ADVERTISEMENT

7ನೇ ವೇತನ ಆಯೋಗ: ಲಿಖಿತ ಭರವಸೆ ಸಿಕ್ಕರೆ ಮುಷ್ಕರ ವಾಪಸ್: ಸಿ.ಎಸ್.ಷಡಾಕ್ಷರಿ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2023, 22:15 IST
Last Updated 25 ಫೆಬ್ರುವರಿ 2023, 22:15 IST
ಸಿ.ಎಸ್‌. ಷಡಾಕ್ಷರಿ
ಸಿ.ಎಸ್‌. ಷಡಾಕ್ಷರಿ   

ಶಿವಮೊಗ್ಗ: ‘7ನೇ ವೇತನ ಆಯೋಗದ ಮಧ್ಯಂತರ ವರದಿ ಅನುಷ್ಠಾನದ ಬಗ್ಗೆ ಸರ್ಕಾರ ಆದೇಶ ಹೊರಡಿಸಿದರೆ ಮಾತ್ರ ಈಗ ಕರೆ ನೀಡಿರುವ ಮಾರ್ಚ್ 1ರಂದು ನಡೆಯುವ ಮುಷ್ಕರ ವಾಪಸ್ ಪಡೆಯಲಾಗುವುದು’ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘7 ನೇ ವೇತನ ಆಯೋಗದಿಂದ ಶೀಘ್ರ ಮಧ್ಯಂತರ ವರದಿ ಪಡೆದು ಜಾರಿ ಮಾಡುವಂತೆ ಈ ಹಿಂದಿನಿಂದಲೂ ಒತ್ತಾಯಿಸುತ್ತಲೇ ಬಂದಿದ್ದೇವೆ. ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆ ಮಾಡುವ ನಿರೀಕ್ಷೆ ಇತ್ತಾದರೂ ಅದು ಹುಸಿಯಾಗಿದೆ. ಅನಿವಾರ್ಯವಾಗಿ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದೇವೆ’ ಎಂದು ಹೇಳಿದರು. ‘ಸರ್ಕಾರಿ ನೌಕರರ ಸಂಘಟನೆಗಳ 5,000ಕ್ಕೂ ಹೆಚ್ಚು ಪ್ರತಿನಿಧಿಗಳು ಬೆಂಗಳೂರಿನಲ್ಲಿ ಫೆಬ್ರುವರಿ 21ರಂದು ಸಭೆ ಸೇರಿ ಪ್ರತಿಭಟನೆ ನಡೆಸುವ ತೀರ್ಮಾನ ಕೈಗೊಂಡಿದ್ದೇವೆ. ಗ್ರಾಮ ಪಂಚಾಯಿತಿಯಿಂದ ವಿಧಾನಸೌಧದ
ವರೆಗೆ ಎಲ್ಲ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗಲಿದ್ದಾರೆ. ಶಿಕ್ಷಣ ಕ್ಷೇತ್ರದ ಸೇವೆಗಳೂ ಲಭ್ಯ ಇರುವುದಿಲ್ಲ’ ಎಂದರು.

‘ಜುಲೈ 1, 2022ರಿಂದ ಜಾರಿಗೆ ಬರುವಂತೆ ಶೇ 40ರಷ್ಟು ವೇತನ ಹೆಚ್ಚಳ ಸೌಲಭ್ಯ ಒದಗಿಸಬೇಕು. ಎನ್‌ಪಿಎಸ್ ರದ್ದು ಮಾಡಿ, ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ತರಬೇಕು ಎಂಬ ಎರಡು ಪ್ರಮುಖ ಬೇಡಿಕೆಗಳನ್ನು ಈಗಾಗಲೇ ಸರ್ಕಾರದ ಮುಂದೆ ಇಡಲಾಗಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.