ADVERTISEMENT

'ಆತ್ಮನಿರ್ಭರ' ಅಡಿ ಉತ್ಪನ್ನದ ಮೌಲ್ಯವರ್ಧನೆ ಮಾಡುವ ಘಟಕಗಳಿಗೆ ₹ 10 ಲಕ್ಷ ಸಹಾಯಧನ

ತುಂತುರು ಮಳೆಯಲ್ಲೂ ಸಂಭ್ರಮದ ಸ್ವಾತಂತ್ರ್ಯೋತ್ಸವ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2020, 7:08 IST
Last Updated 15 ಆಗಸ್ಟ್ 2020, 7:08 IST
ಬೆಳಗಾವಿಯಲ್ಲಿ ಜಿಲ್ಲಾಡಳಿತ ಶನಿವಾರ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿವಿಧ ಇಲಾಖೆಗಳ ಹಾಸ್ಟೆಲ್‌ಗಳ ವಿದ್ಯಾರ್ಥಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸತ್ಕರಿಸಿದರುಪ್ರಜಾವಾಣಿ ಚಿತ್ರ
ಬೆಳಗಾವಿಯಲ್ಲಿ ಜಿಲ್ಲಾಡಳಿತ ಶನಿವಾರ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿವಿಧ ಇಲಾಖೆಗಳ ಹಾಸ್ಟೆಲ್‌ಗಳ ವಿದ್ಯಾರ್ಥಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸತ್ಕರಿಸಿದರುಪ್ರಜಾವಾಣಿ ಚಿತ್ರ   

ಬೆಳಗಾವಿ: ‘ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬನೆಗಾಗಿ ಜಿಲ್ಲೆಯ ಒಂದು ಉತ್ಪನ್ನ ಆಯ್ಕೆ ಮಾಡಿ ಅದರ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ಬ್ರಾಡಿಂಗ್‌ ಉದ್ದೇಶ ಹೊಂದಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.

ಜಿಲ್ಲಾಡಳಿತದಿಂದ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ 74ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

‘ಯೋಜನೆಯಡಿ ನಿರ್ದಿಷ್ಟ ಉತ್ಪನ್ನದ ಮೌಲ್ಯವರ್ಧನೆ ಮಾಡುವ ಘಟಕಗಳಿಗೆ ಯೋಜನಾ ಮೊತ್ತದ ಶೇ 35ರಷ್ಟು ಅಥವಾ ಗರಿಷ್ಠ ₹ 10 ಲಕ್ಷದವರೆಗೆ ಸಹಾಯಧನ ನೀಡಲಾಗುವುದು’ ಎಂದು ಹೇಳಿದರು.

ADVERTISEMENT

ರಸಗೊಬ್ಬರ ಕೊರತೆ ಇಲ್ಲ:

‘ಮುಂಗಾರು ಹಂಗಾಮಿನಲ್ಲಿ 6.88 ಲಕ್ಷ ಹೆಕ್ಟೇರ್‌ ಬಿತ್ತನೆ ಗುರಿ ಇದ್ದು, ಶೇ 99ರಷ್ಟು ಬಿತ್ತನೆಯಾಗಿದೆ. ಫಸಲು ಉತ್ತಮವಾಗಿದೆ. ರಿಯಾಯಿತಿ ದರದಲ್ಲಿ 1.74 ಲಕ್ಷ ರೈತರಿಗೆ ₹ 12.02 ಕೋಟಿ ಅನುದಾನದಲ್ಲಿ 46,446 ಕ್ವಿಂಟಲ್ ಉತ್ತಮ ಗುಣಮಟ್ಟದ ಬಿತ್ತನೆಬೀಜಗಳನ್ನು ವಿತರಿಸಲಾಗಿದೆ. ಜಿಲ್ಲೆಗೆ 2,54,850 ಮೆಟ್ರಿಕ್‌ ಟನ್‌ ರಸಗೊಬ್ಬರ ನಿಗದಿಯಾಗಿದ್ದು, ಈವರೆಗೆ 1,48,962 ಮೆಟ್ರಿಕ್‌ ಟನ್‌ ಪೂರೈಕೆಯಾಗಿದೆ. ಸದ್ಯಕ್ಕೆ ರಸಗೊಬ್ಬರದ ಕೊರತೆ ಇಲ್ಲ’ ಎಂದು ತಿಳಿಸಿದರು.

