ADVERTISEMENT

ಜಿಎಸ್‌ಟಿ ಪರಿಹಾರ ಪಾವತಿಗೆ ಕ್ರಮ: ಕೇಂದ್ರ ಸಚಿವೆ ನಿರ್ಮಲಾ ಭರವಸೆ

ಬಾಕಿ ಉಳಿದ ₹11 ಸಾವಿರ ಕೋಟಿ

​ಪ್ರಜಾವಾಣಿ ವಾರ್ತೆ
Published 2 ಜುಲೈ 2021, 21:01 IST
Last Updated 2 ಜುಲೈ 2021, 21:01 IST
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದ ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಬೇಡಿಕೆಗಳನ್ನು ಮಂಡಿಸಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದ ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಬೇಡಿಕೆಗಳನ್ನು ಮಂಡಿಸಿದರು.   

ಬೆಂಗಳೂರು: ಕಳೆದ ವರ್ಷದ ಸರಕು ಸೇವಾ ತೆರಿಗೆ (ಜಿಎಸ್‌ಟಿ) ಪರಿಹಾರ ಬಾಕಿ ₹ 11,800 ಕೋಟಿ ಪಾವತಿಗೆ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭರವಸೆ ನೀಡಿದ್ದಾರೆ ಎಂದು ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಜಿಎಸ್‌ಟಿ ಮಂಡಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಬೊಮ್ಮಾಯಿ ಅವರು, ಬೆಂಗಳೂರಿಗೆ ಬಂದಿರುವ ನಿರ್ಮಲಾ ಸೀತಾರಾಮನ್‌ ಅವರನ್ನು ಶುಕ್ರವಾರ ಭೇಟಿಯಾಗಿ ಚರ್ಚೆ ನಡೆಸಿದರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸಚಿವರಿಂದ ಸಕಾರಾತ್ಮಕ ಭರವಸೆ ಸಿಕ್ಕಿದೆ. ಕಳೆದ ವರ್ಷದಂತೆ ಈ ವರ್ಷವೂ ಜಿಎಸ್‌ಟಿ ಪರಿಹಾರ ₹18,000 ಕೋಟಿ ಹಣವನ್ನು ಕೇಂದ್ರವು ಸಾಲ ಪಡೆದು ರಾಜ್ಯಕ್ಕೆ ಒದಗಿಸಲಿದೆಎಂದರು.

ADVERTISEMENT

2021–22 ನೇ ಸಾಲಿನ ಮೊದಲ ತ್ರೈಮಾಸಿಕ ಅವಧಿಯಲ್ಲಿ ಸಂಗ್ರಹವಾಗಿರುವ ಜಿಎಸ್‌ಟಿ ಪಾಲಿನ ಮೊದಲ ಕಂತನ್ನು ರಾಜ್ಯಕ್ಕೆ ಬಿಡುಗಡೆ ಮಾಡುವಂತೆಯೂ ಮನವಿ ಮಾಡಿದ್ದು, ಅದಕ್ಕೆ ನಿರ್ಮಲಾ ಒಪ್ಪಿಗೆ ನೀಡಿದರು. ಕೋವಿಡ್‌ ನಿರ್ವಹಣೆ ಮತ್ತು ಮೂರನೇ ಅಲೆ ತಯಾರಿಗೆ ಬೇಕಾದ ಹಣಕಾಸಿನ ವ್ಯವಸ್ಥೆಗಳ ಕುರಿತು ಚರ್ಚಿಸಲಾಯಿತು. ಕೋವಿಡ್‌ ನಿರ್ವಹಣೆಗೆ ಹಣಕಾಸಿನ ಅಭಾವ ಆಗದಂತೆ ನೋಡಿಕೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆಂದು ಬೊಮ್ಮಾಯಿಹೇಳಿದರು.

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ತನ್ನ ಪಾಲಿನ ಹಣ ಬಿಡುಗಡೆ ಮಾಡಲು ಅವರು ಒಪ್ಪಿಕೊಂಡಿದ್ದಾರೆ. ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಗಳಡಿ ರಾಜ್ಯ ಸರ್ಕಾರಕ್ಕೆ ಬಿಡುಗಡೆ ಆಗಬೇಕಿರುವ ಹಣಕಾಸಿನ ನೆರವಿನ ಮಾಹಿತಿ ನೀಡಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ನಿರ್ಮಲಾ, ತ್ವರಿತಗತಿಯಲ್ಲಿ ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ತನ್ನ ಪಾಲಿನ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ರಾಜ್ಯ ಸರ್ಕಾರ ಕೋವಿಡ್‌ ಎರಡನೇ ಅಲೆ ನಿರ್ವಹಣೆ ಮಾಡಿದ ರೀತಿ, ಬಡವರಿಗೆ ನೀಡಲಾದ ಪ್ಯಾಕೇಜ್‌, ಕೋವಿಡ್‌ನಿಂದ ಸಾವನ್ನಪ್ಪಿದ ಬಿಪಿಎಲ್‌ ಕುಟುಂಬಗಳಿಗೆ ತಲಾ ₹1 ಲಕ್ಷ ಪರಿಹಾರ, ಖಾಸಗಿ ಆಸ್ಪತ್ರೆಗಳ ಸಹಕಾರದೊಂದಿಗೆ ಕೋವಿಡ್‌ ಎರಡನೇ ಅಲೆಯನ್ನು ನಿಭಾಯಿಸಿದ ಬಗ್ಗೆ ನಿರ್ಮಲಾ ಮೆಚ್ಚುಗೆ ವ್ಯಕ್ತಪಡಿಸಿದರು ಎಂದೂ ಅವರುತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.