ADVERTISEMENT

ಕಡಿಮೆ ತೆರಿಗೆ ವಸೂಲಿಯಾದರೆ ಪಿಡಿಒಗಳ ಮೇಲೆ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2024, 16:23 IST
Last Updated 2 ಫೆಬ್ರುವರಿ 2024, 16:23 IST
<div class="paragraphs"><p> ಸಚಿವ ಪ್ರಿಯಾಂಕ್‌ ಖರ್ಗೆ</p></div>

ಸಚಿವ ಪ್ರಿಯಾಂಕ್‌ ಖರ್ಗೆ

   

ಬೆಂಗಳೂರು: ಪ್ರತಿ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಅತ್ಯಂತ ಕಡಿಮೆ ತೆರಿಗೆ ವಸೂಲಿ ಮಾಡಿರುವ ತಲಾ 10 ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ನೋಟಿಸ್‌ ಜಾರಿಗೊಳಿಸಿ, ಕ್ರಮ ಜರುಗಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದ್ದಾರೆ.

ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ (ಸಿಒ) ಜತೆ ಶುಕ್ರವಾರ ವಿಡಿಯೊ ಕಾನ್ಫರೆನ್ಸಿಂಗ್‌ ನಡೆಸಿದ ಅವರು, ಈ ಸೂಚನೆ ನೀಡಿದರು. ಸಚಿವರ ಸೂಚನೆ ಆಧರಿಸಿ ಸಿಇಒಗಳಿಗೆ ಸುತ್ತೋಲೆ ಹೊರಡಿಸಿರುವ ಇಲಾಖೆಯ ನಿರ್ದೇಶಕರು, ಪಿಡಿಒಗಳ ವಿರುದ್ಧ ಕ್ರಮ ಜರುಗಿಸಿ ಸೋಮವಾರದ ಒಳಗೆ ಮಾಹಿತಿ ಸಲ್ಲಿಸುವಂತೆ ಗಡುವು ನೀಡಿದ್ದಾರೆ.

ADVERTISEMENT

ಗ್ರಾಮ ಪಂಚಾಯಿತಿಗಳಲ್ಲಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಪ್ರಗತಿ ಕುಂಠಿತವಾಗಿರುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ತೆರಿಗೆ ಸಂಗ್ರಹದಲ್ಲಿ ಗುರಿ ತಲುಪಲು ನಿರಾಸಕ್ತಿ ತಳೆದಿರುವುದಕ್ಕೆ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಕಡತ ಒಪ್ಪಿಸಲು ನಿರ್ದೇಶನ

ಅನುದಾನದ ಬಳಕೆ ಕುರಿತು ಸಾಮಾಜಿಕ ಲೆಕ್ಕಪರಿಶೋಧನೆಗೆ ಕಡ್ಡಾಯವಾಗಿ ಕಡತ ಒಪ್ಪಿಸಬೇಕೆಂಬ ಆದೇಶವನ್ನು ಹಲವು ಗ್ರಾಮ ಪಂಚಾಯಿತಿಗಳಲ್ಲಿ ಪಾಲಿಸುತ್ತಿಲ್ಲ. ಎಲ್ಲ ಪಂಚಾಯಿತಿಗಳಲ್ಲೂ ತಕ್ಷಣ ಕಡತ ಒಪ್ಪಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ಬೇಸಿಗೆ ಆರಂಭವಾಗುತ್ತಿದ್ದು, ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ತೀವ್ರವಾಗುವ ಸಾಧ್ಯತೆ ಇದೆ. ಆದ್ದರಿಂದ ಎಲ್ಲ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು ಕುಡಿಯುವ ನೀರಿನ ಕೊರತೆ ಪರಿಹರಿಸಲು ತಕ್ಷಣದಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್‌, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಆಯುಕ್ತಾಲಯದ ಆಯುಕ್ತ ಪವನ್‌ ಕುಮಾರ್‌ ಮಾಲಪಾಟಿ, ಗ್ರಾಮೀಣ ನೀರು ಸರಬರಾಜು ಇಲಾಖೆ ಆಯುಕ್ತ ಕೆ. ನಾಗೇಂದ್ರ ಪ್ರಸಾದ್‌ ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.