‘ರೈತರ ಸಾಲ ಮನ್ನಾ ಯೋಜನೆಯಲ್ಲಿ ಜಿಲ್ಲೆಯ 2.87 ಲಕ್ಷ ಕೃಷಿಕರ ಸಾಲ ₹ 1,162 ಕೋಟಿ ಮನ್ನಾ ಆಗುವ ಬಗ್ಗೆ ಅಂದಾಜಿಸಲಾಗಿದೆ. ಈವರೆಗೆ 2,59,441 ರೈತರ ₹ 1,017.94 ಕೋಟಿ ಬಿಡುಗಡೆಯಾಗಿದೆ. ಕೃಷಿ ಚಟುವಟಿಕೆ ಕೈಗೊಳ್ಳಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ ಸಾಲವಾಗಿ 2019–20ನೇ ಸಾಲಿನಲ್ಲಿ 3.80 ಲಕ್ಷ ರೈತರಿಗೆ ₹ 1,893 ಕೋಟಿ ಮತ್ತು ಶೇ 3 ಬಡ್ಡಿ ದರದಲ್ಲಿ 1,086 ರೈತರಿಗೆ ₹ 32 ಕೋಟಿ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲ ವಿತರಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಸರಳ ಆಚರಣೆ:

ಕೊರೊನಾ ಸೋಂಕಿನ ಕಾರಣದಿಂದಾಗಿ ಉತ್ಸವವನ್ನು ಸರಳವಾಗಿ ಆಚರಿಸಲಾಯಿತು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರಲಿಲ್ಲ. ತುಂತುರು ಮಳೆಯ ನಡುವೆಯೇ ಧ್ವಜಾರೋಹಣ, ಪಥಸಂಚಲನ ಹಾಗೂ ಸಚಿವರಿಂದ ಭಾಷಣ ನಡೆಯಿತು. ಪಥಸಂಚಲನದಲ್ಲಿ ಪೊಲೀಸರು, ಅಬಕಾರಿ, ಅರಣ್ಯ ಇಲಾಖೆ, ಅಗ್ನಿಶಾಮಕ ದಳದ ತುಕಡಿಗಳಷ್ಟೇ ಪಾಲ್ಗೊಂಡಿದ್ದವು. ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಪಾಲ್ಗೊಳ್ಳಲು ಅವಕಾಶವಿರಲಿಲ್ಲ. ಸಾಂಸ್ಕೃತಿಕ ಕಾರ್ಯಕ್ರಮ ಕೂಡ ನಡೆಯಲಿಲ್ಲ.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಧಾನಪರಿಷತ್ ಸದಸ್ಯ ಡಾ.ಸಾಬಣ್ಣ ತಳವಾರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ಐಜಿಪಿ ರಾಘವೇಂದ್ರ ಸುಹಾಸ್, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಲ್ಲಾ ಪಂಚಾಯಿತಿ ಸಿಇಒ ದರ್ಶನ್‌ ಎಚ್.ವಿ., ಪೊಲೀಸ್
ಆಯುಕ್ತರಾದ ಕೆ. ತ್ಯಾಗರಾಜನ್, ಎಸ್ಪಿ ಲಕ್ಷ್ಮಣ ನಿಂಬರಗಿ, ಡಿಸಿಪಿ ಸೀಮಾ ಲಾಟ್ಕರ್, ಎಡಿಸಿ ಅಶೋಕ ದುಡಗುಂಟಿ, ಬುಡಾ ಆಯುಕ್ತ ಪ್ರೀತಂ ನಸಲಾಪುರೆ, ತಹಶೀಲ್ದಾರ್‌ ಆರ್.ಕೆ. ಕುಲಕರ್ಣಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.