ಬೆಂಗಳೂರು: ಮುಖ್ಯಮಂತ್ರಿಯವರ ಅಮೃತ ನಗರೋತ್ಥಾನ ಯೋಜನೆಯಡಿ ರಾಜ್ಯದ ಮೂರು ಜಿಲ್ಲೆಗಳ ಏಳು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೆತ್ತಿಕೊಳ್ಳಲಿರುವ ₹61.86 ಕೋಟಿ ವೆಚ್ಚದ ಕಾಮಗಾರಿಗಳ ಕ್ರಿಯಾಯೋಜನೆಗಳಿಗೆ ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜು ಅಧ್ಯಕ್ಷತೆಯ ಉನ್ನತಮಟ್ಟದ ಸಮಿತಿ ಶುಕ್ರವಾರ ಒಪ್ಪಿಗೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ನಗರಸಭೆಯ ₹19.36 ಕೋಟಿ, ಸೋಮೇಶ್ವರ ಪುರಸಭೆಯ ₹ 8.5 ಕೋಟಿ, ಕೋಟೆಕಾರು ಪಟ್ಟಣ ಪಂಚಾಯಿತಿಯ ₹4.25 ಕೋಟಿ, ಬೆಳಗಾವಿ ಜಿಲ್ಲೆ ಚಿಕ್ಕೋಡಿ ಹಾಗೂ ಸದಲಗಾ ಪುರಸಭೆಗಳ ತಲಾ ₹ 8.5 ಕೋಟಿ, ರಾಯಚೂರು ಚಿಲ್ಲೆಯ ಮಾನವಿ ಪುರಸಭೆಯ ₹ 8.5 ಕೋಟಿ ಮತ್ತು ಕವಿತಾಳ ಪಟ್ಟಣ ಪಂಚಾಯಿತಿಯ ₹ 4.25 ಕೋಟಿ ವೆಚ್ಚದ ಕಾಮಗಾರಿಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದೆ.
ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ‘ಮುಖ್ಯಮಂತ್ರಿಯವರ ಅಮೃತ ನಗರೋತ್ಥಾನ ಯೋಜನೆಯ ನಾಲ್ಕನೇ ಹಂತದಲ್ಲಿ ₹ 3,885 ಕೋಟಿ ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಂಪುಟ ಸಭೆ ಅನುಮೋದನೆ ನೀಡಿದೆ. ಅದಕ್ಕೆ ಪೂರಕವಾಗಿ ಈವರೆಗೆ 299 ನಗರ ಸ್ಥಳೀಯ ಸಂಸ್ಥೆಗಳ ಕ್ರಿಯಾಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. 271 ಸ್ಥಳೀಯ ಸಂಸ್ಥೆಗಳಲ್ಲಿ ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.