ಕಾರದಿಂದ ಮಂಜೂರು ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
‘ಬೆಳ್ಳಂದೂರು ಕೆರೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚುವರಿ ಹಣ ಅಗತ್ಯ ಇದ್ದರೆ ಪ್ರತ್ಯೇಕವಾಗಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಸೂಚಿಸಿತ್ತು. ಬೆಳ್ಳಂದೂರು ಕೆರೆಯ ಪುನಶ್ಚೇತನ ಮತ್ತು ಅಭಿವೃದ್ಧಿ ಕಾಮಗಾರಿಗೆ ₹ 79.67 ಕೋಟಿ ಹೆಚ್ಚುವರಿ ಅನುದಾನ ಅಗತ್ಯವಿದೆ ಎಂದು ನಗರಾಭಿವೃದ್ಧಿ ಇಲಾಖೆಯು ಪ್ರಸ್ತಾವ ಸಲ್ಲಿಸಿತ್ತು’ ಎಂದು ಸಚಿವ ಸಂಪುಟ ಸಭೆಯ ಬಳಿಕ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
‘ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 308 ಎಂಎಲ್‌ಡಿ ನೀರಿನಿಂದ 259 ಕೆರೆಗಳನ್ನು ತುಂಬಿಸುವ ಮೂಲ ಯೋಜನೆಯ ಪೈಕಿ, ಲಿಫ್ಟ್-4 ಗೋಪಾಲಪುರ ಕೆರೆಯಿಂದ ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ 41 ಕೆರೆಗಳಿಗೆ ನೀರು ತುಂಬಿಸುವ ₹ 280 ಕೋಟಿ (ವಿಶ್ವಬ್ಯಾಂಕ್ ಠೇವಣಿ ಕೊಡುಗೆ ₹ 250 ಕೋಟಿ, ರಾಜ್ಯ ಸರ್ಕಾರದ ₹ 30 ಕೋಟಿ) ಅಂದಾಜು ಮೊತ್ತದ ಯೋಜನೆಗೂ ಸಭೆ ಅನುಮೋದನೆ ನೀಡಿದೆ’ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.